ADVERTISEMENT

ವೈದ್ಯಕೀಯ ವಿದ್ಯಾರ್ಥಿಗಳಿಗೆ ವೀಸಾ ನೀಡಲು ಚೀನಾ ನಕಾರ

ವೀಸಾ ಕೊಡಿಸುವಂತೆ ಸರ್ಕಾರಕ್ಕೆ ವಿದ್ಯಾರ್ಥಿಗಳ ಮನವಿ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2022, 19:31 IST
Last Updated 23 ಮಾರ್ಚ್ 2022, 19:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಚೀನಾದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಭಾರತೀಯ ವಿದ್ಯಾರ್ಥಿಗಳ ವೀಸಾ ರದ್ದು ಮಾಡುವ ಮೂಲಕ ಚೀನಾ ಸರ್ಕಾರ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿಪಡಿಸಿದೆ’ ಎಂದು ವೈದ್ಯಕೀಯ ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೈದ್ಯಕೀಯ ವಿದ್ಯಾರ್ಥಿನಿ ವಿನುಶ್ರೀ, ‘ಚೀನಾದಲ್ಲಿ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿಗಳೆಲ್ಲ2020ರಲ್ಲಿ ಕೋವಿಡ್‌ ತೀವ್ರಗೊಂಡಿದ್ದರಿಂದ ಭಾರತಕ್ಕೆ ಮರಳಿದೆವು. ಈಗ ಮತ್ತೆ ಶಿಕ್ಷಣ ಮುಂದುವರಿಸಲು ಚೀನಾ ವೀಸಾ ನೀಡುತ್ತಿಲ್ಲ’ ಎಂದು ಕಣ್ಣೀರು ಹಾಕಿದರು.

‘ಕರ್ನಾಟಕದ 1,500 ವಿದ್ಯಾರ್ಥಿಗಳು ಸೇರಿದಂತೆ ದೇಶದ 23 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಚೀನಾದಲ್ಲಿ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದಾರೆ. ವೀಸಾ ಸಿಗದಿದ್ದರೆ ವಿದ್ಯಾರ್ಥಿಗಳ ಶಿಕ್ಷಣ ಅಪೂರ್ಣಗೊಳ್ಳಲಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಚೀನಾ ಸರ್ಕಾರದೊಂದಿಗೆ ಚರ್ಚಿಸಿ, ವಿದ್ಯಾರ್ಥಿಗಳಿಗೆ ವೀಸಾ ಸಿಗುವಂತೆ ಮಾಡಬೇಕು’ ಎಂದು ಮನವಿ ಮಾಡಿದರು.

ADVERTISEMENT

‘ಉಕ್ರೇನ್‌ನಲ್ಲಿ ವೈದ್ಯಕೀಯ ಶಿಕ್ಷಣ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಇಲ್ಲೇ ಪ್ರಾಯೋಗಿಕ ತರಗತಿಗಳನ್ನು ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಸದ್ಯ ನಮಗೂ ಆನ್‌ಲೈನ್ ತರಗತಿಗಳು ನಡೆಯುತ್ತಿದ್ದು, ಪ್ರಾಯೋಗಿಕ ತರಗತಿಗಳಿಗೆ ಸಮಸ್ಯೆಯಾಗಿದೆ’ ಎಂದರು.

ವಿದ್ಯಾರ್ಥಿನಿ ಚೈತನ್ಯ, ‘ವೈದ್ಯಕೀಯ ವಿದ್ಯಾರ್ಥಿಗಳಾದ ನಮಗೆ ಉತ್ತಮ ವೈದ್ಯರಾಗಲು ಪ್ರಾಯೋಗಿಕ ತರಗತಿಗಳು ಮುಖ್ಯ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಕೆ.ಸುಧಾಕರ್ ನಮಗೆ ನೆರವಾಗಬೇಕು. ವಿದ್ಯಾರ್ಥಿಗಳಿಗೆ ವೀಸಾ ಕೊಡಿಸಿ, ಚೀನಾಗೆ ಕಳುಹಿಸುವ ವ್ಯವಸ್ಥೆ ಮಾಡಬೇಕು’ ಎಂದು ಮನವಿ ಮಾಡಿದರು.

ಪದ್ಮಲತಾ, ಮುಸ್ಕಾನ್ ಸೇರಿದಂತೆ ಹಲವು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.