ಬೆಂಗಳೂರು: ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರ ಬಂಧನವನ್ನು ಅಕ್ರಮ ಎಂದು ಘೋಷಿಸುವಂತೆ ಕೋರಿದ್ದ ಅವರ ಪತ್ನಿಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
‘ವೀರೇಂದ್ರ ಬಂಧನವನ್ನು ಅಕ್ರಮ ಎಂದು ಘೋಷಿಸಬೇಕು’ ಎಂದು ಕೋರಿ ಅವರ ಪತ್ನಿ ಆರ್.ಡಿ.ಚೈತ್ರಾ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಆಲಿಸಿ ಕಾಯ್ದಿರಿಸಿದ್ದ ಆದೇಶವನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ಐ.ಅರುಣ್ ಬುಧವಾರ ಪ್ರಕಟಿಸಿದರು.
‘ವೀರೇಂದ್ರ ವಿರುದ್ಧ ಕನಕಪುರ ತಾಲ್ಲೂಕಿನ ಹಾರೋಹಳ್ಳಿ ಠಾಣೆಯಲ್ಲಿ ಎಫ್‌ಐಆರ್ ಬಾಕಿ ಇದೆ. ಇದು ಪಿಎಂಎಲ್‌ಎ (ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ–2002) ಕಲಂಗೆ 2(1)(ಯು) ತಿದ್ದುಪಡಿ ತಂದಿರುವ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಬಂಧನ ಕ್ರಮ ಬಂಧನ ಮುಂದುವರಿಕೆಗೆ ಅವಕಾಶ ಕಲ್ಪಿಸುತ್ತದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಇ.ಡಿ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಅರವಿಂದ ಕಾಮತ್ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.