ADVERTISEMENT

‘ಚಿಲುಮೆ’ ಹಗರಣ: ರಾಜ್ಯ ಸರ್ಕಾರಕ್ಕೆ ನೋಟಿಸ್‌

ಅಮಾನತು ಆದೇಶ ಪ್ರಶ್ನಿಸಿದ ಐಎಎಸ್‌ ಅಧಿಕಾರಿ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2022, 21:44 IST
Last Updated 6 ಡಿಸೆಂಬರ್ 2022, 21:44 IST
.
.   

ಬೆಂಗಳೂರು:‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಮತದಾರರ ಮಾಹಿತಿಯನ್ನು ಅಕ್ರಮವಾಗಿ ಸಂಗ್ರಹಿಸಿ ದುರುಪಯೋಗ ಮಾಡಿಕೊಳ್ಳಲಾ
ಗಿದೆ‘ ಎಂಬ ಆರೋಪದಡಿ ತಮ್ಮನ್ನು ಅಮಾನತುಗೊಳಿಸಿರುವ ಆದೇಶ ಪ್ರಶ್ನಿಸಿ ಬೆಂಗಳೂರು ನಗರ
ಜಿಲ್ಲಾಧಿಕಾರಿಯಾಗಿದ್ದ ಕೆ.ಶ್ರೀನಿವಾಸ್ ಸಲ್ಲಿಸಿರುವ ರಿಟ್‌ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ
ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

’ಕೇಂದ್ರ ಚುನಾವಣಾ ಆಯೋಗದ ನಿರ್ದೇಶದ ಮೇರೆಗೆ ನನ್ನನ್ನು ಸೇವೆಯಿಂದ ಅಮಾನತುಪಡಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು‘ ಎಂದು ಕೋರಿ ಕೆ. ಶ್ರೀನಿವಾಸ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಜಿ.ನರೇಂದರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಪಿ.ಎಸ್‌.ರಾಜಗೋಪಾಲ್‌ ಅವರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಕೇಂದ್ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಸಚಿವಾಲಯದ ಕಾರ್ಯದರ್ಶಿ, ರಾಜ್ಯಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಹಾಗೂ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿತು.ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

ADVERTISEMENT

ಎರಡನೇ ನೋಟಿಸ್: ಐಎಎಸ್‌ ಅಧಿಕಾರಿಗಳ ವಿಚಾರಣೆ ಇಂದು

ಬೆಂಗಳೂರು: ಮತದಾರರ ವೈಯಕ್ತಿಕ ಮಾಹಿತಿ ಕಳವು ಹಾಗೂ ದುರ್ಬಳಕೆ ಆರೋಪದಡಿ ದಾಖಲಾಗಿರುವ ಪ್ರಕರಣದಲ್ಲಿ ಐಎಎಸ್‌ ಅಧಿಕಾರಿಗಳಾದ ಕೆ. ಶ್ರೀನಿವಾಸ್ ಹಾಗೂ ಎಸ್. ರಂಗಪ್ಪ ಅವರಿಗೆ ಎರಡನೇ ಬಾರಿ ನೋಟಿಸ್ ನೀಡಲಾಗಿದ್ದು, ಅವರಿಬ್ಬರು ಬುಧವಾರವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ಚಿಲುಮೆ ಸಂಸ್ಥೆ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಹಲಸೂರು ಗೇಟ್ ಠಾಣೆ ಪೊಲೀಸರು, ಇಬ್ಬರೂ ಅಧಿಕಾರಿ ಗಳನ್ನು ಶನಿವಾರ (ಡಿ. 3) ಒಂದು ಸುತ್ತಿನ ವಿಚಾರಣೆ ನಡೆಸಿದ್ದರು. ಕೆಲ ಪ್ರಶ್ನೆಗಳಿಗೆ ಮಾತ್ರ ಉತ್ತರಿಸಿದ್ದ ಅಧಿಕಾರಿಗಳು, ಉಳಿದ ಪ್ರಶ್ನೆಗಳಿಗೆ ಉತ್ತರಿಸಲು ಕಾಲಾವಕಾಶ ಕೋರಿದ್ದರು.

ಅಧಿಕಾರಿಗಳಿಗೆ ಕಾಲಾವಕಾಶ ನೀಡಿದ್ದ ಪೊಲೀಸರು, ಬುಧವಾರ (ಡಿ. 7) ವಿಚಾರಣೆಗೆ ಬರಬೇಕೆಂದು ಹೇಳಿ ಎರಡನೇ ನೋಟಿಸ್ ಕೊಟ್ಟು ಕಳುಹಿಸಿದ್ದರು. ಹೀಗಾಗಿ, ಇಬ್ಬರೂ ಅಧಿಕಾರಿಗಳು ಬುಧವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.