ADVERTISEMENT

ಬೆಂಗಳೂರು | ರಾತ್ರಿ ಮನೆಗೆ ನುಗ್ಗಿ ರೌಡಿ ಕೊಲೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2024, 14:36 IST
Last Updated 24 ಜನವರಿ 2024, 14:36 IST
ಕೊಲೆ (ಪ್ರಾತಿನಿಧಿಕ ಚಿತ್ರ)
ಕೊಲೆ (ಪ್ರಾತಿನಿಧಿಕ ಚಿತ್ರ)   

ಬೆಂಗಳೂರು: ಮಾಯಾ ಬಜಾರ್‌ನಲ್ಲಿ ರಾತ್ರಿ ವೇಳೆ ಮನೆಗೆ ನುಗ್ಗಿದ ದುಷ್ಕರ್ಮಿಗಳು, ರೌಡಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಮಾಯಾ ಬಜಾರ್ ನಿವಾಸಿ ಸತೀಶ್ (30) ಕೊಲೆಯಾದ ರೌಡಿಶೀಟರ್. ಈ ಸಂಬಂಧ ವಿವೇಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಮಂಗಳವಾರ ರಾತ್ರಿ ಊಟ ಮಾಡಿ ಮನೆಯ ಹಾಲ್‌ನಲ್ಲಿ ಸತೀಶ್ ಮಲಗಿದ್ದರು. ಇವರ ಪತ್ನಿ ಹಾಗೂ ಮಕ್ಕಳು ಮತ್ತೊಂದು ಕೊಠಡಿಯಲ್ಲಿ ಮಲಗಿದ್ದರು. ತಡರಾತ್ರಿ 2.30ರ ಸುಮಾರಿಗೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ಸತೀಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ಹೊಟ್ಟೆ, ಕೈಕಾಲು ಸೇರಿದಂತೆ ದೇಹದ ಇತರೆ ಭಾಗಗಳ ಮೇಲೆ ಹಲ್ಲೆ ನಡೆಸಿದ ಪರಿಣಾಮ ಸತೀಶ್ ಗಂಭೀರವಾಗಿ ಗಾಯಗೊಂಡಿದ್ದರು. ಚೀರಾಟ ಕೇಳಿ ಪತ್ನಿ ಹಾಗೂ ಮಕ್ಕಳು ಎಚ್ಚರಗೊಂಡು ನೋಡಿದಾಗ ಸತೀಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಹೇಳಿದರು.‌

ADVERTISEMENT

ವಿವಿಧ ಪೊಲೀಸ್‌ ಠಾಣೆಗಳಲ್ಲಿ ಸತೀಶ್‌ ವಿರುದ್ಧ ಕೊಲೆ ಯತ್ನ, ಡಕಾಯಿತಿಗೆ ಸಂಬಂಧಿಸಿದಂತೆ ಪ್ರಕರಣಗಳು ದಾಖಲಾಗಿದ್ದವು. ವಿವೇಕನಗರ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಪಟ್ಟಿ ತೆರೆಯಲಾಗಿತ್ತು. ಇತ್ತೀಚೆಗೆ ಸತೀಶ್ ಹಾಗೂ ಮತ್ತೊಂದು ಗುಂಪಿನ ನಡುವೆ ಗಲಾಟೆ ನಡೆದಿತ್ತು. ಸತೀಶ್ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಇದೇ ದ್ವೇಷಕ್ಕೆ ಮನೆಗೆ ನುಗ್ಗಿ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

‘ಆರೋಪಿಗಳ ಪತ್ತೆಗೆ ತಂಡ ರಚಿಸಲಾಗಿದೆ. ಅಕ್ಕಪಕ್ಕದ ಮನೆಗಳು ಹಾಗೂ ಪ್ರಮುಖ ಜಂಕ್ಷನ್‌ನಲ್ಲಿ ಅಳವಡಿಸಿರುವ ಸಿಸಿ ಟಿ.ವಿ. ಕ್ಯಾಮೆರಾಗಳನ್ನು ಪರಿಶೀಲಿಸಲಾಗಿದೆ. ಸುಳಿವು ದೊರೆತಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.