ADVERTISEMENT

ಸಿಗದ ಕೇಂದ್ರ ಪರಿಹಾರ: ದೇವೇಗೌಡ ಗರಂ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2019, 19:45 IST
Last Updated 15 ಆಗಸ್ಟ್ 2019, 19:45 IST
   

ಬೆಂಗಳೂರು: ರಾಜ್ಯದಲ್ಲಿ ಪ್ರವಾಹ ಪರಿಹಾರಕ್ಕೆ ಕೇಂದ್ರ ಸರ್ಕಾರ ಈವರೆಗೆ ಒಂದು ರೂಪಾಯಿ ಕೂಡ ಬಿಡುಗಡೆ ಮಾಡಿಲ್ಲ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಕ್ಷದ ಕಚೇರಿ ಜೆ.ಪಿ ಭವನದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ಪ್ರವಾಹಕ್ಕೆ ಸಂಬಂಧಿಸಿದಂತೆ ಪ್ರಧಾನಿಯವರು ಒಂದೇ ಒಂದು ಸಭೆಯನ್ನು ಈವರೆಗೂ ಕರೆದಿಲ್ಲ. ಹಣವನ್ನೂ ನೀಡಿಲ್ಲ. ಅವರಿಗೆ ಏನು ಕಷ್ಟ ಇದೆಯೋ ಗೊತ್ತಿಲ್ಲ ಎಂದು ಹೇಳಿದರು.

‘ರಾಜ್ಯದಲ್ಲಿ ಆಗಿರುವ ಹಾನಿಯ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ವರದಿ ಸಲ್ಲಿಸಲಿದೆ. ಆ ಬಳಿಕ ಕೆಂದ್ರದ ತಂಡ ಬಂದು ಅಧ್ಯಯನ ಮಾಡಲಿದ್ದು, ಆಗಲೂ ಕೇಂದ್ರ ಸರ್ಕಾರ ಪರಿಹಾರ ನೀಡದೆ ಸುಮ್ಮನಿದ್ದರೆ, ನಾನೇ ಪ್ರಧಾನಿಯವರನ್ನು ಭೇಟಿ ಮಾಡುತ್ತೇನೆ.ರೈತರು ಮತ್ತು ಸಾಮಾನ್ಯ ಜನರು ಸಂಕಷ್ಟದಲ್ಲಿದ್ದಾರೆ ಅಗತ್ಯವಿದ್ದರೆ ನಿಯೋಗ ಒಯ್ಯಲೂ ಸಿದ್ಧನಿದ್ದೇನೆ’ ಎಂದು ತಿಳಿಸಿದರು.

ADVERTISEMENT

ತಕ್ಷಣವೇ ಮಧ್ಯಂತರ ಪರಿಹಾರ ನೀಡುವಂತೆ ಈಗಾಗಲೇ ಪ್ರಧಾನಿಯವರಿಗೆ ಪತ್ರ ಬರೆದಿದ್ದೇನೆ. ಪ್ರವಾಹ ಪರಿಸ್ಥಿತಿ ಕಡಿಮೆ ಆದ ನಂತರ ಆ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರವಾಹದಿಂದ ಸಂಕಷ್ಟದ ಸ್ಥಿತಿ ನಿರ್ಮಾಣವಾಗಿದೆ. ಸಾವು– ನೋವುಗಳು ಸಂಭವಿಸಿವೆ. ರಾಜ್ಯ ಸರ್ಕಾರವೂ ಕ್ರಮ ತೆಗೆದುಕೊಳ್ಳುತ್ತಿದ್ದು, ಎಲ್ಲರೂ ಒಗ್ಗಟ್ಟಾಗಿ ಪರಿಸ್ಥಿತಿ ನಿಭಾಯಿಸಬೇಕಾಗಿದೆ ಎಂದು ದೇವೇಗೌಡ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.