ADVERTISEMENT

ಶರಣರ ವಿರುದ್ಧ ಕ್ರಮಕ್ಕೆ ಆಗ್ರಹ: ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2022, 21:38 IST
Last Updated 2 ಸೆಪ್ಟೆಂಬರ್ 2022, 21:38 IST
‘ಬಿಲ್ಕಿಸ್ ಬಾನುಗೆ ನ್ಯಾಯ ದೊರಕಿಸಬೇಕು. ಪೋಕ್ಸೊ ಪ್ರಕರಣದ ಆರೋಪಿ ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಲೇಖಕಿ ವಿಜಯಮ್ಮ, ಡಾ. ವಸುಂಧರಾ ಭೂಪತಿ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷೆ ಕೃಪಾ ಆಳ್ವಾ ಹಾಗೂ ಇತರರು ಇದ್ದರು  – ಪ್ರಜಾವಾಣಿ ಚಿತ್ರ
‘ಬಿಲ್ಕಿಸ್ ಬಾನುಗೆ ನ್ಯಾಯ ದೊರಕಿಸಬೇಕು. ಪೋಕ್ಸೊ ಪ್ರಕರಣದ ಆರೋಪಿ ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಲೇಖಕಿ ವಿಜಯಮ್ಮ, ಡಾ. ವಸುಂಧರಾ ಭೂಪತಿ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷೆ ಕೃಪಾ ಆಳ್ವಾ ಹಾಗೂ ಇತರರು ಇದ್ದರು  – ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಗುಜರಾತ್‌ನಲ್ಲಿ ಬಿಲ್ಕಿಸ್‌ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಅವರ ಕುಟುಂಬದವರನ್ನು ಹತ್ಯೆ ಮಾಡಿರುವ ಅಪರಾಧಿಗಳನ್ನು ಮರಳಿ ಜೈಲಿಗೆ ಕಳುಹಿಸಬೇಕು. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ವಿದ್ಯಾರ್ಥಿ, ಮಹಿಳಾ, ಯುವಜನ, ರೈತ, ಕಾರ್ಮಿಕ, ಕೃಷಿ ಕಾರ್ಮಿಕರು, ಅಲ್ಪಸಂಖ್ಯಾತ, ವಕೀಲರ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

‘ಬಿಲ್ಕಿಸ್ ಬಾನು ಅವರಿಗೆ ನ್ಯಾಯ ದೊರಕಿಸುವಂತೆ ಕರ್ನಾಟಕ ಆಗ್ರಹಿಸುತ್ತದೆ’ ಹಾಗೂ ‘ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು’ ಎಂಬ ಘೋಷಣಾ ಫಲಕಗಳನ್ನು ಪ್ರತಿಭಟನಕಾರರು ಪ್ರದರ್ಶಿಸಿದರು.

ADVERTISEMENT

‘ಗುಜರಾತಿನ ದಾಹೋದ್ ಜಿಲ್ಲೆಯ ರಣಧಿಕ್‌ಪುರ ಹಳ್ಳಿಯಲ್ಲಿ 2002ರಲ್ಲಿ ಹಿಂಸೆ ನಡೆದಿತ್ತು. ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಅವರ ಕುಟುಂಬದ 7 ಜನರನ್ನು ಹತ್ಯೆ ಮಾಡಲಾಯಿತು. ಪ್ರಕರಣದ 11 ಅಪರಾಧಿಗಳಿಗೆ ಜೈಲು ಶಿಕ್ಷೆ ಆಗಿತ್ತು. ಆದರೀಗ, ಸನ್ನಡತೆ ಆಧಾರದಲ್ಲಿ ಕ್ಷಮಾದಾನ ನೀಡಿ ಅಪರಾಧಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಇದನ್ನು ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಅಪರಾಧಿಗಳನ್ನು ಪುನಃ ಜೈಲಿಗೆ ಕಳುಹಿಸುವವರೆಗೂ ಹೋರಾಟ ಮುಂದುವರಿಯಲಿದೆ’ ಎಂದು ಪ್ರತಿಭಟನಕಾರರು ಹೇಳಿದರು.

‘ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದ ಆರೋಪಿ ಶಿವಮೂರ್ತಿ ಮುರುಘಾ ಶರಣರಿಗೆ ಕಠಿಣ ಶಿಕ್ಷೆ ಆಗಬೇಕು. ಯಾವುದೇ ಒತ್ತಡಕ್ಕೆ ಮಣಿಯದೇ ತನಿಖಾಧಿಕಾರಿಗಳು ತನಿಖೆ ನಡೆಸಬೇಕು. ಸಂತ್ರಸ್ತ ಬಾಲಕಿಯರಿಗೆ ನ್ಯಾಯ ಒದಗಿಸಬೇಕು’ ಎಂದು ಅವರು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.