ಬೆಟ್ಟಹಲಸೂರು ಗ್ರಾಮಪಂಚಾಯಿತಿಯ ಮೊದಲಸುತ್ತಿನ ಗ್ರಾಮಸಭೆಯಲ್ಲಿ ಪಂಚಾಯಿತಿ ಅಧ್ಯಕ್ಷೆ ಹೇಮಲತ.ಎಸ್ ನಾಗರಾಜು ಅವರು, ಅಂಗನವಾಡಿ ಕೇಂ ದ್ರಗಳ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಟಿವಿ ಹಸ್ತಾಂತರಿಸಿದರು.
ಯಲಹಂಕ: ಬೆಟ್ಟಹಲಸೂರು ಗ್ರಾಮಪಂಚಾಯಿತಿಯ 2025-26ನೇ ಸಾಲಿನ ಮೊದಲ ಸುತ್ತಿನ ಗ್ರಾಮಸಭೆಯನ್ನು ಪಂಚಾಯಿತಿ ಅಧ್ಯಕ್ಷೆ ಹೇಮಲತಾ ಎಸ್. ನಾಗರಾಜು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ‘ಗ್ರಾಮ ಪಂಚಾಯಿತಿಯನ್ನು ತ್ಯಾಜ್ಯ ಮುಕ್ತವಾಗಿಸುವ ನಿಟ್ಟಿನಲ್ಲಿ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಏಕಬಳಕೆ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಬಿಸಾಡುವುದನ್ನು ತಡೆಗಟ್ಟುವ ಸಲುವಾಗಿ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಕಳೆದವರ್ಷ ₹ 5.5 ಕೋಟಿ ತೆರಿಗೆ ಸಂಗ್ರಹಣೆ ಮಾಡಲಾಗಿದ್ದು, ಈ ವರ್ಷ ₹ 8 ಕೋಟಿ ಸಂಗ್ರಹಿಸುವ ಗುರಿ ಹೊಂದಲಾಗಿದೆ’ ಎಂದು ತಿಳಿಸಿದರು.
ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಈಗಾಗಲೆ ವಾರ್ಡ್ ಸಭೆಗಳನ್ನು ನಡೆಸಿ, ಸಾರ್ವಜನಿಕರ ಸಮಸ್ಯೆಗಳು ಹಾಗೂ ಬೇಡಿಕೆಗಳ ಕುರಿತ ಅಹವಾಲುಗಳನ್ನು ಸ್ವೀಕರಿಸಲಾಗಿದೆ. ಈ ಸಂಬಂಧ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ, ಕ್ರಿಯಾಯೋಜನೆ ಸಿದ್ಧಪಡಿಸಿ, ಅನುದಾನದ ಲಭ್ಯತೆಯ ಆಧಾರದಲ್ಲಿ ಸಾರ್ವಜನಿಕರ ಬೇಡಿಕೆಗಳನ್ನು ಈಡೇರಿಸಲು ನಿರ್ಣಯ ಕೈಗೊಳ್ಳಲಾಗುವುದು ಎಂದರು.
ಸವಲತ್ತುಗಳ ವಿತರಣೆ: ಅಂಗನವಾಡಿ ಕೇಂದ್ರಗಳಿಗೆ ಸ್ಮಾರ್ಟ್ ಟಿವಿ, ಅಂಗವಿಕಲರಿಗೆ ಯುಡಿ-ಐಡಿ ಕಾರ್ಡ್, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನದ ಚೆಕ್ ವಿತರಿಸಲಾಯಿತು.
ಆರೋಗ್ಯ ಶಿಬಿರ:ಇದೇ ಸಂದರ್ಭದಲ್ಲಿ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ವೈದ್ಯರು ಮಧುಮೇಹ, ರಕ್ತದೊತ್ತಡ ಹಾಗೂ ಕಣ್ಣಿಗೆ ಸಂಬಂಧಿಸಿದಂತೆ ತಪಾಸಣೆ ನಡೆಸಿದರು. ಅಗತ್ಯವಿದ್ದವರಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸಲಾಯಿತು.
ಪಂಚಾಯಿತಿ ಉಪಾಧ್ಯಕ್ಷ ಬಿ.ಆರ್.ಪ್ರವೀಣ್, ಮಾಜಿ ಅಧ್ಯಕ್ಷ ಬಿ.ಎಸ್.ಅನಿಲ್‌ಕುಮಾರ್, ಮಾಜಿ ಉಪಾಧ್ಯಕ್ಷೆ ವಿಮಲಾ ಗಣೇಶ್, ಸದಸ್ಯರಾದ ನವೀನ್‌ಕುಮಾರ್.ಟಿ.ಎಸ್, ಬಿ.ಕೆ.ರತ್ನಮ್ಮ ಆಂಜಿನಪ್ಪ, ರಾಮಾಂಜಿನಿ.ಬಿ.ಆರ್, ಪ್ರೇಮಾ ಮಂಜುನಾಥ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲೋಕನಾಥ್.ಪಿ.ಎಸ್, ಕಾರ್ಯದರ್ಶಿ ಎಂ.ಸುಬ್ರಮಣ್ಯ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.