ADVERTISEMENT

ಕಾಲ್ತುಳಿತ ದುರಂತ | ಮೃತ ಬಾಲಕಿಯ ಚಿನ್ನ ಕಳ್ಳತನ: ಪೋಷಕರಿಂದ ದೂರು

​ಪ್ರಜಾವಾಣಿ ವಾರ್ತೆ
Published 24 ಜುಲೈ 2025, 15:34 IST
Last Updated 24 ಜುಲೈ 2025, 15:34 IST
<div class="paragraphs"><p>ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ</p></div>

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ

   

ಬೆಂಗಳೂರು: ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ ಬಾಲಕಿ ದಿವ್ಯಾಂಶಿ (13) ಧರಿಸಿದ್ದ ಚಿನ್ನಾಭರಣ ಕಳ್ಳತನವಾಗಿದ್ದು, ಈ ಸಂಬಂಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ದಿವ್ಯಾಂಶಿ ಅವರ ತಾಯಿ ಅಶ್ವಿನಿ ಅವರು ನೀಡಿದ ದೂರು ಆಧರಿಸಿ ಎಫ್‌ಐಆರ್ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ADVERTISEMENT

ಮರಣೋತ್ತರ ಪರೀಕ್ಷೆ ಬಳಿಕ ಮಗಳ ಮೃತದೇಹವನ್ನು ಹಸ್ತಾಂತರಿಸಿದ್ದರು. ಮಗಳು ಧರಿಸಿದ್ದ 6 ಗ್ರಾಂ ತೂಕದ ಕಿವಿಯೋಲೆ ಹಾಗೂ 5ರಿಂದ 6 ಗ್ರಾಂ ತೂಕದ ಚಿನ್ನದ ಸರ ನೀಡಿರಲಿಲ್ಲ. ಮರಣೋತ್ತರ ಪರೀಕ್ಷೆ ನಡೆಸಿದ ಆಸ್ಪತ್ರೆಗೆ ತೆರಳಿ ಪ್ರಶ್ನಿಸಿದಾಗ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ, ಶವ ಪರೀಕ್ಷೆ ವೇಳೆ ಯಾರೊ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ ಎಂದು ಅಶ್ವಿನಿ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆರ್‌ಸಿಬಿ ಐಪಿಎಲ್ ಟ್ರೋಫಿ ಜಯಿಸಿದ್ದ ಅಂಗವಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಆಯೋಜಿಸಲಾಗಿತ್ತು. ಯಲಹಂಕದ ಕಟ್ಟಿಗೇನಹಳ್ಳಿ ನಿವಾಸಿ ದಿವ್ಯಾಂಶಿ ಸಂಭ್ರಮಾಚರಣೆ ನೋಡಲು ಬಂದಿದ್ದಳು. ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟಿದ್ದಳು.

‘ಬೌರಿಂಗ್ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆದಿತ್ತು. ಶವಪರೀಕ್ಷೆ ನಡೆಯುವಾಗ ಚಿನ್ನಾಭರಣ ಇರಲಿಲ್ಲ. ಪ್ರಕ್ರಿಯೆಗಳನ್ನು ಪೂರೈಸಿದ ಬಳಿಕ ಯಾರೋ ಕಳವು ಮಾಡಿದ್ದಾರೆ’ ಎಂದು ಅಶ್ವಿನಿ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.