ADVERTISEMENT

ಕಾವೇರಿ ಶುದ್ಧೀಕರಣ: 30ರೊಳಗೆ ಕ್ರಿಯಾ ಯೋಜನೆ ಸಲ್ಲಿಸಲು ಆದೇಶ

​ಪ್ರಜಾವಾಣಿ ವಾರ್ತೆ
Published 6 ಜನವರಿ 2020, 19:28 IST
Last Updated 6 ಜನವರಿ 2020, 19:28 IST

ಬೆಂಗಳೂರು: ‘ಕಾವೇರಿ ನದಿ ಶುದ್ಧಿಕರಣ ಹಾಗೂ ಪುನರುಜ್ಜೀವನಕ್ಕಾಗಿ ಇದೇ 30ರೊಳಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಭಾಗಮಂಡಲದಲ್ಲಿ ಮೇಲ್ಸೇತುವೆ ನಿರ್ಮಾಣ ಯೋಜನೆ ಪ್ರಶ್ನಿಸಿ ಹಾಗೂ ಕಾವೇರಿ ನದಿ ಶುದ್ಧೀಕರಣಕ್ಕೆ ನಿರ್ದೇಶನ ನೀಡುವಂತೆ ಕೋರಿ ಭಾಗಮಂಡಲದ ಎಸ್.ಇ.ಜಯಂತ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ಹಾಗೂ ನ್ಯಾಯಮೂರ್ತಿ ಹೇಮಂತ ಚಂದನಗೌಡರ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

‘ನದಿ ಮಲಿನವಾಗದಂತೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಹೊಣೆ. ಹಾಗಾಗಿ ಈ ತಿಂಗಳ ಅಂತ್ಯದೊಳಗೆ ಕ್ರಿಯಾ ಯೋಜನೆ ಸಲ್ಲಿಸಬೇಕು’ ಎಂದು ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಫೆಬ್ರುವರಿ 10ಕ್ಕೆ ಮುಂದೂಡಿದೆ. ಅರ್ಜಿದಾರರ ಪರ ವಕೀಲ ರವಿಕುಮಾರ್ ವಾದ ಮಂಡಿಸಿದರು.

ADVERTISEMENT

ಏನಿದು ಅರ್ಜಿ?: ತಲಕಾವೇರಿ ಹಾಗೂ ಭಾಗಮಂಡಲಕ್ಕೆ ಬರುವ ಪ್ರವಾಸಿಗರಿಂದ ಕಾವೇರಿ, ಕನ್ನಿಕೆ ಮತ್ತು ಸುಜ್ಯೋತಿ (ಗುಪ್ತ ಗಾಮಿನಿ) ನದಿಗಳು ಮಲಿನವಾಗುತ್ತಿವೆ. ಕಾವೇರಿ ನದಿಗೆ ಅಡ್ಡಲಾಗಿ ಭಾಗಮಂಡಲದ ಬಳಿ ಮಡಿಕೇರಿ-ತಲಕಾವೇರಿ ಮತ್ತು ನಾಪೋಕ್ಲು-ತಲಕಾವೇರಿ ರಸ್ತೆಗಳನ್ನು ಸಂಪರ್ಕ ಕಲ್ಪಿಸಲು ₹ 28.08 ಕೋಟಿ ವೆಚ್ಚದಲ್ಲಿ ಮೆಲ್ಸೇತುವೆ ನಿರ್ಮಿಸಲು ಸರ್ಕಾರ 2017ರ ಆಗಸ್ಟ್ 28ರಂದು ಕರೆದಿರುವ ಟೆಂಡರ್ ಅನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.