
ಚಂದನ್
ಬೆಂಗಳೂರು: ಕೆನಡಾದಲ್ಲಿ ಅಪರಿಚಿತರಿಂದ ಗುಂಡಿನ ದಾಳಿಗೆ ಒಳಗಾಗಿ ಮೃತಪಟ್ಟಿರುವ ನೆಲಮಂಗಲ ಮೂಲದ ಚಂದನ್ ಕುಮಾರ್ ಅವರ ಪಾರ್ಥೀವ ಶರೀರವನ್ನು ಆದಷ್ಟು ಶೀಘ್ರ ಭಾರತಕ್ಕೆ ತರಲು ರಾಜ್ಯ ಪೊಲೀಸ್ ಇಲಾಖೆಯ ಮೂಲಕ ಕೇಂದ್ರ ವಿದೇಶಾಂಗ ಸಚಿವಾಲಯದ ಸಹಕಾರ ಕೋರಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ.
ಈ ಕುರಿತು ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು ಮೃತರಿಗೆ ಸಂತಾಪ ಸೂಚಿಸಿದ್ದಾರೆ.
ಕೆನಡಾ ದೇಶದ ಟೊರಾಂಟೋ ನಗರದಲ್ಲಿ ಬೆಂಗಳೂರಿನ ನೆಲಮಂಗಲ ಮೂಲದ ಚಂದನ್ ಕುಮಾರ್ ಅವರು ಗುಂಡಿನ ದಾಳಿಯಲ್ಲಿ ಹತ್ಯೆಗೀಡಾಗಿರುವ ಸುದ್ದಿ ಮನಸ್ಸಿಗೆ ಅತೀವ ನೋವನ್ನುಂಟು ಮಾಡಿದೆ ಎಂದಿದ್ದಾರೆ.
ಮೃತರಿಗೆ ಭಾವಪೂರ್ಣ ನಮನಗಳು. ಭಗವಂತನು ಮೃತರ ಆತ್ಮಕ್ಕೆ ಚಿರ ಶಾಂತಿ ಕರುಣಿಸಲಿ. ಕುಟುಂಬ ವರ್ಗದವರಿಗೆ ಈ ನೋವನ್ನು ಅರಗಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ನೆಲೆಸಿರುವ ದುಃಖತಪ್ತ ಕುಟುಂಬದವರಿಗೆ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಚಂದನ್ ಕುಮಾರ್ ಹತ್ಯೆ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ, ನ್ಯಾಯ ಒದಗಿಸುವಂತೆ ಕೇಂದ್ರ ವಿದೇಶಾಂಗ ಸಚಿವಾಲಯದ ಮೂಲಕ ಕೆನಡಾ ಸರ್ಕಾರವನ್ನು ಒತ್ತಾಯಿಸುತ್ತೇನೆ. ಈ ಘಟನೆಯಿಂದ ಕೆನಾಡದಲ್ಲಿ ನೆಲೆಸಿರುವ ಕನ್ನಡಿಗರು ಆತಂಕ ಪಡುವುದು ಬೇಡ. ಎಲ್ಲ ಕನ್ನಡಿಗರ ಸುರಕ್ಷತೆಗೆ ಕರ್ನಾಟಕ ಸರ್ಕಾರವು ಕಟಿಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.