ಬೆಂಗಳೂರು ಮಳೆ
ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ.
ಆರೆಂಜ್ ಅಲರ್ಟ್ ಎಂದರೆ 11 ಸೆಂ.ಮೀ ನಿಂದ 20 ಸೆಂ.ಮೀ ಮಳೆಯಾಗುವ ಸಂಭವವಿದೆ.
ನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಕೆ ನೀಡಿದೆ. ತಾತ್ಕಾಲಿಕ ವಿದ್ಯುತ್ ಅಡಚಣೆ ಉಂಟಾಗಲಿದ್ದು, ಮನೆಗಳಿಗೆ ಹಾನಿಯಾಗುವ ಸಂಭವವಿದೆ, ಮರಗಳು ಧಾರಾಶಾಹಿಯಾಗುವ ಸಾಧ್ಯತೆ ಇದ್ದು, ನಾಗರಿಕರು ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದೆ.
ಗುರುವಾರ ಬೆಳಿಗ್ಗೆ 5.30ಕ್ಕೆ ಅಂತ್ಯಗೊಂಡ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 52.8 ಮಿ.ಮೀ ಮಳೆಯಾಗಿದೆ ಎಂದು ಅದು ಮಾಹಿತಿ ನೀಡಿದೆ.
ಮುಂದಿನ 48 ಗಂಟೆಯಲ್ಲಿ ನಗರದಾದ್ಯಂತ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆ ಹಾಗೂ ಗುಡುಗು, ಇನ್ನು ಕೆಲವೆಡೆ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮುಂದಿನ ಮೂರು ದಿನಗಳಲ್ಲಿ ಕಲಬುರಗಿ, ವಿಜಯನಗರ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯ ಕೆಲವೆಡೆ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿ ಹಾಗೂ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.