ADVERTISEMENT

ನೌಕರರ ಪಿಂಚಣಿಗಾಗಿ ವಿದ್ಯುತ್ ದರ ಏರಿಕೆ: ವಿಪಕ್ಷಗಳ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2025, 16:10 IST
Last Updated 20 ಮಾರ್ಚ್ 2025, 16:10 IST
<div class="paragraphs"><p>ವಿಜಯೇಂದ್ರ</p></div>

ವಿಜಯೇಂದ್ರ

   

ಬೆಂಗಳೂರು: ವಿದ್ಯುತ್ ಪ್ರಸರಣ ಮತ್ತು ಸರಬರಾಜು ಸಂಸ್ಥೆಗಳ ಸಿಬ್ಬಂದಿಯ ಪಿಂಚಣಿ, ಗ್ರಾಚ್ಯುಟಿಯ ಸರ್ಕಾರದ ಪಾಲಿನ ಹೊರೆಯನ್ನು ಗ್ರಾಹಕರ ಮೇಲೆ ಹೊರಿಸುವ ಮೂಲಕ ವಿದ್ಯುತ್ ದರ ಏರಿಸಲು ಮುಂದಾಗಿರುವುದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗದ (ಕೆಇಆರ್‌ಸಿ) ಮುಂದೆ ಅರ್ಜಿ ಸಲ್ಲಿಸಿ, ಆದೇಶ ಪಡೆದು ದರ ಏರಿಕೆಗೆ ಮುಂದಾಗಿರುವ ಕೆಪಿಟಿಸಿಎಲ್‌ ಮತ್ತು ಎಸ್ಕಾಂ ನಡೆಯ ವಿರುದ್ಧ ಹೋರಾಟ ನಡೆಸುವುದಾಗಿಯೂ ಹೇಳಿದೆ.

ADVERTISEMENT

ಈ ಕುರಿತು ಸುದ್ದಿಗಾರರಿಗೆ ಗುರುವಾರ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ‘ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಸಾಧ್ಯವಾಗದೇ ಸಾಮಾನ್ಯ ಜನರ ಮೇಲೆ ಹೊರೆ ಹಾಕುತ್ತಿದೆ. ಅದರ ಪರಿಣಾಮವೇ ವಿದ್ಯುತ್ ದರ ಏರಿಕೆ’ ಎಂದು ಟೀಕಿಸಿದರು.

‘ಈ ಸರ್ಕಾರ ಒಂದು ಕಡೆ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿದೆ. ಇನ್ನೊಂದೆಡೆ ಸರ್ಕಾರದ ಇಲಾಖೆಗಳೇ ₹6,000 ಕೋಟಿಯಷ್ಟು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಬೆಲೆ ಏರಿಕೆಯೊಂದನ್ನೇ ಗ್ಯಾರಂಟಿಯಾಗಿ ಕೊಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ರಾಜ್ಯದ ಜನರು ದರ ಏರಿಕೆಯಿಂದ ಈಗಾಗಲೇ ತತ್ತರಿಸಿದ್ದಾರೆ. ವಿದ್ಯುತ್ ದರ ಏರಿಕೆಯಾದರೆ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಲಿದೆ. ಸದನದಲ್ಲಿ ಈ ಎಲ್ಲ ವಿಚಾರವನ್ನು ಚರ್ಚೆ ಮಾಡುತ್ತೇವೆ’ ಎಂದು ಹೇಳಿದರು.

ಇದು ಬಿಜೆಪಿ ಸರ್ಕಾರದ ಅವಧಿಯಲ್ಲಾದ ಬೆಳವಣಿಗೆ. ಹೈಕೋರ್ಟ್‌ ತೀರ್ಪು ಆಧರಿಸಿ ಕೆಇಆರ್‌ಸಿ ದರ ಹೆಚ್ಚಳದ ಆದೇಶ ಹೊರಡಿಸಿದೆ. ನಮ್ಮ ಸರ್ಕಾರ ವಿದ್ಯುತ್ ದರ ಹೆಚ್ಚಿಸಿಲ್ಲ
ಕೆ.ಜೆ.ಜಾರ್ಜ್, ಇಂಧನ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.