ADVERTISEMENT

ಜಾತಿ ವ್ಯವಸ್ಥೆ ನಿಂತ ನೀರು: ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 3 ಮೇ 2025, 16:07 IST
Last Updated 3 ಮೇ 2025, 16:07 IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಲಹಂಕದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕಂಚಿನ ಪ್ರತಿಮೆಯನ್ನು ಶನಿವಾರ ಅನಾವರಣ ಮಾಡಿದರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಲಹಂಕದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕಂಚಿನ ಪ್ರತಿಮೆಯನ್ನು ಶನಿವಾರ ಅನಾವರಣ ಮಾಡಿದರು   

ಬೆಂಗಳೂರು: ‘ನಮ್ಮ ದೇಶದ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಆದರೆ ವರ್ಗಕ್ಕೆ ಚಲನೆಯಿದೆ. ನಮ್ಮ ಸಮಾಜದಲ್ಲಿ ಶ್ರೀಮಂತ ಬಡವನಾದರೂ, ಬಡವ ಶ್ರೀಮಂತನಾದರೂ ಕಡೆಯವರೆಗೂ ಉಳಿದು ಕೊಳ್ಳುವುದು ಹುಟ್ಟಿದ ಜಾತಿಯಲ್ಲಿ ಮಾತ್ರ. ಆದ್ದರಿಂದ ಈ ಜಾತಿ ವ್ಯವಸ್ಥೆ ನಿಂತ ನೀರಿನಂತೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಯಲಹಂಕದಲ್ಲಿ 14 ಅಡಿ ಎತ್ತರದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕಂಚಿನ ಪ್ರತಿಮೆಯನ್ನು ಶನಿವಾರ ಅನಾವರಣ ಮಾಡಿ ಅವರು ಮಾತನಾಡಿದರು.

‘ನಮ್ಮ ದೇಶ, ನಮ್ಮ ಸಮಾಜಕ್ಕೆ ಅವಶ್ಯವಾಗಿದ್ದಂತಹ ಅತ್ಯುತ್ತಮ ಸಂವಿಧಾನವನ್ನು ನೀಡಿದವರು ಬಾಬಾ ಸಾಹೇಬ್ ಅಂಬೇಡ್ಕರ್. ಈ ದೇಶದ ಸಾಮಾಜಿಕ ಪರಿಸ್ಥಿತಿ, ಜಾತಿ ವ್ಯವಸ್ಥೆ ಅಂಬೇಡ್ಕರ್ ಅವರಿಗೆ ಅರ್ಥ ಆದಷ್ಟು ಬೇರೆಯವರಿಗೆ ಆಗಿರಲಿಲ್ಲವೆಂದರೆ ಅದು ಅತಿಶಯೋಕ್ತಿಯಲ್ಲ. ಜಾತಿ ವ್ಯವಸ್ಥೆ ಇದ್ದಷ್ಟೂ ಕಾಲ ಮೀಸಲಾತಿ ಇರಲೇಬೇಕು ಎಂಬುದನ್ನು ಅವರು ಬಲವಾಗಿ ನಂಬಿದ್ದರು’ ಎಂದರು.

ADVERTISEMENT

‘ಅಂಬೇಡ್ಕರ್ ಅವರು, ಸ್ವಾತಂತ್ರ್ಯ ಯಶಸ್ಸನ್ನು ಕಾಣಬೇಕಾದರೆ ಈ ದೇಶದ ಅವಕಾಶ ವಂಚಿತರು, ಶೋಷಿತರು, ದೌರ್ಜನ್ಯಕ್ಕೆ ಒಳಗಾದವರಿಗೆಲ್ಲರಿಗೂ ಸಮಾನ ಅವಕಾಶಗಳು ದೊರೆಯಬೇಕು. ಅವರೆಲ್ಲರೂ ಸಾಮಾಜಿಕ, ಆರ್ಥಿಕವಾಗಿ ಸಬಲರಾದಾಗ ಮಾತ್ರ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಸಿಗುತ್ತದೆ ಎಂದು ಹೇಳಿದ್ದರು’ ಎಂದರು.

‘ಸಂವಿಧಾನ ರಕ್ಷಣೆಯಾದರೆ ನಮ್ಮ ಹಕ್ಕುಗಳೂ ರಕ್ಷಣೆಯಾಗುತ್ತವೆ. ಸಂವಿಧಾನಕ್ಕೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳವುದು ನಮ್ಮೆಲ್ಲರ ಕರ್ತವ್ಯ. ನಮಗೆ ರಾಜಕೀಯ ಸ್ವಾತಂತ್ರ್ಯ ಸಿಕ್ಕಿದೆ. ಆದರೆ ಸಾಮಾಜಿಕ, ಆರ್ಥಿಕ ಸಿಕ್ಕಿಲ್ಲ. ಎಲ್ಲಿವರೆಗೂ ಅದು ಸಿಗುವುದಿಲ್ಲ ಅಲ್ಲಿಯವರೆಗೆ ಸಮಾಜದಲ್ಲಿ ಸಮಾನತೆ ಕಾಣಲು ಸಾಧ್ಯವಿಲ್ಲ. ನಮ್ಮ ಸರ್ಕಾರವು ಇದನ್ನೇ ನಂಬಿದ್ದು, ನಾವು ರೂಪಿಸುತ್ತಿರುವ ಕಾರ್ಯಕ್ರಮಗಳೂ ಇದೇ ಹಿನ್ನೆಲೆಯಿಂದ ಮೂಡಿಬಂದಿವೆ’ ಎಂದು ತಿಳಿಸಿದರು.

‘ಜನರನ್ನು ಮುಂದಕ್ಕೆ ಎಳೆಯಲು ಪ್ರಯತ್ನ ಮಾಡಬೇಕು. ಮುಂದಕ್ಕೆ ಎಳೆಯಲು ಸಾಧ್ಯವಾಗದಿದ್ದರೆ ಅಲ್ಲೇ ಬಿಡಿ. ಆದರೆ ಹಿಂದಕ್ಕೆ ಮಾತ್ರ ತಳ್ಳಬೇಡಿ’ ಎಂದರು.

‘ಶಾಸಕ ಎಸ್‌.ಆರ್. ವಿಶ್ವನಾಥ್ ಅವರು ಯಲಹಂಕದಲ್ಲಿ ಪಕ್ಷಾತೀತವಾಗಿ ಕೆಲಸ ಮಾಡುವುದಾಗಿ ಹೇಳಿರುವುದನ್ನು ನಾನು ಸ್ವಾಗತಿಸುತ್ತೇನೆ. ಯಲಹಂಕದಲ್ಲಿ ದಲಿತರು, ಹಿಂದುಳಿದವರೇ ಹೆಚ್ಚಿದ್ದು, ಎಲ್ಲರಿಗೂ ನ್ಯಾಯ ದೊರಕಿಸುವ ಕೆಲಸವನ್ನು ವಿಶ್ವನಾಥ್ ಮಾಡುತ್ತಿದ್ದಾರೆ. ವಿಶ್ವನಾಥ್ ಅವರ ಕ್ಷೇತ್ರಕ್ಕೆ ಅನುದಾನದ ಬೇಡಿಕೆಯನ್ನು ಪರಿಗಣಿಸಲಾಗುವುದು’ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ, ಕಂದಾಯ ಸಚಿವ ಕೃಷ್ಣಬೈರೇಗೌಡ, ನಗರಾಭಿವೃದ್ಧಿ ಸಚಿವ ಸುರೇಶ್‌,  ಶಾಸಕ ಎಸ್‌.ಆರ್‌.ವಿಶ್ವನಾಥ್‌ ಮಾತನಾಡಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಜೀರ್‌ ಅಹ್ಮದ್‌, ಕಾನೂನು ಸಲಹೆಗಾರ ಎ.ಎಸ್‌.ಪೊನ್ನಣ್ಣ, ಬೆಂಗಳೂರುನಗರ ಜಿಲ್ಲಾಧಿಕಾರಿ ಜಗದೀಶ್, ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹರೀಶ್‌, ದಲಿತ ಸಂಘಟನೆಗಳ ಮುಖಂಡರಾದ ವಿ.ನಾಗರಾಜ್‌, ಎಚ್‌.ಮಾರಪ್ಪ, ಮುನಿಆಂಜಿನಪ್ಪ, ಬಿ.ಆರ್‌.ಮುನಿರಾಜು, ರಾಜಣ್ಣ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.