ADVERTISEMENT

ಸಿದ್ದರಾಮಯ್ಯ, ಪರಮೇಶ್ವರ ರಾಜೀನಾಮೆ ಕೊಡಿ: ಬಿಜೆಪಿ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2025, 15:55 IST
Last Updated 10 ನವೆಂಬರ್ 2025, 15:55 IST
ಸಿದ್ದರಾಮಯ್ಯ, ಪರಮೇಶ್ವರ ಅವರ ರಾಜೀನಾಮೆಗೆ ಆಗ್ರಹಿಸಿ ಬಿ.ವೈ.ವಿಜಯೇಂದ್ರ, ಆರ್. ಅಶೋಕ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು   ಪ್ರಜಾವಾಣಿ ಚಿತ್ರ ಕಿಶೋರ್ ಕುಮಾರ್ ಬೋಳಾರ್
ಸಿದ್ದರಾಮಯ್ಯ, ಪರಮೇಶ್ವರ ಅವರ ರಾಜೀನಾಮೆಗೆ ಆಗ್ರಹಿಸಿ ಬಿ.ವೈ.ವಿಜಯೇಂದ್ರ, ಆರ್. ಅಶೋಕ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು   ಪ್ರಜಾವಾಣಿ ಚಿತ್ರ ಕಿಶೋರ್ ಕುಮಾರ್ ಬೋಳಾರ್   

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳಿಗೆ ವಿಶೇಷ ಆತಿಥ್ಯ ನೀಡಿರುವುದನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಸೋಮವಾರ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದರು.

ಬಿಜೆಪಿ ಯುವ ಮೋರ್ಚಾ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಉಗ್ರರಿಗೆ ಹಾಗೂ ಅತ್ಯಾಚಾರಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ‘ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಸಿಗುತ್ತಿದ್ದು, ಇದರ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಜೈಲು ಒಂದು ರೀತಿ ಮನರಂಜನಾ ಕ್ಲಬ್ ಆಗಿ ಪರಿವರ್ತನೆಗೊಂಡಿದೆ. ದೇಶದ್ರೋಹಿಗಳಿಗೆ ಟಿ.ವಿ., ಮೊಬೈಲ್ ಫೋನ್, ಗುಂಡು- ತುಂಡುಗಳ ವ್ಯವಸ್ಥೆ ಇದೆ. ಮಾಧ್ಯಮಗಳಲ್ಲಿ ಮಾಹಿತಿ ಬಂದ ನಂತರ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ಮಾಡಲಾಗಿದೆ’ ಎಂದು ಟೀಕಿಸಿದರು.

ADVERTISEMENT

ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಅದೇ ರೀತಿ ಜೈಲಿನ ವ್ಯವಸ್ಥೆಯೂ ಭ್ರಷ್ಟಾಚಾರದಲ್ಲೇ ಮುಳುಗಿ ಹೋಗಿದೆ. ರಾಜ್ಯ ಸರ್ಕಾರದ ಕುಮ್ಮಕ್ಕು ಇಲ್ಲದಿದ್ದರೆ ಈ ರೀತಿ ಜೈಲಿನಲ್ಲಿ ವ್ಯವಸ್ಥೆ ಆಗಲು ಸಾಧ್ಯವಿಲ್ಲ. ಇದಕ್ಕೆ ಗೃಹ ಸಚಿವ ಮತ್ತು ಮುಖ್ಯಮಂತ್ರಿ ನೇರ ಹೊಣೆಗಾರರು ಎಂದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಗುಪ್ತಚರ ವಿಭಾಗ ಎರಡು ವರ್ಷದಿಂದ ಸತ್ತು ಹೋಗಿದೆಯೇ? ಪೊಲೀಸ್ ಠಾಣೆಗಳನ್ನು ಇವರು ಕಾಂಗ್ರೆಸ್ ಕಚೇರಿ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ಜೈಲಿನಲ್ಲಿರುವ ಉಗ್ರನ ಕೈಗೆ ಮೊಬೈಲ್ ಸಿಗುವುದಾದರೆ ದೇಶದ್ರೋಹದ ಚಟುವಟಿಕೆಗೆ ರಾಜಾಶ್ರಯ ನೀಡಿದಂತೆ ಅಲ್ಲವೇ?. ಮುಖ್ಯಮಂತ್ರಿ ತವರು ಜಿಲ್ಲೆ ಮೈಸೂರಿನಲ್ಲಿ ಮಾದಕವಸ್ತು ಉತ್ಪಾದನಾ ಕಾರ್ಖಾನೆ ಆರಂಭವಾಗುತ್ತದೆ. ಇದರ ಬಗ್ಗೆ ಕರ್ನಾಟಕದವರಿಗೆ ಮಾಹಿತಿಯೇ ಇಲ್ಲ ಎಂದು ದೂರಿದರು.

ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಕೆ. ಗೋಪಾಲಯ್ಯ, ಉದಯ್ ಬಿ. ಗರುಡಾಚಾರ್, ಎಂ. ಕೃಷ್ಣಪ್ಪ, ಸಿ. ಮುನಿರಾಜು, ಸಿ.ಕೆ. ರಾಮಮೂರ್ತಿ, ಯುವ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಧೀರಜ್ ಮುನಿರಾಜು, ರಾಜ್ಯ ಕಾರ್ಯದರ್ಶಿಗಳಾದ ಎಚ್.ಸಿ. ತಮ್ಮೇಶ್ ಗೌಡ, ಶರಣು ತಳ್ಳಿಕೇರಿ, ಮುಖಂಡ ಉಮೇಶ್ ಶೆಟ್ಟಿ, ಜಿಲ್ಲಾಧ್ಯಕ್ಷರಾದ ಎಸ್. ಹರೀಶ್, ಸಪ್ತಗಿರಿ ಗೌಡ ಭಾಗಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.