ಬೆಂಗಳೂರು: ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಲು ₹2 ಲಕ್ಷ ಲಂಚ ಪಡೆದ ಆರೋಪದಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗಣೇಶ ಮಂದಿರ ವಾರ್ಡ್ ಸದಸ್ಯರಾಗಿದ್ದ ಎಲ್.ಗೋವಿಂದರಾಜ ಅವರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ವಿಧಿಸಿದ್ದ ನಾಲ್ಕು ವರ್ಷಗಳ ಜೈಲು ಶಿಕ್ಷೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
‘ಬೆಂಗಳೂರು ನಗರ ಜಿಲ್ಲಾ ಲೋಕಾಯುಕ್ತ ವಿಶೇಷ ನ್ಯಾಯಾಲಯ ನನಗೆ ವಿಧಿಸಿರುವ ಜೈಲು ಶಿಕ್ಷೆ ರದ್ದುಪಡಿಸಬೇಕು’ ಎಂದು ಕೋರಿದ್ದ ಗೋವಿಂದರಾಜ ಅವರ ಕ್ರಿಮಿನಲ್ ಮೇಲ್ಮನವಿ ಹಾಗೂ ‘ಅಪರಾಧಿಗೆ ವಿಧಿಸಲಾಗಿರುವ ಶಿಕ್ಷೆಯ ಪ್ರಮಾಣ ಹೆಚ್ಚಳ ಮಾಡಬೇಕು’ ಎಂದು ಕೋರಿದ್ದ ಲೋಕಾಯುಕ್ತ ಪೊಲೀಸರ ಮೇಲ್ಮನವಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.
‘ಅರ್ಜಿದಾರರ ವಿರುದ್ಧದ ಆರೋಪವನ್ನು ಸಾಬೀತುಪಡಿಸುವಲ್ಲಿ ಲೋಕಾಯುಕ್ತ ಪೊಲೀಸರು ಸೂಕ್ತ ಸಾಕ್ಷ್ಯಾಧಾರ ಒದಗಿಸಲು ವಿಫಲರಾಗಿದ್ದಾರೆ ಮತ್ತು ತನಿಖಾ ಪ್ರಕ್ರಿಯೆಯಲ್ಲಿ ದೋಷಗಳಿವೆ’ ಎಂಬ ಅಭಿಪ್ರಾಯದೊಂದಿಗೆ ನ್ಯಾಯಪೀಠ ಶಿಕ್ಷೆ ರದ್ದುಪಡಿಸಿ ಆದೇಶಿಸಿದೆ. ಗೋವಿಂದರಾಜ ಪರ ಪದಾಂಕಿತ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದರು. ಕೆ.ರಾಘವೇಂದ್ರ ವಕಾಲತ್ತು ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.