ADVERTISEMENT

ಜಾತಿ ಗಣತಿ: ಸರ್ಕಾರದ ಮೇಲೆ ಒತ್ತಡ ಹೇರಲು ಸಿದ್ದರಾಮಯ್ಯ ನೇತೃತ್ವದಲ್ಲಿ ಅಹಿಂದ ಸಭೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2021, 2:11 IST
Last Updated 11 ಜುಲೈ 2021, 2:11 IST
ಸಿದ್ದರಾಮಯ್ಯ
ಸಿದ್ದರಾಮಯ್ಯ    

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ಯ (ಜಾತಿ ಗಣತಿ) ವರದಿ ಸ್ವೀಕರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ‘ಅಹಿಂದ ಅಸ್ತ್ರ’ ಬಳಸಲು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.

ಸಣ್ಣಪುಟ್ಟ ಸಮುದಾಯಗಳನ್ನು ಒಗ್ಗೂಡಿಸಿ ಬೃಹತ್‌ಮಟ್ಟದ ಸಾಮಾಜಿಕ ಆಂದೋಲನ ರೂಪಿಸುವ ಜೊತೆಗೆ, ಕೋರ್ಟ್‌ ಮೆಟ್ಟಿಲೇರಲು ಕೂಡಾ ಅವರು ವೇದಿಕೆ ಸಿದ್ಧಪಡಿಸುತ್ತಿದ್ದಾರೆ. ಹಂತ ಹಂತವಾಗಿ ಹೋರಾಟ ಹಮ್ಮಿಕೊಳ್ಳುವ ಬಗ್ಗೆ ಅತಿ ಹಿಂದುಳಿದ ವರ್ಗಗಳ ಜಾಗೃತಿ ಸಮಿತಿಯ ಪ್ರಮುಖರ ಜೊತೆ ಅವರು ಸಮಾಲೋಚನೆ ನಡೆಸಿದ್ದಾರೆ.

‘ಜಾತಿ ಗಣತಿ ವರದಿ ಸ್ವೀಕರಿಸಬೇಕಾದ ತುರ್ತಿನ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಶೀಘ್ರದಲ್ಲಿ ಸಿದ್ದರಾಮಯ್ಯ ಪತ್ರ ಬರೆಯಲಿದ್ದಾರೆ. ಸುಮಾರು ₹ 159 ಕೋಟಿ ವೆಚ್ಚದಲ್ಲಿ ಸಿದ್ಧಪಡಿಸಿರುವ ವರದಿಯನ್ನು ಸ್ವೀಕರಿಸುತ್ತೀರಾ, ತಿರಸ್ಕರಿಸುತ್ತೀರಾ? ವೈಜ್ಞಾನಿಕವಾಗಿ ಅಧ್ಯಯನ ಮಾಡಿ ತಯಾರಿಸಿರುವ ಈ ವರದಿಯನ್ನು ಆಧರಿಸಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸ

ADVERTISEMENT

ಬಹುದು. ಯಾವ ಕಾರಣಕ್ಕೆ ವರದಿಯನ್ನು ಸ್ವೀಕರಿಸುತ್ತಿಲ್ಲ ಎಂದು ಪತ್ರದಲ್ಲಿ ಸಿದ್ದರಾಮಯ್ಯ ಪ್ರಶ್ನಿಸಲಿದ್ದಾರೆ. ಮುಖ್ಯಮಂತ್ರಿ ಸ್ಪಂದಿಸದೇ ಇದ್ದರೆ ಹಂತ ಹಂತವಾಗಿ ಹೋರಾಟ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ’ ಎಂದು ಸಿದ್ದರಾಮಯ್ಯ ಅವರ ಆಪ್ತ ಮೂಲಗಳು ತಿಳಿಸಿವೆ.

‘ವರದಿಯನ್ನು ಶೀಘ್ರದಲ್ಲಿ ಸ್ವೀಕರಿಸುವಂತೆ ಒತ್ತಡ ತಂದು ಅಂಗೀಕರಿಸುವಂತೆ ಮಾಡಲು ಹೋರಾಟದ ಹಾದಿ ತುಳಿಯಲೇಬೇಕಾದ ಅನಿವಾರ್ಯತೆಯ ಬಗ್ಗೆ ಹಿಂದುಳಿದ ಸಮುದಾಯಗಳ ಮುಖಂಡರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅತೀ ಹಿಂದುಳಿದ ಜಾತಿಗಳ ಜೊತೆಗೆ ‘ಅಹಿಂದ’ವನ್ನೂ ಒಟ್ಟಿಗೆ ತಂದು ಬೃಹತ್‌ಮಟ್ಟದ ಹೋರಾಟ ಹಮ್ಮಿಕೊಳ್ಳುವ ಬಗ್ಗೆಯೂ ಚರ್ಚೆ ನಡೆದಿದೆ. ಹಿಂದುಳಿದ ವರ್ಗಗಳ ಒಕ್ಕೂಟ ಮತ್ತು ದಲಿತ ಸಂಘಟನೆಗಳನ್ನು ಒಟ್ಟುಗೂಡಿಸಿ ವ್ಯವಸ್ಥಿತವಾಗಿ ಕಾರ್ಯಕ್ರಮ ಆಯೋಜಿಸುವ ಜೊತೆಗೆ ಏನೇನು ಮಾಡಬಹುದು ಎಂಬ ಬಗ್ಗೆ ಸಮಾಲೋಚನೆ ನಡೆಸಲಾಗಿದೆ’ ಎಂದೂ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಜೊತೆಗಿನ ಸಭೆಯ ಬಗ್ಗೆ ಮಾಹಿತಿ ನೀಡಿದ ಅತೀ ಹಿಂದುಳಿದ ವರ್ಗಗಳ ಜಾಗೃತಿ ಸಮಿತಿಯ ಗೌರವಾಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು, ‘ಸಮೀಕ್ಷಾ ವರದಿ ಸ್ವೀಕರಿಸುವಂತೆ ಒತ್ತಡ ಹೇರಲು ಕಾನೂನು ಮತ್ತು ಸಾಮಾಜಿಕ ಹೋರಾಟ ಅಗತ್ಯದ ಬಗ್ಗೆ ಸಿದ್ದರಾಮಯ್ಯ ಜೊತೆ ಸಮಾಲೋಚನೆ ನಡೆಸಿದ್ದೇವೆ. ಶೀಘ್ರದಲ್ಲಿ ಬೃಹತ್‌ ಹೋರಾಟ ರೂಪಿಸಲಾಗುವುದು’ ಎಂದರು.

ಹಿಂದಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಆಧ್ಯಕ್ಷ ಸಿ.ಎಸ್‌. ದ್ವಾರಕಾನಾಥ್, ವಿಧಾನ ಪರಿಷತ್ ಸದಸ್ಯರಾದ ಪಿ.ಆರ್‌. ರಮೇಶ್, ಮಾಜಿ ಸದಸ್ಯರಾದ ಎಂ.ಸಿ. ವೇಣುಗೋಪಾಲ್‌, ಪ್ರದೇಶ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಅವರು ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿದ್ದಾರೆ. ಬಳಿಕ ಸಮಿತಿ ಪ್ರಮುಖರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನೂ ಭೇಟಿ ಮಾಡಿ ಚರ್ಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.