ADVERTISEMENT

ನ್ಯಾಯಾಲಯ ಸಿಬ್ಬಂದಿಗೆ ವೇತನ ಪರಿಷ್ಕರಣೆಗೆ ಸಮ್ಮತಿ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2021, 21:24 IST
Last Updated 3 ಮಾರ್ಚ್ 2021, 21:24 IST

ಬೆಂಗಳೂರು: ರಾಜ್ಯದ ಕೆಳಹಂತದ ನ್ಯಾಯಾಲಯಗಳ ಸಿಬ್ಬಂದಿಗೆ 2009ರಿಂದ ಪೂರ್ವಾನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡುವ ತೀರ್ಮಾನವನ್ನು ಬುಧವಾರ ನಡೆದ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಸಂಪುಟ ಸಭೆಯ ಬಳಿಕ ಈ ಕುರಿತು ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ, ‘ಕೆಳಹಂತದ ನ್ಯಾಯಾಲಯಗಳಲ್ಲಿನ ಗುಮಾಸ್ತರು, ಲಿಪಿಕ ಮತ್ತು ಇತರ ಹುದ್ದೆಗಳ ಸಿಬ್ಬಂದಿಯ ವೇತನ ಪರಿಷ್ಕರಣೆಗೆ ನ್ಯಾಯಾಲಯ ಆದೇಶ ನೀಡಿತ್ತು. ಅದನ್ನು ಜಾರಿಗೊಳಿಸದ ಕಾರಣದಿಂದ ನ್ಯಾಯಾಂಗ ನಿಂದನೆ ಪ್ರಕರಣವೂ ದಾಖಲಾಗಿತ್ತು. 2009ರಿಂದ ವೇತನ ಶ್ರೇಣಿ ಪರಿಷ್ಕರಣೆಗೆ ಸಂಪುಟ ಒಪ್ಪಿಗೆ ನೀಡಿದೆ’ ಎಂದರು.

ವೇತನ ಪರಿಷ್ಕರಣೆಗೆ ಪೂರಕವಾಗಿ, ‘ಕರ್ನಾಟಕ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರ ಹುದ್ದೆಗಳು) (ನೇಮಕಾತಿ) (ತಿದ್ದುಪಡಿ) ನಿಯಮಗಳು–2020’ಕ್ಕೆ ಸಂಪುಟ ಒಪ್ಪಿಗೆ ನೀಡಿದೆ.

ADVERTISEMENT

ಪ್ರೋತ್ಸಾಹ ಧನ ರದ್ದು: ಕಂಪ್ಯೂಟರ್‌ ಶಿಕ್ಷಣ ಪಡೆಯುವ ಸರ್ಕಾರಿ ನೌಕರರಿಗೆ ₹ 5,000 ಪ್ರೋತ್ಸಾಹಧನ ನೀಡುವ ಯೋಜನೆಯನ್ನು 2012ರಲ್ಲಿ ಜಾರಿಗೆ ತರಲಾಗಿತ್ತು. ಈಗ ಎಲ್ಲ ನೌಕರರೂ ಕಂಪ್ಯೂಟರ್‌ ಜ್ಞಾನ ಹೊಂದಿರುವ ಕಾರಣದಿಂದ ಪ್ರೋತ್ಸಾಹಧನ ನೀಡುವ ಯೋಜನೆಯನ್ನು ರದ್ದು ಮಾಡುವ ತೀರ್ಮಾನವನ್ನು ಸಂಪುಟ ಸಭೆ ಕೈಗೊಂಡಿದೆ. ಪ್ರೋತ್ಸಾಹ ಧನ ರದ್ದತಿಗಾಗಿ ‘ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆ) (ತಿದ್ದುಪಡಿ) ನಿಯಮಗಳು–2021’ಕ್ಕೆ ಅನುಮೋದನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಸರ್ಕಾರಿ ಹಾಗೂ ಅನುದಾನಿತ ಆಯುಷ್‌ ವೈದ್ಯಕೀಯ ಕಾಲೇಜುಗಳು, ಫಾರ್ಮಸಿ ಕಾಲೇಜಿನ ಬೋಧಕ ಸಿಬ್ಬಂದಿಗೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ ವೇತನ ಶ್ರೇಣಿಯವನ್ನು ನೀಡುವ ಪ್ರಸ್ತಾವಕ್ಕೂ ಸಂಪುಟ ಒಪ್ಪಿಗೆ ಸೂಚಿಸಿದೆ.

‘ಕಲ್ಯಾಣ ಕರ್ನಾಟಕ‘ಕ್ಕೆ ಹಾಸ್ಟೆಲ್‌: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಬೆಂಗಳೂರಿಗೆ ಬರುವ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ವಸತಿ ಸೌಕರ್ಯ ಒದಗಿಸಲು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ₹ 59 ಕೋಟಿ ವೆಚ್ಚದಲ್ಲಿ ರಾಜಧಾನಿಯಲ್ಲಿ 400 ವಿದ್ಯಾರ್ಥಿಗಳ ಸಾಮರ್ಥ್ಯದ ಹಾಸ್ಟೆಲ್‌ ನಿರ್ಮಿಸುವ ಪ್ರಸ್ತಾವಕ್ಕೂ ಸಂಪುಟ ಒಪ್ಪಿಗೆ ನೀಡಿದೆ ಎಂದು ಬೊಮ್ಮಾಯಿ ತಿಳಿಸಿದರು.

ಮಂಡಳಿ ಅಧ್ಯಕ್ಷರಾಗಿ ಸಿಎಂ:

ರಾಜ್ಯ ಜಲ ಸಾರಿಗೆ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಮುಖ್ಯಮಂತ್ರಿಯವರಿಗೆ ನೀಡುವುದಕ್ಕೆ ಪೂರಕವಾಗಿ ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವಕ್ಕೂ ಒಪ್ಪಿಗೆ ನೀಡಲಾಗಿದೆ. ಈವರೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷರಾಗಿದ್ದರು. ಮುಂದೆ ಅಧ್ಯಕ್ಷರ ಹುದ್ದೆಯನ್ನು ಮುಖ್ಯಮಂತ್ರಿಯವರಿಗೆ ಮತ್ತು ಉಪಾಧ್ಯಕ್ಷರ ಹುದ್ದೆಯನ್ನು ಬಂದರು ಸಚಿವರಿಗೆ ನೀಡುವುದಕ್ಕೆ ಪೂರಕವಾಗಿ ಕಾಯ್ದೆಗೆ ತಿದ್ದುಪಡಿ ತರಲಾಗುವುದ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.