ADVERTISEMENT

ಬಿಜೆಪಿ ಸರ್ಕಾರದ ಸಾಧನೆ ಚೊಂಬು: ಜಮೀರ್ ಅಹಮದ್

ಮನ್ಸೂರ್‌ ಅಲಿ ಖಾನ್‌ ಪರ ಪ್ರಚಾರ ಸಭೆಯಲ್ಲಿ ಜಮೀರ್ ಅಹಮದ್ ಖಾನ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2024, 16:07 IST
Last Updated 24 ಏಪ್ರಿಲ್ 2024, 16:07 IST
ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ನಡೆದ ರೋಡ್ ಶೋನಲ್ಲಿ ಸಚಿವ ಜಮೀರ್ ಅಹಮದ್ ಖಾನ್, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಅಲಿ ಖಾನ್, ಎಐಸಿಸಿ ಕಾರ್ಯದರ್ಶಿ ಅಭಿಷೇಕ್‌ ದತ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಮೆಹರೋಜ್‌ ಖಾನ್, ಕೆಎಂಡಿಸಿ ಅಧ್ಯಕ್ಷ ಬಿ.ಕೆ. ಅಲ್ತಾಫ್ ಖಾನ್ ಭಾಗವಹಿಸಿದ್ದರು.
ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ನಡೆದ ರೋಡ್ ಶೋನಲ್ಲಿ ಸಚಿವ ಜಮೀರ್ ಅಹಮದ್ ಖಾನ್, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಅಲಿ ಖಾನ್, ಎಐಸಿಸಿ ಕಾರ್ಯದರ್ಶಿ ಅಭಿಷೇಕ್‌ ದತ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಮೆಹರೋಜ್‌ ಖಾನ್, ಕೆಎಂಡಿಸಿ ಅಧ್ಯಕ್ಷ ಬಿ.ಕೆ. ಅಲ್ತಾಫ್ ಖಾನ್ ಭಾಗವಹಿಸಿದ್ದರು.   

ಬೆಂಗಳೂರು: ‘ಕೇಂದ್ರದಲ್ಲಿ ಹತ್ತು ವರ್ಷ ಅಧಿಕಾರ ನಡೆಸಿದ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಸಾಧನೆ ಕೇವಲ ಚೊಂಬು’ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಲೇವಡಿ ಮಾಡಿದರು.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಪರ ಚಾಮರಾಜಪೇಟೆ ಕ್ಷೇತ್ರದಲ್ಲಿ ರೋಡ್ ನಡೆಸಿ, ನಂತರ ಸಂಗಮ್ ವೃತ್ತದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ‘ಹತ್ತು ವರ್ಷ ಅಧಿಕಾರ ನಡೆಸಿದ ಬಿಜೆಪಿ ಐವತ್ತು ವರ್ಷ ದೇಶವನ್ನು ಹಿಂದಕ್ಕೆ ತೆಗೆದುಕೊಂಡು ಹೋಗಿದೆ. ಬಿಜೆಪಿ ಅಭಿವೃದ್ಧಿ ವಿಚಾರದಲ್ಲಿ ಮತ ಕೇಳುವುದಿಲ್ಲ. ಹಿಂದೂ–ಮುಸ್ಲಿಂ ಎಂದು ಜನರನ್ನು ವಿಭಜನೆ ಮಾಡಿ ಕೋಮುಭಾವನೆ ಪ್ರಚೋದಿಸಿ ಸುಳ್ಳು ಹೇಳಿ ಜನರನ್ನು ವಂಚಿಸುತ್ತಿದೆ’ ಎಂದು ದೂರಿದರು.

‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಅನುಷ್ಠಾನ ಮಾಡಿದೆ. ಆರನೇ ಗ್ಯಾರಂಟಿ ಆಗಿ ಬಡ ಕುಟುಂಬಗಳಿಗೆ 1.82 ಲಕ್ಷ ಮನೆಗಳನ್ನು ಹಂಚಿಕೆ ಮಾಡಲು ತೀರ್ಮಾನಿಸಿದೆ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವಾರ್ಷಿಕ ₹1 ಲಕ್ಷ, ಯುವ ನಿರುದ್ಯೋಗಿ ಪದವಿಧರರಿಗೆ ₹1 ಲಕ್ಷ, ರೈತರ ಸಾಲ ಮನ್ನಾ ಭರವಸೆ ನೀಡಿದೆ. ಮತದಾರರು ಆಶೀರ್ವದಿಸಿದರೆ ಇವೆಲ್ಲವುಗಳನ್ನು ಈಡೇರಿಸಲಾಗುವುದು’ ಎಂದು ಭರವಸೆ ನೀಡಿದರು.

ADVERTISEMENT

ಅಭ್ಯರ್ಥಿ ಮನ್ಸೂರ್ ಅಲಿ ಖಾನ್, ‘ದೇಶದ ಜನರು ಬದಲಾವಣೆ ಬಯಸಿದ್ದಾರೆ. ಅದರಂತೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಮಾದರಿಯಾಗಿ ಅಭಿವೃದ್ಧಿ ಮಾಡುವ ಸಂಕಲ್ಪ ತೊಟ್ಟಿದ್ದೇನೆ. ಆದ್ದರಿಂದ, ಈ ಬಾರಿ ಒಂದು ಅವಕಾಶ ಕೊಡಬೇಕು’ ಎಂದು ಮತದಾರರಲ್ಲಿ ಮನವಿ ಮಾಡಿದರು.

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಟಿ.ಆರ್‌. ಮಿಲ್ ವೃತ್ತ, ಪಾದರಾಯನಪುರ ಮತ್ತು ಮೋಮಿನ್‌ಪುರ ರೋಡ್‌ ಶೋ ನಡೆಸಿ ಮತಯಾಚಿಸಲಾಯಿತು.

ಶಾಂತಿನಗರ ವಿಧಾನಸಭಾ ಕ್ಷೇತ್ರದ ವಿವೇಕನಗರ, ಆಸ್ಟಿನ್‌ ಟೌನ್, ನೀಲಸಂದ್ರದಲ್ಲಿ ನಡೆದ ರೋಡ್‌ ಶೋನಲ್ಲಿ ಶಾಸಕ ಎನ್.ಎ. ಹ್ಯಾರಿಸ್‌ ಅವರು ನೇತೃತ್ವದಲ್ಲಿ ಮನ್ಸೂರ್‌ ಅಲಿ ಖಾನ್‌ ಮತಬೇಟೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.