ADVERTISEMENT

ಕಾರ್ಮಿಕ ವಿರೋಧಿ ತಿದ್ದುಪಡಿ ವಾಪಸ್‌ಗೆ ಆಗ್ರಹ, ಸಿಐಟಿಯು ಪ್ರತಿಭಟನೆ

ಸ್ವಾತಂತ್ರ್ಯ ಉದ್ಯಾನದಲ್ಲಿ ಸಿಐಟಿಯು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2025, 15:24 IST
Last Updated 6 ಮಾರ್ಚ್ 2025, 15:24 IST
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಪ್ರಜಾವಾಣಿ ಚಿತ್ರ 
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಪ್ರಜಾವಾಣಿ ಚಿತ್ರ    

ಬೆಂಗಳೂರು: ಬೆಲೆ ಏರಿಕೆ ಆಧಾರದಲ್ಲಿ ತುಟ್ಟಿಭತ್ಯೆಯೊಂದಿಗೆ ಎಲ್ಲಾ ವಿಭಾಗಗಳಲ್ಲಿನ ಅಕುಶಲ ಕಾರ್ಮಿಕರಿಗೆ ಕನಿಷ್ಠ ವೇತನ ₹31,566 ಜಾರಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಸೆಂಟರ್ ಆಫ್ ಇಂಡಿಯನ್‌ ಟ್ರೇಡ್‌ ಯೂನಿಯನ್ ನೇತೃತ್ವದಲ್ಲಿ ಕಾರ್ಮಿಕರು ಗುರುವಾರ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಕಾರ್ಮಿಕ ವಿರೋಧಿ ತಿದ್ದುಪಡಿಗಳನ್ನು ವಾಪಸ್ ಪಡೆಯಬೇಕು. ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘದ ರಚನೆ ಕೈ ಬಿಡಬೇಕು ಹಾಗೂ ಸೇವಾ ನಿಮಯಗಳಿಗೆ ತಿದ್ದುಪಡಿ ತಂದು ಗುತ್ತಿಗೆ ಮತ್ತು ಹೊರಗುತ್ತಿಗೆ ಕಾರ್ಮಿಕರನ್ನು ಕಾಯಂ ಮಾಡಬೇಕು. ಕಾಯಂ ಮಾಡುವ ತನಕ ಸಮಾನ ಕೆಲಸಕ್ಕೆ ಸಮಾನ ವೇತನವನ್ನು ಸಾರ್ವಜನಿಕ ಉದ್ದಿಮೆಗಳು, ನಿಗಮ ಮಂಡಳಿಗಳು, ವಿವಿಧ ಇಲಾಖೆ ಮತ್ತು ಖಾಸಗಿ ಕಂಪನಿಗಳಲ್ಲಿ ದುಡಿಯುವ ಕಾರ್ಮಿಕರಿಗೆ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

ಎಲ್ಲಾ ಜಿಲ್ಲೆಗಳಲ್ಲೂ ಕಾರ್ಮಿಕ ನ್ಯಾಯಾಲಯವನ್ನು ಸ್ಥಾಪಿಸಬೇಕು. ದುಡಿಯುವ ಮಹಿಳೆಯರಿಗೆ ಕನಿಷ್ಠ ವರ್ಷದಲ್ಲಿ 12 ದಿನಗಳು ಸಂಬಳ ಸಹಿತ ಮುಟ್ಟಿನ ರಜೆ ಜಾರಿಗೊಳಿಸಬೇಕು ಎಂದರು. ಕಾರ್ಮಿಕ ಇಲಾಖೆ ರೂಪಿಸಿರುವ ಅಸಂಘಟಿತ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ ಮತ್ತು ಭವಿಷ್ಯ ನಿಧಿ ಯೋಜನೆ ಜಾರಿಗೆ ಕನಿಷ್ಠ ₹500 ಕೋಟಿ ಅನುದಾನವನ್ನು ಬಜೆಟ್‌ನಲ್ಲಿ ನೀಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಪ್ರತಿಭಟನೆಯಲ್ಲಿ ರಾಜ್ಯ ಅಧ್ಯಕ್ಷೆ ಎಸ್‌.ವರಲಕ್ಷ್ಮೀ, ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಪಾಲ್ಗೊಂಡಿದ್ದರು.

ಸ್ಮಾರ್ಟ್ ಕಾರ್ಡ್‌ಗೆ ಕ್ರಮ: ಸಚಿವ ಲಾಡ್

‘ಮೂವತ್ತು ವಲಯದ ಅಸಂಘಟಿತ ಕಾರ್ಮಿಕರಿಗೆ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲು ಕ್ರಮ ವಹಿಸಲಾಗುವುದು’ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್‌ ಹೇಳಿದರು. ಸ್ಥಳಕ್ಕೆ ಭೇಟಿ ನೀಡಿ ಮನವಿ ಆಲಿಸಿದ ಅವರು ಗುತ್ತಿಗೆ ಕಾರ್ಮಿಕರನ್ನು ಕಾಯಂ ಮಾಡಲು ಕಾನೂನು ತರುವ ಅಗತ್ಯವಿದೆ. ಅಂತರರಾಷ್ಟ್ರೀಯ ಕಾರ್ಮಿಕ ಸಮ್ಮೇಳನದ ಮಾದರಿಯಲ್ಲಿ ಕರ್ನಾಟಕ ಕಾರ್ಮಿಕ ಸಮ್ಮೇಳನ ನಡೆಸುವ ಸಂಬಂಧ ಮುಖ್ಯಮಂತ್ರಿ ಜತೆ ಚರ್ಚಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.