ADVERTISEMENT

ಬಿಬಿಎಂಪಿ ವ್ಯಾಪ್ತಿಯಲ್ಲಿ 15 ವರ್ಷ ಮೇಲಿನ ಮಕ್ಕಳಿಗೆ ಲಸಿಕೆ ಜ.3ರಿಂದ

ಸಿದ್ಧತೆ ನಡೆಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಸೂಚನೆ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2021, 20:29 IST
Last Updated 28 ಡಿಸೆಂಬರ್ 2021, 20:29 IST
ಸಭೆಯಲ್ಲಿ ಗೌರವ್‌ ಗುಪ್ತ ಮಾತನಾಡಿದರು. ಡಾ.ಕೆ.ವಿ.ತ್ರಿಲೋಕಚಂದ್ರ ಹಾಗೂ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ಇದ್ದಾರೆ
ಸಭೆಯಲ್ಲಿ ಗೌರವ್‌ ಗುಪ್ತ ಮಾತನಾಡಿದರು. ಡಾ.ಕೆ.ವಿ.ತ್ರಿಲೋಕಚಂದ್ರ ಹಾಗೂ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ಇದ್ದಾರೆ   

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 15 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಗೆ 2022ರ ಜ.3ರಿಂದ ಕೋವಿಡ್‌ ಲಸಿಕೆ ನೀಡುವ ಪ್ರಕ್ರಿಯೆ ಆರಂಭವಾಗಲಿದೆ.

‘ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮದ ಅನುಷ್ಠಾನಕ್ಕೆ ಆಯಾ ವಲಯ ವ್ಯಾಪ್ತಿಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ವರ್ಚುವಲ್‌ ರೂಪದಲ್ಲಿ ಮಂಗಳವಾರ ಸಭೆ ನಡೆಸಿದ ಅವರು, ‘ಪಾಲಿಕೆ ವ್ಯಾಪ್ತಿಯ ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳ ಪಟ್ಟಿಯನ್ನು ವಲಯವಾರು ಸಿದ್ಧಪಡಿಸಿಕೊಳ್ಳಬೇಕು. ಲಸಿಕೆ ನೀಡುವ ಸಿಬ್ಬಂದಿಯನ್ನು ಈಎಲ್ಲ ಶಾಲಾ-ಕಾಲೇಜುಗಳಿಗೆ ನಿಯೋಜಿಸಬೇಕು’ ಎಂದು ನಿರ್ದೇಶನ ನೀಡಿದರು.

ADVERTISEMENT

‘15ವರ್ಷದಿಂದ 18 ವರ್ಷದೊಳಗಿನ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದರೆ ಅವರಿಗೂ ಲಸಿಕೆ ನೀಡಬೇಕು. ಶಾಲೆ ತೊರೆದ ಮಕ್ಕಳನ್ನು ಗುರುತಿಸಿ ಲಸಿಕೆ ನೀಡಲು ಸರ್ಕಾರೇತರ ಸಂಸ್ಥೆಗಳ ಜೊತೆ ಸೇರಿ ಕ್ರಮ ಕೈಗೊಳ್ಳಬೇಕು. ಕೊಳೆಗೇರಿ ಪ್ರದೇಶ, ಕೈಗಾರಿಕಾ ಪ್ರದೇಶಗಳಲ್ಲಿ ಈ ಬಗ್ಗೆ ಹೆಚ್ಚಿನ ನಿಗಾ ಅಗತ್ಯ’ ಎಂದರು.

‘ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬರುತ್ತಿರುವ ಕಡೆ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಪತ್ತೆಹಚ್ಚುವ ಮಾಡುವ ಮೂಲಕ ಸೊಂಕನ್ನು ಮೂಲದಲ್ಲಿಯೇ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು. ಆಯಾ ವಾರ್ಡ್ ವ್ಯಾಪ್ತಿಯ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಜೊತೆ ಆರೋಗ್ಯ ವೈದ್ಯಾಧಿಕಾರಿಗಳು ಸಭೆ ನಡೆಸಬೇಕು. ಜನಸಂದಣಿ ಸೇರುವ ಪ್ರದೇಶ, ಔತಣಕೂಟಗಳಲ್ಲಿ ಕೋವಿಡ್ ನಿಯಂತ್ರಣ ನಿಯಮಗಳು ಕಡ್ಡಾಯವಾಗಿ ಪಾಲನೆ ಆಗುವಂತೆ ನೋಡಿಕೊಳ್ಳಬೇಕು. ಜನಸಂದಣಿ ಇರುವ ಕಡೆ ಹೋಗದಂತೆ ಜನಜಾಗೃತಿ ಮೂಡಿಸಬೇಕು’ ಎಂದು ಸಲಹೆ ನೀಡಿದರು.

‘ನಗರದಲ್ಲಿ ಪ್ರತಿನಿತ್ಯ ಸುಮಾರು 45,000 ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಅದನ್ನು ಮತ್ತಷ್ಟು ಹೆಚ್ಚಿಸಬೇಕು. ಲಸಿಕೆ ಪಡೆಯದವರನ್ನು ಗುರುತಿಸಿ ಲಸಿಕೆ‌ ನೀಡಬೇಕು. ಕೋವಿಡ್‌ ನಿರ್ಬಂಧಗಳ ಜಾರಿಗೆ ಪೊಲೀಸ್ ಇಲಾಖೆ ಜೊತೆ ಕೈಜೋಡಿಸಬೇಕು. ರೆಸ್ಟೋರೆಂಟ್, ವಾಣಿಜ್ಯ ಉದ್ದಿಮೆಗಳಲ್ಲಿ ಕೋವಿಡ್ ನಿಯಮಗಳು ಉಲ್ಲಂಘನೆ ಕಂಡುಬಂದಲ್ಲಿ ದಂಡ ವಿಧಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಎಲ್ಲ ವಲಯಗಳ ಜಂಟಿ ಆಯುಕ್ತರು, ಮುಖ್ಯ ಆರೋಗ್ಯಾಧಿಕಾರಿ (ಆರೋಗ್ಯ) ಡಾ. ಬಾಲಸುಂದರ್, ಎಲ್ಲ ವಲಯಗಳ ಆರೋಗ್ಯ ಅಧಿಕಾರಿಗಳು, ಆರೋಗ್ಯ ವೈದ್ಯಾಧಿಕಾರಿಗಳು ಪಾಲ್ಗೊ‌ಂಡರು.

-0-

‘ಲಸಿಕೆ ಪಡೆಯಲು 5 ಲಕ್ಷ ಮಕ್ಕಳು ಅರ್ಹ’

‘ಬಿಬಿಎಂಪಿ ವ್ಯಾಪ್ತಿಯಲ್ಲಿ 15-18 ವರ್ಷದೊಳಗಿನ 5 ಲಕ್ಷ ಮಕ್ಕಳಿದ್ದಾರೆ. ಶಿಕ್ಷಣ ಸಂಸ್ಥೆಗಳು, ಲಸಿಕೆ ಪಡೆಯಲು ಅರ್ಹರಾಗಿರುವ ಮಕ್ಕಳು ಹಾಗೂ ಲಸಿಕಾಕರಣ ನಡೆಯುವ ಸ್ಥಳಗಳ ಮಾಹಿತಿ ಕಲೆಹಾಕಿ ವಲಯವಾರು ಕ್ರಿಯಾ ಯೋಜನೆಯನ್ನು ತಯಾರಿಸಬೇಕು’ ಎಂದು ವಿಶೇಷ ಆಯುಕ್ತ (ಆರೋಗ್ಯ) ಡಾ.ಕೆ.ವಿ.ತ್ರಿಲೋಕಚಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.

-0-

‘ಮುನ್ನೆಚ್ಚರಿಕಾ ಡೋಸ್‌ ಜ.10ರಿಂದ’

‘ಆರೋಗ್ಯ ಕಾರ್ಯಕರ್ತರು, ಕೋವಿಡ್‌ ನಿಯಂತ್ರಣ ಕಾರ್ಯದಲ್ಲಿ ಮುಂಚೂಣಿಯಲ್ಲಿರುವ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಜ.10ರಿಂದ ಮುನ್ನೆಚ್ಚರಿಕೆ ಡೋಸ್ (ಬೂಸ್ಟರ್ ಡೋಸ್‌) ನೀಡಲಾಗುತ್ತದೆ. ಇದಕ್ಕೂ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದು ಗೌರವ್‌ ಗುಪ್ತ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.