ಬೆಂಗಳೂರು: ಬಿಜೆಪಿ ಟಿಕೆಟ್ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಮಂಗಳೂರಿನ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ನೋಟಿಸ್ ನೀಡಿದ್ದಾರೆ.
ಪ್ರಕರಣದ ತನಿಖಾಧಿಕಾರಿಯಾಗಿರುವ ಎಸಿಪಿ ರೀನಾ ಸುವರ್ಣ ಅವರು ಸ್ವಾಮೀಜಿಗೆ ನೋಟಿಸ್ ಪ್ರತಿ ಕಳುಹಿಸಿದ್ದಾರೆ. ‘ನೋಟಿಸ್ ತಲುಪಿದ ನಂತರ ಮೂರು ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗಬೇಕು’ ಎಂದು ಸೂಚಿಸಿದ್ದಾರೆ.
ಉದ್ಯಮಿ ಗೋವಿಂದ ಬಾಬು ಪೂಜಾರಿ ನೀಡಿದ್ದ ದೂರಿನನ್ವಯ ಆರೋಪಿಗಳಾದ ಚೈತ್ರಾ ಕುಂದಾಪುರ, ಹಿರೇಹಡಗಲಿ ಹಾಲಸ್ವಾಮಿ ಮಠದ ಹಾಲವೀರಪ್ಪ ಸ್ವಾಮೀಜಿ ಸೇರಿದಂತೆ ಹಲವರನ್ನು ಸಿಸಿಬಿ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
‘ಚೈತ್ರಾ ಕುಂದಾಪುರ ವಂಚನೆ ಬಗ್ಗೆ ನನಗೆ ಮೊದಲೇ ಮಾಹಿತಿ ಇತ್ತು. ಜೊತೆಗೆ, ಅವರು ಯಾರಿಗೆಲ್ಲ ವಂಚನೆ ಮಾಡಿದ್ದಾರೆಂಬ ಮಾಹಿತಿ ನನ್ನ ಬಳಿ ಇದೆ’ ಎಂಬುದಾಗಿ ಸ್ವಾಮೀಜಿ ಪರಿಚಯಸ್ಥರ ಬಳಿ ಹೇಳಿಕೊಂಡಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲೂ ಸುದ್ದಿ ಬಂದಿತ್ತು. ಇದೇ ಕಾರಣಕ್ಕೆ ಅವರಿಗೆ ನೋಟಿಸ್ ನೀಡಲಾಗಿದೆ. ವಿಚಾರಣೆಗೆ ಬಂದು ಮಾಹಿತಿ ನೀಡುವಂತೆ ತಿಳಿಸಲಾಗಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.
‘ನಿಗದಿತ ದಿನದಂದು ವಿಚಾರಣೆಗೆ ಹಾಜರಾಗಬೇಕು. ಇಲ್ಲದಿದ್ದರೆ, ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.