ADVERTISEMENT

ದೇವರಾಜ ಅರಸು ಟ್ರಕ್ ಟರ್ಮಿನಲ್‌ | ₹47.10 ಕೋಟಿ ಅಕ್ರಮ: ಸಿಐಡಿ ತನಿಖೆ

ಠಾಣೆಗೆ ದೂರು ನೀಡಿದ್ದ ಹಾಲಿ ಎಂ.ಡಿ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2024, 23:30 IST
Last Updated 18 ಮಾರ್ಚ್ 2024, 23:30 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ (ಡಿಡಿಯುಟಿಟಿಎಲ್) ನಡೆದಿದೆ ಎನ್ನಲಾದ ₹47.10 ಕೋಟಿ ಅಕ್ರಮದ ಬಗ್ಗೆ ಸಿಐಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಕಚೇರಿಗೆ ಸೋಮವಾರ ಭೇಟಿ ನೀಡಿ 600ಕ್ಕೂ ಹೆಚ್ಚು ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.

2021ರಿಂದ 2023ರ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ಹಾಲಿ‌ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ಸಿ.ಎನ್. ಶಿವಪ್ರಕಾಶ್ ಅವರು ವಿಲ್ಸನ್ ಗಾರ್ಡನ್ ಠಾಣೆಗೆ ದೂರು ನೀಡಿದ್ದರು. 2023ರ ಸೆಪ್ಟೆಂಬರ್ 23ರಂದು ಎಫ್‌ಐಆರ್ ದಾಖಲಾಗಿತ್ತು. ಇದೇ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ADVERTISEMENT

ಅಕ್ರಮ ಪ್ರಕರಣದ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳ ತಂಡ, ದೂರುದಾರ ಸಿ.ಎನ್. ಶಿವಪ್ರಕಾಶ್ ಅವರಿಂದ ಮಾಹಿತಿ ಪಡೆದುಕೊಂಡಿದೆ. ಇದರ ಬೆನ್ನಲ್ಲೇ, ಅಧಿಕಾರಿಗಳು ಶಾಂತಿನಗರದಲ್ಲಿರುವ ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್‌ ಕಚೇರಿಗೆ ಸೋಮವಾರ ಭೇಟಿ ನೀಡಿದರು.

‘ತುಂಡು ಗುತ್ತಿಗೆ ಹೆಸರಿನಲ್ಲಿ ನಡೆದಿರುವ ಅಕ್ರಮದ ಬಗ್ಗೆ ತನಿಖೆ ಆರಂಭಿಸಲಾಗಿದೆ. ಇದೊಂದು ಆರ್ಥಿಕ ಅಪರಾಧ. ಹೀಗಾಗಿ, ಸೂಕ್ತ ದಾಖಲೆಗಳನ್ನು ಸುಪರ್ದಿಗೆ ಪಡೆದು ಪರಿಶೀಲಿಸುವ ಪ್ರಕ್ರಿಯೆ ಆರಂಭಿಸಲಾಗಿದೆ. ಆರೋಪಿಗಳ ವಿಚಾರಣೆಯೂ ನಡೆಯುತ್ತಿದೆ’ ಎಂದು ಸಿಐಡಿ ಮೂಲಗಳು ಹೇಳಿವೆ.

ನಡಾವಳಿ ತಿರುಚಿ ಅಕ್ರಮ: ‘2021ರ ಅಕ್ಟೋಬರ್ 25ರಂದು 194ನೇ ನಿರ್ದೇಶಕ ಮಂಡಳಿ ಸಭೆ ನಡೆಸಲಾಗಿತ್ತು. ಅಂದಿನ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ಸೇರಿ ಒಟ್ಟು 10 ನಿರ್ದೇಶಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಟ್ರಕ್ ಟರ್ಮಿನಲ್‌ಗಳ ದುರಸ್ತಿ ಹಾಗೂ ನಿರ್ವಹಣೆ ಕಾಮಗಾರಿಗಳನ್ನು ತುರ್ತಾಗಿ ತುಂಡು ಗುತ್ತಿಗೆ ನೀಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿತ್ತು’ ಎಂದು ಶಿವಪ್ರಕಾಶ್ ಅವರು ದೂರಿನಲ್ಲಿ ತಿಳಿಸಿದ್ದರು.

‘ಚಾಲ್ತಿಯಲ್ಲಿರುವ ಕಾಯ್ದೆಗೆ ವಿರುದ್ಧವಾಗಿ, ₹10 ಕೋಟಿವರೆಗೆ ತುಂಡು ಗುತ್ತಿಗೆ ನೀಡಲು ಅನುಮೋದನಾ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ, ಇದಕ್ಕೆ ಕಾನೂನಿನಡಿ ಒಪ್ಪಿಗೆ ಇರಲಿಲ್ಲ. ಯಾವುದೇ ತುಂಡು ಗುತ್ತಿಗೆ ನೀಡದೇ ನಕಲಿ ದಾಖಲೆ ಸೃಷ್ಟಿಸಿ ಹಣ ಪಡೆದು ಅಕ್ರಮ ಎಸಗಿರುವ ಮಾಹಿತಿ ಇದೆ.’

‘ಸಭೆಯ ನಿರ್ಣಯವನ್ನು ತಿರುಚಿ, ನಕಲಿ ದಾಖಲೆ ಸೃಷ್ಟಿಸಿ ₹47.10 ಕೋಟಿ ಅಕ್ರಮ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಅಕ್ರಮದಲ್ಲಿ ಭಾಗಿಯಾಗಿರುವವರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಿ’ ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.