
ಬೆಂಗಳೂರು: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಪಿಎಸ್–95 ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘದ ಸದಸ್ಯರು ಗುರುವಾರ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯನಿಧಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಕನಿಷ್ಠ ₹7500 ಪಿಂಚಣಿ ಹಾಗೂ ಭತ್ಯೆ, ವೈದ್ಯಕೀಯ ಸೌಲಭ್ಯ ನೀಡಬೇಕು. ಇಪಿಎಸ್ ವ್ಯಾಪ್ತಿಗೆ ಬಾರದ ಹಲವು ನಿವೃತ್ತ ನೌಕರರಿಗೆ ₹ 5 ಸಾವಿರ ನೀಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ನವದೆಹಲಿಯಲ್ಲಿ ಜರುಗಿದ ಸಿಬಿಟಿ ಸಭೆಯಲ್ಲಿ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಇಪಿಎಫ್ಓ ಅಧಿಕಾರಿಗಳು ಪ್ರಸ್ತಾವನೆ ಮಂಡಿಸದೆ, 78 ಲಕ್ಷ ಇಪಿಎಸ್ ನಿವೃತ್ತರನ್ನು ನಿರಾಶೆಗೊಳಿಸಿದ್ದಾರೆ. ನೌಕರರ ಸಂಘದ ಮುಖಂಡರಾದ ಕಮಾಂಡರ್ ಅಶೋಕ್ ರಾವುತ್ ಹಾಗೂ ತಂಡದವರು ಸಿಬಿಟಿ ಅಧ್ಯಕ್ಷರೂ ಆದ ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವ ಮನ್ಸುಖ್ ಮಾಂಡವೀಯ ಹಾಗೂ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ನಂಜುಂಡೇಗೌಡ, ಕಾರ್ಯಾಧ್ಯಕ್ಷ ಶಂಕರ್ ಕುಮಾರ್, ಕೆಆಎಸ್‌ಆರ್‌ಟಿಸಿ ಚಿಕ್ಕಬಳ್ಳಾಪುರ ಟ್ರಸ್ಟ್ ಅಧ್ಯಕ್ಷ ಬ್ರಹ್ಮಚಾರಿ, ಸಾಮಾಜಿಕ ಕಾರ್ಯಕರ್ತ ಚಂದೇಗೌಡ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.