ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ .ಶಿವಕುಮಾರ್ ಅವರ ನಿವಾಸಗಳನ್ನು ಸ್ಫೋಟಿಸುವುದಾಗಿ ತಮಿಳುನಾಡು ಡಿಜಿ-ಐಜಿಪಿ ಕಚೇರಿಗೆ ಇ-ಮೇಲ್ ಮೂಲಕ ಬೆದರಿಕೆ ಹಾಕಿರುವ ಸಂಬಂಧ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಟೋಬರ್ 11ರಂದು ತಮಿಳುನಾಡಿನ ಡಿಜಿ-ಐಜಿಪಿ ಅವರ ಅಧಿಕೃತ ಇ-ಮೇಲ್ ವಿಳಾಸಕ್ಕೆ ashwinshekher@outlook.com ಎಂಬ ವಿಳಾಸದಿಂದ ಕರ್ನಾಟಕದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಮನೆಯಲ್ಲಿ ಐಇಡಿ ಮತ್ತು ಆರ್‌ಡಿಎಕ್ಸ್ ಬಾಂಬ್ ಇಟ್ಟಿದ್ದು, ಸ್ಫೋಟಿಸಲಾಗುತ್ತದೆ ಎಂದು ಸಂದೇಶ ಬಂದಿತ್ತು.
ಕೂಡಲೇ ಕರ್ನಾಟಕ ಡಿಜಿಪಿ ಕಚೇರಿಗೆ ಮಾಹಿತಿ ರವಾನೆ ಮಾಡಲಾಗಿದ್ದು, ಬಳಿಕ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರ ಮನೆಗಳನ್ನು ತಪಾಸಣೆ ನಡೆಸಲಾಗಿದೆ. ಆದರೆ, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಪ್ರಾಥಮಿಕ ತನಿಖೆಯಲ್ಲಿ ಸಂದೇಶ ಕಳುಹಿಸಿದ ವ್ಯಕ್ತಿ ತಮಿಳುನಾಡು ಮೂಲದವನು ಎಂಬುದು ಗೊತ್ತಾಗಿದೆ. ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 351(4) (ಕ್ರಿಮಿನಲ್ ಬೆದರಿಕೆ) ಮತ್ತು 353(1)(ಬಿ) (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.