ಭೀಮ್ ಆರ್ಮಿ
(ಫೇಸ್‌ಬುಕ್ ಚಿತ್ರ)
ಬೆಂಗಳೂರು: ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಯ (ಟಿಎಸ್‌ಪಿ) ಅನುದಾನವನ್ನು ಗ್ಯಾರಂಟಿ ಯೋಜನೆ ಸೇರಿದಂತೆ ಇತರೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ರಾಜ್ಯ ಸರ್ಕಾರ ಬಳಕೆ ಮಾಡಿರುವುದು ಖಂಡನೀಯ ಎಂದು ಭೀಮ್ ಆರ್ಮಿ ತಿಳಿಸಿದೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭೀಮ್ ಆರ್ಮಿಯ ರಾಜ್ಯ ಘಟಕದ ಅಧ್ಯಕ್ಷ ರಾಜಗೋಪಾಲ್, ‘ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಬೇಕು. ಆದರೆ ರಾಜ್ಯ ಸರ್ಕಾರ ಇತರೆ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಬಳಕೆ ಮಾಡುತ್ತಿರುವುದು ಸರಿಯಲ್ಲ. ಇದರಿಂದ ನಮ್ಮ ಸಮುದಾಯಕ್ಕೆ ಅನ್ಯಾಯವಾಗುತ್ತದೆ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರು ಈ ಬಗ್ಗೆ ಕೂಡಲೇ ಸ್ಪಷ್ಟನೆ ನೀಡಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಅರಬೆತ್ತಲೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಸಂಘಟನೆಯ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ್ ಕುಮಾರ್, ಉಪಾಧ್ಯಕ್ಷ ಅನಿಲ್ ಕುಮಾರ್ ಸುದ್ದಿಗೋಷ್ಠಿಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.