ADVERTISEMENT

ಪಿಯು ಕಾಲೇಜುಗಳಲ್ಲಿ ಸಿಇಟಿ ಸಹಾಯ ಕೇಂದ್ರ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2022, 19:36 IST
Last Updated 25 ನವೆಂಬರ್ 2022, 19:36 IST

ಬೆಂಗಳೂರು: ವಿದ್ಯಾರ್ಥಿಗಳು ತಪ್ಪಿಲ್ಲದೆ ಸಿಇಟಿ ಅರ್ಜಿ ಭರ್ತಿ ಮಾಡುವುದನ್ನು ಕಲಿಸಲು ರಾಜ್ಯದ ಎಲ್ಲ ವಿಜ್ಞಾನ ಪದವಿಪೂರ್ವ ಕಾಲೇಜುಗಳಲ್ಲೂ ಸಹಾಯ ಕೇಂದ್ರ ಸ್ಥಾಪಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸಾಕಷ್ಟು ವಿದ್ಯಾರ್ಥಿಗಳು ಸಿಇಟಿ ಅರ್ಜಿಯಲ್ಲಿ ಆರ್.ಡಿ. ಸಂಖ್ಯೆ, ತಂದೆಯ ಹೆಸರು, ಜಾತಿ ಇತ್ಯಾದಿಗಳನ್ನು ತಪ್ಪಾಗಿ ದಾಖಲಿಸುತ್ತಿದ್ದಾರೆ. ಇದನ್ನೆಲ್ಲ ಸರಿಪಡಿಸಲು ಏಳೆಂಟು ಬಾರಿ ಅವಕಾಶ ನೀಡಲಾಗುತ್ತಿದೆ. ಇದರಿಂದ ಸಮಯ ವ್ಯರ್ಥವಾಗುತ್ತಿದೆ. ಉಳಿದ ಪ್ರಕ್ರಿಯೆಗಳೂ ವಿಳಂಬವಾಗುತ್ತಿವೆ. ಅದಕ್ಕಾಗಿ ಪಿಯುನಲ್ಲೇ ಸಿಇಟಿ ಅರ್ಜಿ ತುಂಬಲು ಕಲಿಸುವ ವಿದ್ಯಾರ್ಥಿ ಸ್ನೇಹಿ ವ್ಯವಸ್ಥೆ ರೂಪಿಸಲಾಗುವುದು’ ಎಂದರು.

ಪ್ರತಿ ಕಾಲೇಜಿನಲ್ಲೂ ತಲಾ 100 ವಿದ್ಯಾರ್ಥಿಗಳಿಗೆ ಒಬ್ಬ ಉಪನ್ಯಾಸಕರನ್ನ ಸಂಯೋಜಕರನ್ನಾಗಿ ನೇಮಿಸಲಾಗುವುದು. ಜಿಲ್ಲೆಗೆ ತಲಾ ನಾಲ್ವರು ಮುಖ್ಯ ತರಬೇತುದಾರರನ್ನು ಒದಗಿಸಲಾಗುವುದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ತರಬೇತಿ ಕೊಡಲಾಗುವುದು ಎಂದರು.

ADVERTISEMENT

ಎಸ್ಸೆಸ್ಸೆಲ್ಸಿ‌ ಹಂತದಲ್ಲಿನ ವಿದ್ಯಾರ್ಥಿಗಳ ಸಾಧನೆ ಮೇಲೆ ನಿಗಾ ವಹಿಸುವ ವ್ಯವಸ್ಥೆಯನ್ನು (ಎಸ್ಎಟಿಎಸ್) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಜತೆ ಸಂಯೋಜನೆಗೊಳಿಸುವ ಕುರಿತು ಚರ್ಚಿಸಲಾಯಿತು. ಯಾವ ರೀತಿಯ ಮಾಹಿತಿ ಅಗತ್ಯ ಇದೆ ಎನ್ನುವುದನ್ನು ಕೆಇಎ ತಿಳಿಸಲಿದೆ. ಎರಡೂ ಇಲಾಖೆಗಳ ಸಮನ್ವಯದಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬಹುದು ಎಂದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಮಾತನಾಡಿ, ಈಗ ಇರುವ ಎಸ್ಎಟಿ ವ್ಯವಸ್ಥೆಯಲ್ಲಿ ಲಭ್ಯವಾಗುವ ವಿದ್ಯಾರ್ಥಿಗಳ ವಿವರಗಳನ್ನು ಸಿಇಟಿ ಅರ್ಜಿಯಲ್ಲಿ ವಿಲೀನಗೊಳಿಸಲು ಚಿಂತಿಸಲಾಗುತ್ತಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.