ADVERTISEMENT

ಜೆಡಿಎಸ್‌–ಕೋಡಿಹಳ್ಳಿ ಬೆಂಬಲಿಗರ ಮಾರಾಮಾರಿ

​ಪ್ರಜಾವಾಣಿ ವಾರ್ತೆ
Published 28 ಮೇ 2022, 18:08 IST
Last Updated 28 ಮೇ 2022, 18:08 IST
ಜೆಡಿಎಸ್‌ ಮತ್ತು ರೈತ ಸಂಘದ ಕಾರ್ಯಕರ್ತರನ್ನು ಪೊಲೀಸರು ಸಮಾಧಾನಪಡಿಸುತ್ತಿರುವುದು –ಪ್ರಜಾವಾಣಿ ಚಿತ್ರ
ಜೆಡಿಎಸ್‌ ಮತ್ತು ರೈತ ಸಂಘದ ಕಾರ್ಯಕರ್ತರನ್ನು ಪೊಲೀಸರು ಸಮಾಧಾನಪಡಿಸುತ್ತಿರುವುದು –ಪ್ರಜಾವಾಣಿ ಚಿತ್ರ   

ಬೆಂಗಳೂರು: ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧದ ಭ್ರಷ್ಟಾಚಾರ ಆರೋಪ ‍ವಿಚಾರವಾಗಿ ರೈತ ಸಂಘದ ಕಾರ್ಯಕರ್ತರು ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಈ ಸಂಬಂಧ ಜೆಡಿಎಸ್‌ನ ಎಂಟು ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು, ಠಾಣೆ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ಪ್ರೆಸ್‌ಕ್ಲಬ್ ಎದುರು ಶನಿವಾರ ನಡೆದ ಘಟನೆ ಸಂಬಂಧ ರೈತ ಸಂಘದ ಕಾರ್ಯಕರ್ತ ಸತೀಶ್ ಅವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಜೆಡಿಎಸ್ ಕಾರ್ಯಕರ್ತ ನರಸಿಂಹಮೂರ್ತಿ ಸೇರಿ 8 ಮಂದಿಯನ್ನು ಬಂಧಿಸಿದ್ದರು.

ಕೋಡಿಹಳ್ಳಿ ಚಂದ್ರಶೇಖರ್ ಮತ್ತು ಅವರ ಬೆಂಬಲಿಗರು ಪತ್ರಿಕಾಗೋಷ್ಠಿ ನಡೆಸಲು ಪ್ರೆಸ್‌ಕ್ಲಬ್‌ಗೆ ಬಂದಿದ್ದರು. ಅದೇ ಸಮಯಕ್ಕೆ ಸ್ಥಳಕ್ಕೆ ಬಂದ ಜೆಡಿಎಸ್‌ ಕಾರ್ಯಕರ್ತರು, ‘ಕೋಡಿಹಳ್ಳಿ ಚಂದ್ರಶೇಖರ್ ಕಳ್ಳ’ ಎಂದು ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಕೋಡಿಹಳ್ಳಿ ಬೆಂಬಲಿಗರು ಕೂಡ ಜೆಡಿಎಸ್‌ ವಿರುದ್ಧ ಘೋಷಣೆ ಕೂಗಿದರು.

ADVERTISEMENT

ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ನಡುವೆ ತಳ್ಳಾಟ, ಗುದ್ದಾಟ ನಡೆಯಿತು. ಚಂದ್ರಶೇಖರ್ ಬೆಂಬಲಿಗರ ಮೇಲೆ ಜೆಡಿಎಸ್ ಕಾರ್ಯಕರ್ತರು ಮಸಿ ಎರಚಿದರು. ಸ್ಥಳಕ್ಕೆ ಬಂದ ಪೊಲೀಸರು ಎರಡು ಗುಂಪುಗಳನ್ನು ಸಮಾಧಾನಪಡಿಸಲು ಯತ್ನಿಸಿದರು.

‘ರೈತರ ಹೆಸರಿನಲ್ಲಿ ಸಂಘಟನೆ ಕಟ್ಟಿಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ್ ಅವರು ಬಿಎಂಟಿಸಿ, ಕೆಎಸ್‌ಆರ್‌ಟಿಸಿಯಲ್ಲಿ ಕೆಲಸ ಮಾಡುತ್ತಿರುವ ರೈತರ ಮಕ್ಕಳಿಗೆ ಮೋಸ ಮಾಡಿದ್ದಾರೆ. ಅಲ್ಲದೇ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಲಘುವಾಗಿ ಮಾತನಾಡಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೋಡಿಹಳ್ಳಿ, ‘ನಾನು ತಪ್ಪು ಮಾಡಿದ್ದರೆ ಕ್ಷಮೆ ಕೇಳುತ್ತೇನೆ. ಆದರೆ, ಕುಮಾರಸ್ವಾಮಿ ಅವರು ರೈತರ ಮೇಲೆ ಈ ರೀತಿಯ ದೌರ್ಜನ್ಯ ಮಾಡಿಸಬಾರದು. ಇದು ಸರಿಯಾದ ಬೆಳವಣಿಗೆ ಅಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.