ADVERTISEMENT

ಜ್ಞಾನಭಾರತಿ ಠಾಣೆ ಪೊಲೀಸರ ಕಾರ್ಯಾಚರಣೆ:₹5 ಲಕ್ಷ ಮೌಲ್ಯದ 9 ದ್ವಿಚಕ್ರ ವಾಹನ ಜಪ್ತಿ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2025, 14:17 IST
Last Updated 14 ನವೆಂಬರ್ 2025, 14:17 IST
ಅರ್ಬಾಜ್‌
ಅರ್ಬಾಜ್‌   

ಬೆಂಗಳೂರು: ಮನೆಯ ಎದುರು ಹಾಗೂ ರಸ್ತೆಯ ಬದಿಯಲ್ಲಿ ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿ, ಚಿಕ್ಕಬಸ್ತಿಯ ನಿವಾಸಿ ಅರ್ಬಾಜ್‌ ಅಲಿಯಾಸ್‌ ದುಬೈ (21) ಎಂಬಾತನನ್ನು ಜ್ಞಾನಭಾರತಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತನಿಂದ ₹5 ಲಕ್ಷ ಮೌಲ್ಯದ ಒಂಬತ್ತು ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.

ದೂರುದಾರ ಶ್ರೀಕಾಂತ ಅವರು ಅ.19ರಂದು ಮನೆಯ ಗೇಟ್‌ ಎದುರು ದ್ವಿಚಕ್ರ ವಾಹನ ನಿಲುಗಡೆ ಮಾಡಿದ್ದರು. ಮರುದಿನ ಬೆಳಿಗ್ಗೆ ಎದ್ದು ನೋಡಿದಾಗ ಆ ಸ್ಥಳದಲ್ಲಿ ದ್ವಿಚಕ್ರ ವಾಹನ ಇರಲಿಲ್ಲ. ಬಳಿಕ, ಅವರು ದೂರು ನೀಡಿದ್ದರು. ದೂರು ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

ADVERTISEMENT

ಕೃತ್ಯ ನಡೆದ ಸ್ಥಳದ ಸುತ್ತಮುತ್ತಲ ಪ್ರದೇಶದಲ್ಲಿ ಅಳವಡಿಸಿರುವ ಸಿ.ಸಿ.ಟಿ.ವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಾವಳಿ ಪರಿಶೀಲನೆ ನಡೆಸಲಾಯಿತು. ಆಗ ಆರೋಪಿಯ ಗುರುತು ಪತ್ತೆ ಆಗಿತ್ತು. ಚಿಕ್ಕಬಸ್ತಿಯ ಶಿವಾಜಿ ಹೋಟೆಲ್‌ ಬಳಿ ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.

‘ತನ್ನ ಸಹಚರರಾದ ಬಾಬ್ದಾ, ಸಾನು ಹಾಗೂ ಅಡ್ಡಿ ಜತೆಗೆ ಆರೋಪಿ ಅರ್ಬಾಜ್‌, ಜ್ಞಾನಭಾರತಿ, ಹಲಸೂರು ಗೇಟ್‌, ಚಾಮರಾಜಪೇಟೆ, ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಬಡಾವಣೆಗಳ ಮನೆಯ ಎದುರು ನಿಲುಗಡೆ ಮಾಡಿದ್ದ ವಾಹನಗಳನ್ನು ಕಳ್ಳತನ ಮಾಡಿಕೊಂಡು ಪರಾರಿ ಆಗುತ್ತಿದ್ದ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

ಆರೋಪಿಯ ಬಂಧನದಿಂದ ನಾಲ್ಕು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಒಂಬತ್ತು ಕಳ್ಳತನ ಪ್ರಕರಣಗಳು ಪತ್ತೆ ಆಗಿವೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.