ADVERTISEMENT

ಜಗದೀಶ್‌ ಶೆಟ್ಟರ್ ಮನೆಯಲ್ಲಿ ಅತೃಪ್ತ ಶಾಸಕರ ಸಭೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2020, 23:01 IST
Last Updated 17 ಫೆಬ್ರುವರಿ 2020, 23:01 IST
ಜಗದೀಶ ಶೆಟ್ಟರ್
ಜಗದೀಶ ಶೆಟ್ಟರ್   

ಬೆಂಗಳೂರು: ಸಚಿವ ಸ್ಥಾನ ಸಿಗದ ಕೆಲವು ಅತೃಪ್ತ ಶಾಸಕರು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ನಿವಾಸದಲ್ಲಿ ಸೋಮವಾರ ರಾತ್ರಿ ಸಭೆ ನಡೆಸಿದ್ದಾರೆ.

ಈ ಸಭೆಯಲ್ಲಿ ಪ್ರಸಕ್ತ ಪಕ್ಷದ ವಿದ್ಯಮಾನಗಳ ಬಗ್ಗೆ ಚರ್ಚಿಸಲಾಗಿದ್ದು, ಸಚಿವ ಸ್ಥಾನ ನೀಡುವಾಗ ಪ್ರದೇಶ, ಜಾತಿ ಮತ್ತು ಹಿರಿತನಕ್ಕೆ ಮನ್ನಣೆ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.

ಸಭೆಯಲ್ಲಿ ಮೂಡಿ ಬಂದ ಅಭಿಪ್ರಾಯವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಗಮನಕ್ಕೆ ತರಬೇಕು ಎಂದೂ ನಿರ್ಧರಿಸಲಾಗಿದೆ.
ಮುಖ್ಯಮಂತ್ರಿ ಪುತ್ರ ವಿಜಯೇಂದ್ರ ಅವರ ಬಗ್ಗೆ ಸಭೆಯಲ್ಲಿ ಅಪಸ್ವರ ಕೇಳಿ ಬಂದಿದೆ. ಆಡಳಿತದಲ್ಲಿ ಮೂಗು ತೂರಿಸುವುದು ಸರಿಯಲ್ಲ ಎಂದು ಕೆಲ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದರು ಎನ್ನಲಾಗಿದೆ.

ADVERTISEMENT

ಸಭೆಯಲ್ಲಿ ಶಾಸಕರಾದ ಉಮೇಶ ಕತ್ತಿ, ಬಸನಗೌಡ ಪಾಟೀಲ ಯತ್ನಾಳ, ಮುರುಗೇಶ ನಿರಾಣಿ, ಶಿವನಗೌಡ ನಾಯಕ್, ರಾಜೂಗೌಡ, ಶಂಕರ ಮುನೇನಕೊಪ್ಪ, ಎ.ಎಸ್.ಪಾಟೀಲ ನಡಹಳ್ಳಿ, ರುದ್ರಪ್ಪ ಲಮಾಣಿ ಮತ್ತು ಇತರರು ಇದ್ದರು ಎನ್ನಲಾಗಿದೆ. ಕ್ರೆಸೆಂಟ್ ರಸ್ತೆಯಲ್ಲಿರುವ ಮನೆಯಲ್ಲಿ ಭೋಜನ ಕೂಟದ ನೆಪದಲ್ಲಿ ಸಭೆ ನಡೆಸಲಾಗಿದೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.