ADVERTISEMENT

ನವ ಬೆಂಗಳೂರು ಯೋಜನೆಗೆ ಅನುದಾನ ಬಿಡುಗಡೆಗೆ ಮಾಡಿ: ಎಚ್‌.ಡಿ ಕುಮಾರಸ್ವಾಮಿ ಆಗ್ರಹ

ಬಿಜೆಪಿ ಸರ್ಕಾರ ಬಂದ ಬಳಿಕ ರದ್ದಾಗಿದ್ದ ಕ್ರಿಯಾ ಯೋಜನೆ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2020, 18:49 IST
Last Updated 11 ಸೆಪ್ಟೆಂಬರ್ 2020, 18:49 IST
ಎಚ್‌.ಡಿ ಕುಮಾರಸ್ವಾಮಿ
ಎಚ್‌.ಡಿ ಕುಮಾರಸ್ವಾಮಿ    

ಬೆಂಗಳೂರು:ಮುಖ್ಯಮಂತ್ರಿಯವರ ನವ ಬೆಂಗಳೂರು ಯೋಜನೆಯಡಿ 2018–19 ನೇ ಸಾಲಿನಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ತಲಾ ₹30 ಕೋಟಿಯಂತೆ ಅನುದಾನ ಹಂಚಿಕೆ ಮಾಡಿದ್ದನ್ನು ಬಿಡುಗಡೆ ಮಾಡುವಂತೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ನೆಲಮಂಗಲ, ರಾಮನಗರ, ಮಾಗಡಿ ಮತ್ತು ದೇವನಹಳ್ಳಿ ವಿಧಾನಸಭಾ ಕ್ಷೇತ್ರಗಳಲ್ಲೂ ಬಿಬಿಎಂಪಿ ಕಸವನ್ನು ವಿಲೇವಾರಿ ಮಾಡಲಾಗುತ್ತದೆ ಎಂಬ ಕಾರಣಕ್ಕೆ ಈ ಕ್ಷೇತ್ರಗಳ ಅಭಿವೃದ್ಧಿಗೆಂದು ಮುಖ್ಯಮಂತ್ರಿಯವರ ನವ ಬೆಂಗಳೂರು ಯೋಜನೆಯ ಕ್ರಿಯಾ ಯೋಜನೆಯಡಿ ತಲಾ ₹ 30 ಕೋಟಿ ಅನುದಾನ ಹಂಚಿಕೆ ಮಾಡಲಾಗಿತ್ತು. ‘ಈ ಕ್ಷೇತ್ರಗಳವ್ಯಾಪ್ತಿಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಯಾವುದೇ ಕಸ ವಿಲೇ ಮಾಡುತ್ತಿಲ್ಲ. ಹಾಗಾಗಿ ಈ ಕ್ಷೇತ್ರಗಳಿಗೆ ಈ ಯೋಜನೆಯಡಿ ಅನುದಾನ ನೀಡುವುದೇಕೆ’ ಎಂದು ಕೆಲವು ಕಾಂಗ್ರೆಸ್‌ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದರು. ನಂತರ ಅಧಿಕಾರಕ್ಕೆ ಬಂದ ಯಡಿಯೂರಪ್ಪ ನೇತೃತ್ವದ ಸರ್ಕಾರ ಆ ಕ್ರಿಯಾ ಯೋಜನೆಯನ್ನೇ ರದ್ದುಪಡಿಸಿತ್ತು. ಇದರಿಂದ ಈ ಕ್ಷೇತ್ರಗಳಿಗೆ ಮೀಸಲಿಟ್ಟಿದ್ದ ಅನುದಾನವೂ ರದ್ದಾಗಿತ್ತು ಎಂದು ಮೂಲಗಳು ತಿಳಿಸಿವೆ.

‘ಕ್ರಿಯಾ ಯೋಜನೆ ಮತ್ತು ಅನುದಾನ ರದ್ದುಪಡಿಸಿದ ಮಾಹಿತಿಯು ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರಿಗಿಂತ ಕೆಳಗಿನ ಹಂತದ ಅಧಿಕಾರಿಗಳ ಗಮನಕ್ಕೆ ಬರಲಿಲ್ಲ. ಕ್ರಿಯಾ ಯೋಜನೆ ರದ್ದುಪಡಿಸುವ ಮುನ್ನ ಆರ್ಥಿಕ ಇಲಾಖೆಯ ಅನುಮತಿ ಪಡೆಯಲಿಲ್ಲ ಎಂದು ಟಿಪ್ಪಣಿ ಸಿದ್ಧಪಡಿಸಲಾಗಿತ್ತು. ಆದರೆ, ಈ ಟಿಪ್ಪಣಿಯನ್ನು ಕುಮಾರಸ್ವಾಮಿ ಅವರಿಗೆ ಆರ್ಥಿಕ ಇಲಾಖೆಯ ಅಧಿಕಾರಿಗಳು ಸೋರಿಕೆ ಮಾಡಿದ್ದರು. ಇದು ಆರ್ಥಿಕ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆ ನಡುವೆ ತಿಕ್ಕಾಟಕ್ಕೆ ಕಾರಣವಾಗಿತ್ತು.’

ADVERTISEMENT

ಈ ಹಿಂದಿನ ಕ್ರಿಯಾ ಯೋಜನೆಯಂತೆ ಈ ನಾಲ್ಕು ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಬೇಕು. ಈ ಅನುದಾನ ತಡೆಹಿಡಿಯಲು ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಎಚ್‌.ಡಿ.ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಇತ್ತೀಚೆಗೆ ಪತ್ರ ಬರೆದಿದ್ದರು.

ಹಿಂದಿನ ಕ್ರಿಯಾ ಯೋಜನೆ ರದ್ದಾಗಿದ್ದರಿಂದ ಈ ನಾಲ್ಕು ಕ್ಷೇತ್ರಗಳಿಗೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಿದ್ದರು. ಆದರೆ, ಅರ್ಥಿಕ ಇಲಾಖೆ ಈ ಪ್ರಸ್ತಾವವನ್ನು ತಿರಸ್ಕರಿಸಿತ್ತು.

ಕುಮಾರಸ್ವಾಮಿ ಅವರು ಯಡಿಯೂರಪ್ಪ ಅವರನ್ನು ಶುಕ್ರವಾರ ಭೇಟಿ ಮಾಡಿದಾಗ ಅನುದಾನ ಬಿಡುಗಡೆಗೆ ಕ್ರಮ ವಹಿಸುವಂತೆ ಮನವಿ ಮಾಡಿದರು ಎಂದು ಮೂಲಗಳು ಹೇಳಿವೆ.

ದಾಸರಹಳ್ಳಿ ಕ್ಷೇತ್ರಕ್ಕೆ ಅನುದಾನ ನೀಡಿ: ಶಾಸಕ ಮಂಜುನಾಥ್‌

ಎಚ್‌.ಡಿ.ಕುಮಾರಸ್ವಾಮಿ ಅವರ ಜೊತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿಯಾದ ದಾಸರಹಳ್ಳಿ ಕ್ಷೇತ್ರದ ಶಾಸಕ ಆರ್‌. ಮಂಜುನಾಥ್‌, ‘ಇತ್ತೀಚೆಗೆ ಸುರಿದ ಮಳೆಯಿಂದ ದಾಸರಹಳ್ಳಿ ಕ್ಷೇತ್ರದಲ್ಲಿ 2 ಸಾವಿರಕ್ಕೂ ಅಧಿಕ ಮನೆಗಳಿಗೆ ಹಾನಿ ಉಂಟಾಗಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ. ಸಂತ್ರಸ್ತರಿಗೆ ಸರ್ಕಾರದಿಂದ ಪರಿಹಾರ ಒದಗಿಸಬೇಕು’ ಎಂದು ಒತ್ತಾಯಿಸಿದರು.

‘ಕ್ಷೇತ್ರದ ಅಭಿವೃದ್ಧಿಗೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಸುಮಾರು
₹ 800 ಕೋಟಿಗಳಷ್ಟು ಅನುದಾನ ಮಂಜೂರಾಗಿತ್ತು. ಅವೆಲ್ಲವನ್ನು ಈಗಿನ ಸರ್ಕಾರ ರದ್ದುಪಡಿಸಿತು. ಇದರಿಂದ ನಗರದ ಹೊರವಲಯದಲ್ಲಿರುವ ಕ್ಷೇತ್ರದ ಅಭಿವೃದ್ಧಿ ಧಕ್ಕೆ ಉಂಟಾಗಿದೆ. ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಬೇಕು’ ಎಂದು ಅವರು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.