ADVERTISEMENT

ಸಿಇಟಿ ಬಿಕ್ಕಟ್ಟು: 22ಕ್ಕೆ ವಿಚಾರಣೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2022, 19:50 IST
Last Updated 20 ಸೆಪ್ಟೆಂಬರ್ 2022, 19:50 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಪುನರಾವರ್ತಿತ ವಿದ್ಯಾರ್ಥಿಗಳ 2021ನೇ ಸಾಲಿನ ಪಿಯು ಅಂಕಗಳನ್ನು 2022ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸುವ ವಿಚಾರದಲ್ಲಿ ಉದ್ಭವಿಸಿರುವ ಬಿಕ್ಕಟ್ಟು ಪರಿಹರಿಸುವ ದಿಸೆಯಲ್ಲಿ ಸೂಕ್ತ ಯೋಜನೆಯೊಂದನ್ನು ರೂಪಿಸಲು ಸಮಯಾವಕಾಶ ನೀಡಬೇಕು‘ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮನವಿ ಮಾಡಿದೆ.

ಇದನ್ನು ಮಾನ್ಯ ಮಾಡಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ, ‘ವಿದ್ಯಾರ್ಥಿಗಳಿಗೆ ತೊಂದರೆಯಾಗದಂತಹ ಮತ್ತು ಎಲ್ಲರಿಗೂ ನೆರವಾಗುವಂತಹ ಪರಿಹಾರ ಕ್ರಮಗಳನ್ನು ರೂಪಿಸಿಕೊಂಡು ಬನ್ನಿ’ ಎಂದು ಸರ್ಕಾರಕ್ಕೆ ಸಲಹೆ ನೀಡಿ ಇದೇ 22ರವರೆಗೆ ಸಮಯಾವಕಾಶ ನೀಡಿದೆ.

ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ, 2020-21ನೇ ಸಾಲಿನಲ್ಲಿ ದ್ವಿತೀಯ ಪಿಯು ತೇರ್ಗಡೆಯಾದ ವಿದ್ಯಾರ್ಥಿಗಳು ಗಳಿಸಿದ ಶೇ 50 ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಪಡೆದ ಶೇ 50ರಷ್ಟು ಅಂಕಗಳನ್ನು ಪರಿಗಣಿಸಿ ರೀ–ಡೂ ಮಾಡಿ ಹೊಸ ರ‍್ಯಾಂಕ್ ಪಟ್ಟಿ ಪ್ರಕಟಿಸಬೇಕು‘ ಎಂದುಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ನಿರ್ದೇಶಿಸಿದ್ದ ಹೈಕೋರ್ಟ್‌ ಏಕಸದಸ್ಯ ನ್ಯಾಯಪೀಠದ ತೀರ್ಪನ್ನು ಪ್ರಶ್ನಿಸಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಸಲ್ಲಿಸಿರುವ ಮೇಲ್ಮನವಿಯನ್ನು ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ADVERTISEMENT

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ‘ಪುನರಾವರ್ತಿತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರಿಹಾರ ಯೋಜನೆಯೊಂದನ್ನು ರೂಪಿಸಲಾಗುವುದು. ಅದು ಪ್ರತಿವಾದಿ (ಪುನರಾವರ್ತಿತ) ವಿದ್ಯಾರ್ಥಿಗಳಿಗೆ ಒಪ್ಪಿಗೆಯಾದರೆ ಸಮಸ್ಯೆ ಇತ್ಯರ್ಥಪಡಿಸಬಹುದು. ಅದಕ್ಕಾಗಿ ಕಾಲಾವಕಾಶ ನೀಡಬೇಕು’ ಎಂದು ಕೋರಿದರು.ವಿಚಾರಣೆಯನ್ನು ಇದೇ 22ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.