
ಸಾಂದರ್ಭಿಕ ಚಿತ್ರ
ಬೆಂಗಳೂರು: ಜಮೀನಿನ ಖಾತೆ ಬದಲಾವಣೆಗೆ ₹ 10,000 ಲಂಚ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಕಸಬಾ ಹೋಬಳಿಯ ಮೈಲನಹಳ್ಳಿ ಕಂದಾಯ ವೃತ್ತದ ಗ್ರಾಮ ಲೆಕ್ಕಾಧಿಕಾರಿ ಎಸ್. ಶಿವಕುಮಾರ್ ಅವರನ್ನು ಲೋಕಾಯುಕ್ತದ ಬೆಂಗಳೂರು ಗ್ರಾಮಾಂತರ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ನಗರದ ಉಲ್ಲಾಳದ ಜ್ಞಾನಭಾರತಿ ಬಡಾವಣೆಯ ರೇವಣ್ಣ ಅವರ ಮಕ್ಕಳು ತಂದೆಯ ಉಯಿಲಿನ ಅನುಸಾರ ಜಮೀನಿನ ಖಾತೆ ಬದಲಾವಣೆಗೆ ಕೋರಿ ಅರ್ಜಿ ಸಲ್ಲಿಸಿದ್ದರು. ಖಾತೆ ಬದಲಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ₹ 25,000 ಲಂಚ ನೀಡುವಂತೆ ಗ್ರಾಮ ಲೆಕ್ಕಾಧಿಕಾರಿ ಬೇಡಿಕೆ ಇಟ್ಟಿದ್ದರು. ಈ ಕುರಿತು ರೇವಣ್ಣ ಅವರ ಮಗ ಮಂಜುನಾಥ್ ಲೋಕಾಯುಕ್ತದ ಬೆಂಗಳೂರು ಗ್ರಾಮಾಂತರ ಪೊಲೀಸ್ ಘಟಕಕ್ಕೆ ದೂರು ನೀಡಿದ್ದರು.
₹ 5,000 ಲಂಚದ ಹಣವನ್ನು ಫೋನ್ ಪೇ ಮೂಲಕ ಪಡೆದಿದ್ದ ಆರೋಪಿ, ಎರಡನೇ ಕಂತಿನ ₹ 5,000 ನಗದನ್ನು ನೆಲಮಂಗಲ ಪಟ್ಟಣದಲ್ಲಿರುವ ತನ್ನ ಖಾಸಗಿ ಕಚೇರಿಗೆ ತಲುಪಿಸುವಂತೆ ಸೂಚಿಸಿದ್ದರು. ಶನಿವಾರ ಮಧ್ಯಾಹ್ನ ಅಲ್ಲಿಗೆ ತೆರಳಿದ ಮಂಜುನಾಥ್ ಲಂಚದ ಹಣ ನೀಡಿದರು. ತಕ್ಷಣ ದಾಳಿಮಾಡಿದ ಲೋಕಾಯುಕ್ತ ಪೊಲೀಸರು, ಆರೋಪಿಯನ್ನು ಬಂಧಿಸಿದರು ಎಂದು ಲೋಕಾಯುಕ್ತದ ಅಧಿಕಾರಿಗಳು ತಿಳಿಸಿದ್ದಾರೆ.
ಲೋಕಾಯುಕ್ತದ ಬೆಂಗಳೂರು ಗ್ರಾಮಾಂತರ ಎಸ್‌ಪಿ ಪವನ್ ನೆಜ್ಜೂರು ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇನ್‌ಸ್ಪೆಕ್ಟರ್ ಎಸ್. ನಂದಕುಮಾರ್ ಮತ್ತು ತಂಡ ಈ ಕಾರ್ಯಾಚರಣೆ ನಡೆಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.