ಬೆಂಗಳೂರು: ರೌಡಿಶೀಟರ್ ಶಿವಪ್ರಸಾದ್ ಅಲಿಯಾಸ್ ಬಿಕ್ಲು ಶಿವ ಅವರ ಕೊಲೆ ಪ್ರಕರಣದ ತನಿಖೆ ಆರಂಭಿಸಿರುವ ಸಿಐಡಿ ಪೊಲೀಸರು, ಪ್ರಕರಣದ ಪ್ರಮುಖ ಆರೋಪಿ ಜಗದೀಶ್ ಬಂಧನಕ್ಕೆ ಬಲೆಬೀಸಿದ್ದಾರೆ.
‘ಇದುವರೆಗೆ ನಡೆದ ತನಿಖೆಯಿಂದ ಒಂದನೇ ಆರೋಪಿ ಜಗದೀಶ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬುದು ಗೊತ್ತಾಗಿದೆ. ಆರೋಪಿ ಪತ್ತೆಗಾಗಿ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಲು ಸಿಐಡಿ ಪೊಲೀಸರು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್ ಅವರ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ. ದೇಶದಲ್ಲಿ ಆರೋಪಿ ತಲೆಮರೆಸಿಕೊಂಡಿರುವ ಬಗ್ಗೆ ಸುಳಿವು ದೊರಕಿಲ್ಲ. ಹೀಗಾಗಿ ಬ್ಲೂ ಕಾರ್ನರ್ ನೋಟಿಸ್ ಹೊರಡಿಸುವಂತೆ ಸಿಬಿಐಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಸಿಐಡಿ ಮೂಲಗಳು ಹೇಳಿವೆ.
‘ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿದ ಬಳಿಕ ಆರೋಪಿಯ ಭಾವಚಿತ್ರ ಹಾಗೂ ಪ್ರಕರಣದ ವಿವರ ಸಮೇತ ಎಲ್ಲಾ ದೇಶಗಳಿಗೆ ಮಾಹಿತಿ ರವಾನೆ ಆಗಲಿದೆ. ಈ ಕ್ರಮದಿಂದ ಆರೋಪಿ ಜಗದೀಶ್ ಯಾವ ದೇಶದಲ್ಲಿ ಇದ್ದಾನೆ ಎಂಬುದು ಗೊತ್ತಾಗಲಿದೆ. ಜಗದೀಶ್ ದುಬೈನಲ್ಲಿ ತಲೆಮರೆಸಿಕೊಂಡಿದ್ದಾನೆ ಎಂಬ ಸುಳಿವು ಲಭಿಸಿದೆ’ ಎಂದು ಮೂಲಗಳು ತಿಳಿಸಿವೆ.
ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಜಗದೀಶ್ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ರೌಡಿಶೀಟ್ ತೆರೆಯಲಾಗಿತ್ತು. ಕೆಲವು ವರ್ಷಗಳ ಹಿಂದೆ ಆತನನ್ನು ರೌಡಿಪಟ್ಟಿಯಿಂದ ಕೈ ಬಿಡಲಾಗಿತ್ತು. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜಗದೀಶ್ ಪ್ರಮುಖ ಆರೋಪಿಯಾಗಿದ್ದಾನೆ.
ಜುಲೈ 15ರಂದು ಬಿಕ್ಲು ಶಿವ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಶಿವ ಅವರ ತಾಯಿ ವಿಜಯಲಕ್ಷ್ಮಿ ಅವರು ನೀಡಿದ ದೂರು ಆಧರಿಸಿ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸೇರಿದಂತೆ ಐವರ ವಿರುದ್ಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಬೈರತಿ ಬಸವರಾಜ್ ಅವರನ್ನು ಭಾರತಿನಗರ ಠಾಣೆಯ ಪೊಲೀಸರು ಎರಡು ಬಾರಿ ವಿಚಾರಣೆ ನಡೆಸಿದ್ದರು. 15 ಆರೋಪಿಗಳನ್ನು ಬಂಧಿಸಿದ್ದರು. ಅದಾದ ಮೇಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಸರ್ಕಾರ ವಹಿಸಿತ್ತು.
ಆರೋಪಿಗಳಾದ ಕಿರಣ್, ಮದನ್, ಸ್ಯಾಮ್ಯುಯಲ್, ಪ್ರದೀಪ್, ವಿಮಲ್, ಅನಿಲ್, ಕೋಲಾರ ಜಿಲ್ಲೆ ಮಾಲೂರಿನ ಅವಿನಾಶ್ ದೀನಹಳ್ಳಿ, ಸುದರ್ಶನ್, ಮುರುಗೇಶ್ ಹಾಗೂ ನರಸಿಂಹ ಸೇರಿದಂತೆ 16 ಮಂದಿಯನ್ನು ಬಂಧಿಸಲಾಗಿದೆ. ಜಗದೀಶ್ ತಲೆಮರೆಸಿಕೊಂಡಿದ್ದಾನೆ. ಆತನ ಬಂಧನಕ್ಕೆ ಪ್ರಕ್ರಿಯೆಗಳು ಆರಂಭಗೊಂಡಿವೆ ಎಂದು ಸಿಐಡಿ ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.