ಬಂಧನ
(ಸಾಂದರ್ಭಿಕ ಚಿತ್ರ)
ಬೆಂಗಳೂರು: ಮನೆಗಳ ಮುಂಭಾಗ ಹಾಗೂ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನಗಳ ಹ್ಯಾಂಡಲ್ ಲಾಕ್ ಮುರಿದು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಹದೇವಪುರ ಪೊಲೀಸರು ಬಂಧಿಸಿದ್ದಾರೆ.
ವರುಣ್ ಕುಮಾರ್, ಮೊಹಮ್ಮದ್ ಹಾಗೂ ಕದ್ದ ವಾಹನಗಳನ್ನು ಖರೀದಿಸಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸಿ, ₹35 ಲಕ್ಷ ಮೌಲ್ಯದ 25 ವಾಹನಗಳನ್ನು ಜಪ್ತಿ ಮಾಡಲಾಗಿದೆ.
ಮಾರ್ಚ್ 6ರಂದು ಠಾಣಾ ವ್ಯಾಪ್ತಿಯ ಉದಯನಗರ ಗ್ರಾಮದ ನಿವಾಸಿಯೊಬ್ಬರು ಮನೆ ಮುಂದೆ ನಿಲ್ಲಿಸಿದ್ದ ವಾಹನ ಕಳವಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ವೈಟ್‌ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರನ್ನು ದ್ವಿಚಕ್ರ ವಾಹನ ಸಮೇತ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನಗರದ ವಿವಿಧೆಡೆ ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಒಂಬತ್ತು ದಿನ ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದಾಗ ಕಳವು ಮಾಡಿದ ದ್ವಿಚಕ್ರ ವಾಹನ ಪೈಕಿ 12 ವಾಹನವನ್ನು ಹಾವೇರಿಯ ಕರ್ಜಗಿ ಗ್ರಾಮದ ವ್ಯಕ್ತಿಯೊಬ್ಬರಿಗೆ ಮಾರಾಟ ಮಾಡಿರುವುದು ಗೊತ್ತಾಗಿದೆ. ನಂತರ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ಆತ ನೀಡಿದ ಮಾಹಿತಿ ಆಧರಿಸಿ, ಕಳವು ವಾಹನಗಳನ್ನು ಮಾರಾಟ ಮಾಡುವ ಸಲುವಾಗಿ ಸಿಂಗಯ್ಯನ ಪಾಳ್ಯ ರಸ್ತೆ ಪಕ್ಕದ ಖಾಲಿ ಜಾಗ ಹಾಗೂ ಡೀಸೆಲ್ ಶೆಡ್ ಪಕ್ಕದ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ 12 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳ ಬಂಧನದಿಂದ ಮಹದೇವಪುರ ಠಾಣೆ 6, ಎಚ್‌ಎಸ್‌ಆರ್ ಲೇಔಟ್ ಠಾಣೆ 3, ವೈಟ್‌ಫೀಲ್ಡ್ ಠಾಣೆ 2, ಎಚ್‌ಎಎಲ್ ಠಾಣೆ 1, ಆನೇಕಲ್ ಠಾಣೆ 1, ವರ್ತೂರು, ಗೋವಿಂದಪುರ, ಕುಮಾರಸ್ವಾಮಿ ಲೇಔಟ್, ಜೆ.ಪಿ.ನಗರ, ಆವಲಹಳ್ಳಿ, ಬಾಗಲೂರು, ಮಾರತ್‌ಹಳ್ಳಿ ಠಾಣೆಯಲ್ಲಿ ತಲಾ 1 ಹಾಗೂ ಮೈಸೂರು ನಗರ ಠಾಣೆ 1 ಪ್ರಕರಣ ಸೇರಿ 22 ದ್ವಿಚಕ್ರ ವಾಹನ ಕಳವು ಪ್ರಕರಣ ಪತ್ತೆಯಾಗಿದೆ. ಉಳಿದ ಮೂರು ವಾಹನಗಳ ಮಾಲೀಕರ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.