ADVERTISEMENT

ಮೂಲ ಸೌಕರ್ಯಕ್ಕೆ ಮತ್ತೆ ₹50 ಕೋಟಿ: ಪ್ರಸ್ತಾವ

ಯಶವಂತಪುರ ಕ್ಷೇತ್ರದ ಕಸ ಸಂಸ್ಕರಣಾ ಘಟಕ

​ಪ್ರಜಾವಾಣಿ ವಾರ್ತೆ
Published 18 ಜನವರಿ 2022, 19:51 IST
Last Updated 18 ಜನವರಿ 2022, 19:51 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಯಶವಂತಪುರ ಕ್ಷೇತ್ರದ ಕಸ ಸಂಸ್ಕರಣಾ ಘಟಕಗಳ ಸುತ್ತಲಿನ ಪ್ರದೇಶಗಳಲ್ಲಿ ₹50 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಅನುಮೋದನೆ ಕೋರಿ ಬಿಬಿಎಂಪಿಯು ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವ ಸಲ್ಲಿಸಿದೆ.

ಪ್ರತಿ ಘಟಕದ ಸುತ್ತ ₹10 ಕೋಟಿ ವೆಚ್ಚದಲ್ಲಿ ಬಿಬಿಎಂಪಿ ಅನುದಾನದಲ್ಲಿ ಕಾಮಗಾರಿ ನಡೆಸಲು ಒಪ್ಪಿಗೆ ನೀಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ಅವರು ಪ್ರಸ್ತಾವದಲ್ಲಿ ಕೋರಿದ್ದಾರೆ. ಪ್ರಸ್ತಾವವು ಪರಿಶೀಲನೆಯ ಹಂತದಲ್ಲಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಮೂಲಗಳು ತಿಳಿಸಿವೆ.

’ಬಿಬಿಎಂಪಿಯ ಕಸವನ್ನು ನಗರದ ಹೊರವಲಯದಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಹೀಗಾಗಿ, ಆ ಕ್ಷೇತ್ರಗಳ ಅಭಿವೃದ್ಧಿಗೆ (ನೆಲಮಂಗಲ, ದೇವನಹಳ್ಳಿ, ಮಾಗಡಿ, ರಾಮನಗರ) ₹50 ಕೋಟಿ ಅನುದಾನ ನೀಡಲಾಗುತ್ತಿದೆ‘ ಎಂದು ಮುಖ್ಯಮಂತ್ರಿಯಾಗಿದ್ದ ವೇಳೆ ಎಚ್‌.ಡಿ.ಕುಮಾರಸ್ವಾಮಿ ಪ್ರಕಟಿಸಿದ್ದರು. ಬಿಜೆಪಿ ಸರ್ಕಾರ ಆ ಅನುದಾನವನ್ನು ತಡೆ ಹಿಡಿದಿತ್ತು. ಬಳಿಕ ಈ ಅನುದಾನವನ್ನು ಯಶವಂತಪುರ ಕ್ಷೇತ್ರದ ಕಸ ಸಂಸ್ಕರಣಾ ಘಟಕಗಳ ಸುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ವರ್ಗಾಯಿಸಲಾಗಿತ್ತು. ಇದೀಗ ಮತ್ತೆ ಆ ಪ್ರದೇಶಗಳ ಅಭಿವೃದ್ಧಿಗೆ ಅನುದಾನ ಕೋರಿರುವುದು ಚರ್ಚೆಗೆ ಗ್ರಾಸವಾಗಿದೆ.

ADVERTISEMENT

ಪಾಲಿಕೆ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುತ್ತಿರುವ ಕಸವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ವಿಲೇವಾರಿ ಮಾಡಲು 7 ಸಂಸ್ಕರಣಾ ಘಟಕಗಳನ್ನು ಹಾಗೂ ಒಂದು ಭೂಭರ್ತಿ ಘಟಕವನ್ನು ಸ್ಥಾಪಿಸಲಾಗಿದೆ. ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಪ್ರತಿನಿಧಿಸುವ ಯಶವಂತಪುರ ಕ್ಷೇತ್ರದಲ್ಲಿ ದೊಡ್ಡಬಿದರಕಲ್ಲು, ಕನ್ನಹಳ್ಳಿ, ಸೀಗೆಹಳ್ಳಿ, ಸುಬ್ಬರಾಯನಪಾಳ್ಯ ಹಾಗೂ ಲಿಂಗಧೀರನಹಳ್ಳಿಯಲ್ಲಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲಾಗಿದೆ. ಈ ಘಟಕಗಳಿಂದ ತಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ ಎಂದು ಗ್ರಾಮಸ್ಥರು ಪ್ರತಿಭಟಿಸಿದ್ದರು. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೂಲಸೌಕರ್ಯ ಕಾಮಗಾರಿ ನಡೆಸಿ ಗ್ರಾಮಸ್ಥರ ಮನವೊಲಿಸಿ ಕಸ ಸಂಸ್ಕರಣೆ ಮಾಡುವುದು ಸೂಕ್ತ ಎಂದು ಸಚಿವರು ಬಿಬಿಎಂಪಿಗೆ ಪತ್ರ ಬರೆದಿದ್ದರು.

ಸ್ಥಳೀಯರ ವಿರೋಧದಿಂದಾಗಿ ಸೀಗೆಹಳ್ಳಿ, ಸುಬ್ಬರಾಯನಪಾಳ್ಯ ಹಾಗೂ ಲಿಂಗಧೀರನಹಳ್ಳಿ ಘಟಕಗಳು ಸ್ಥಗಿತಗೊಂಡಿವೆ. ದೊಡ್ಡಬಿದರಕಲ್ಲು ಹಾಗೂ ಕನ್ನಹಳ್ಳಿ ಘಟಕಗಳಲ್ಲಿ ವಿನ್ಯಾಸದ ಸಾಮರ್ಥ್ಯಕ್ಕಿಂತ ಕಡಿಮೆ ಕಸವನ್ನು ಸಂಸ್ಕರಣೆ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಈ ಘಟಕಗಳ ಸ್ಥಾಪನೆಗೆ ಸರ್ಕಾರದ ಹಾಗೂ ಪಾಲಿಕೆ ಅನುದಾನದಿಂದ ವೆಚ್ಚ ಮಾಡಲಾಗಿದೆ. ಹೀಗಾಗಿ, ಘಟಕಗಳನ್ನು ಪುನರಾರಂಭಿಸುವುದು ಸೂಕ್ತ. ಇದಕ್ಕಾಗಿ ಮೂಲಸೌಕರ್ಯ ಕಾಮಗಾರಿಗಳನ್ನು ನಡೆಸಬೇಕು. ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ ಎಂದು ಗೌರವ್‌ ಗುಪ್ತ ಪ್ರಸ್ತಾವದಲ್ಲಿ ತಿಳಿಸಿದ್ದಾರೆ.

’ತಮ್ಮ ಕ್ಷೇತ್ರದಲ್ಲಿರುವ ಘನತ್ಯಾಜ್ಯ ಘಟಕಗಳ ಅಭಿವೃದ್ಧಿ ಹಾಗೂ ಮೂಲಸೌಕರ್ಯದ ಹೆಸರಿನಲ್ಲಿ ಕೆಲವು ಜನಪ್ರತಿನಿಧಿಗಳು ಹೆಚ್ಚುವರಿ ಅನುದಾನ ಕೋರುತ್ತಿರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಕಳೆದ 15 ವರ್ಷಗಳಲ್ಲಿ ಘನತ್ಯಾಜ್ಯ ವಿಲೇವಾರಿಗೆ ಮಾಡಿದ ವೆಚ್ಚದ ಬಗ್ಗೆ ಲೆಕ್ಕಪರಿಶೋಧನೆ ನಡೆಸಬೇಕು. ಆಗ ಅನುದಾನ ದುರುಪಯೋಗದ ಸತ್ಯ ಮಾಹಿತಿ ಹೊರ ಬರಲಿದೆ‘ ಎಂದು ಬಿಬಿಎಂಪಿಯ ಹಿರಿಯ ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.