ADVERTISEMENT

ಪ್ರಧಾನಿ ಅವಹೇಳನ ಆರೋಪ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2024, 16:17 IST
Last Updated 13 ಏಪ್ರಿಲ್ 2024, 16:17 IST
   

ಬೆಂಗಳೂರು: ‘ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್‌, ಮುಸಲೋನಿಗೆ ಹೋಲಿಸಿ ಅವಹೇಳನ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೀತಿಸಂಹಿತೆ ಉಲ್ಲಂಘಿಸುತ್ತಿದ್ದಾರೆ’ ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ.

ಶಾಸಕ ಎಸ್‌. ಸುರೇಶ್‌ ಕುಮಾರ್‌ ಮತ್ತು ಬಿಜೆಪಿ ಕಾನೂನು ಪ್ರಕೋಷ್ಠದ ರಾಜ್ಯ ಘಟಕದ ಅಧ್ಯಕ್ಷ ವಿವೇಕ್‌ ಎಸ್‌. ರೆಡ್ಡಿ ನೇತೃತ್ವದ ನಿಯೋಗವು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ಅವರನ್ನು ಶನಿವಾರ ಭೇಟಿ ಮಾಡಿ ದೂರು ಸಲ್ಲಿಸಿತು.

‘ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕೊಳ್ಳೇಗಾಲದಲ್ಲಿ ಶುಕ್ರವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಸಿದ್ದರಾಮಯ್ಯ ಅವರು ಮೋದಿ ಅವರನ್ನು ಹಿಟ್ಲರ್‌, ಮುಸಲೋನಿಗೆ ಹೋಲಿಸಿದ್ದಾರೆ. ಸಂವಿಧಾನ ತಿದ್ದುಪಡಿ ಮಾಡುತ್ತಾರೆ ಎಂದೂ ಹೇಳಿದ್ದಾರೆ. ಮತದಾರರನ್ನು ಬಿಜೆಪಿ ವಿರುದ್ಧ ಎತ್ತಿಕಟ್ಟಿ ಚುನಾವಣೆಯಲ್ಲಿ ಲಾಭ ಪಡೆಯುವ ಪ್ರಯತ್ನ ಇದರ ಹಿಂದಿದೆ’ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ADVERTISEMENT

‘ಅಪ್ರಬುದ್ಧ, ಅಸಾಂವಿಧಾನಿಕ ಮತ್ತು ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡುತ್ತಿರುವ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ ಪಕ್ಷದ ತಾರಾ ಪ್ರಚಾರಕರ ಪಟ್ಟಿಯಿಂದ ಕೈಬಿಡಬೇಕು. ಇನ್ನು ಮುಂದೆ ಚುನಾವಣಾ ಪ್ರಚಾರ ನಡೆಸದಂತೆ ನಿರ್ಬಂಧ ಹೇರಬೇಕು‘ ಎಂದು ಬಿಜೆಪಿ ಆಗ್ರಹಿಸಿದೆ.

‘ಬಿಜೆಪಿ ಮತ್ತು ಬಿಜೆಪಿಯ ಅಭ್ಯರ್ಥಿ ವಚನಭ್ರಷ್ಟರು’ ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿಯ ಮಗ ಯತೀಂದ್ರ ಸಿದ್ದರಾಮಯ್ಯ ಹಾಗೂ ಮೋದಿಯವರನ್ನು ಸರ್ವಾಧಿಕಾರಿ ಎಂದು ಬಿಂಬಿಸಿ ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಪೋಸ್ಟ್‌ ಪ್ರಕಟಿಸಿರುವ ರಾಜ್ಯ ಯುವ ಕಾಂಗ್ರೆಸ್‌ ಸಮಿತಿ ಕಾರ್ಯದರ್ಶಿ ಯಶ್‌ ಗೌಡ ವಿರುದ್ಧವೂ ಕ್ರಮ ಜರುಗಿಸುವಂತೆ ಆಗ್ರಹಿಸಿ ಬಿಜೆಪಿ ಕಾನೂನು ಪ್ರಕೋಷ್ಠ ಪ್ರತ್ಯೇಕ ದೂರುಗಳನ್ನು ಸಲ್ಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.