ADVERTISEMENT

ಜಾತಿಗಣತಿ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ

ಎಚ್‌.ಕಾಂತರಾಜು ಆಯೋಗದ ವರದಿ ಅನುಷ್ಠಾನ ಕೋರಿಕೆ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2022, 20:13 IST
Last Updated 23 ಆಗಸ್ಟ್ 2022, 20:13 IST

ಬೆಂಗಳೂರು: ‘ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಎಚ್‌.ಕಾಂತರಾಜು ಅವಧಿಯಲ್ಲಿ ನಡೆಸಲಾಗಿರುವ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ವರದಿಯನ್ನು(ಜಾತಿಗಣತಿ) ಸರ್ಕಾರಕ್ಕೆ ಸಲ್ಲಿಸಲು ನಿರ್ದೇಶಿಸಬೇಕು’ ಎಂದು ಕೋರಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯಿಂದ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಹಿಂದೆ ಸರಿದ್ದಾರೆ.

‘ವರದಿ ಅನುಷ್ಠಾನಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ, ‘ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಗೌರವಾಧ್ಯಕ್ಷ’ರೂ ಆದ ಚಲನಚಿತ್ರನಟ ’ಮುಖ್ಯಮಂತ್ರಿ‘ ಚಂದ್ರು ಸೇರಿದಂತೆ ಒಟ್ಟು 13 ವಿವಿಧ ಹಿಂದುಳಿದ ವರ್ಗಗಳ ಸಂಘ-ಸಂಸ್ಥೆಗಳು ಸಲ್ಲಿಸಿರುವ ಈ ಅರ್ಜಿಯು,ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ಮುಂದೆ ವಿಚಾರಣೆಗೆ ನಿಗದಿಯಾಗಿತ್ತು.

ವಿಚಾರಣೆ ವೇಳೆ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು, ‘ಅರ್ಜಿಯ ಪ್ರತಿವಾದಿಯಲ್ಲಿ ಒಬ್ಬರಾದ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಹಾಲಿ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ನನಗೆ ಪರಿಚಯ ಇರುವ ಕಾರಣ ನಾನು ಈ ಅರ್ಜಿ ವಿಚಾರಣೆಯಿಂದ ಹಿಂದೆ ಸರಿಯುತ್ತಿದ್ದೇನೆ’ ಎಂದು ತಿಳಿಸಿದರು.

ADVERTISEMENT

ಇದನ್ನು ಪರಿಗಣಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ, ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರನ್ನು ಹೊರತುಪಡಿಸಿದ ವಿಭಾಗೀಯ ನ್ಯಾಯಪೀಠದ ಮುಂದೆ ಅರ್ಜಿ ವಿಚಾರಣೆಗೆ ನಿಗದಿಪಡಿಸುವಂತೆ ರಿಜಿಸ್ಟ್ರಾರ್ ಕಚೇರಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿದರು.

ಅರ್ಜಿದಾರರಲ್ಲಿ ತಿಗಳ ಕ್ಷತ್ರಿಯ ಮಹಾಸಭಾ, ಕರ್ನಾಟಕ ಪ್ರದೇಶ ಕುರುಬರ ಸಂಘ, ಕರ್ನಾಟಕ ರಾಜ್ಯ ಮಡಿವಾಳರ ಸಂಘ, ಸೂರ್ಯವಂಶ ಆರ್ಯ ಕ್ಷತ್ರಿಯ ಸಮಾಜ, ಹಿಂದೂ ಸಾದರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ರಾಜ್ಯ ಸವಿತಾ ಕಲಾ ಸಂಘ, ಕರ್ನಾಟಕ ರಾಜ್ಯ ದೇವಾಂಗ ಸಂಘ, ಕರ್ನಾಟಕ ರಾಜ್ಯ ಕ್ಷತ್ರಿಯ ಸಂಘ, ಕರ್ನಾಟಕ ರಾಜ್ಯ ಸುಡುಗಾಡು ಸಿದ್ದ ಮಹಾ ಸಂಘ, ಅಲೆಮಾರಿ ಬುಡಕಟ್ಟು ಮಹಾಸಭಾಗಳು ಸೇರಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.