ADVERTISEMENT

ತೆರಿಗೆ ಸಂಗ್ರಹಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಾಕೀತು

ನಗರ ಜಿಲ್ಲಾ ಪಂಚಾಯಿತಿಯಲ್ಲಿ ಪ್ರಗತಿ ಪರಿಶೀಲನಾ ಸಭೆ

​ಪ್ರಜಾವಾಣಿ ವಾರ್ತೆ
Published 12 ಜನವರಿ 2021, 19:40 IST
Last Updated 12 ಜನವರಿ 2021, 19:40 IST
ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮಹಾದ್ವಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಉದ್ಘಾಟಿಸಿದರು. ಕಂದಾಯ ಸಚಿವ ಆರ್. ಅಶೋಕ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಜಿ.ಮರಿಸ್ವಾಮಿ, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಇದ್ದರು
ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮಹಾದ್ವಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಉದ್ಘಾಟಿಸಿದರು. ಕಂದಾಯ ಸಚಿವ ಆರ್. ಅಶೋಕ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಜಿ.ಮರಿಸ್ವಾಮಿ, ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಇದ್ದರು   

ಬೆಂಗಳೂರು: ‘ಸುಸಜ್ಜಿತ ಕಟ್ಟಡದಲ್ಲಿ ಕುಳಿತು ಸಭೆ ಮಾಡುವುದರಿಂದ ಪ್ರಯೋಜನ ಆಗುವುದಿಲ್ಲ. ತೆರಿಗೆ ಸಂಗ್ರಹಿಸಿ ಸಂಪನ್ಮೂಲ ಕ್ರೋಡೀಕರಿಸಿ’ ಎಂದು ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಾಕೀತು ಮಾಡಿದರು‌.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಸರ್ಕಾರದ ಅನುದಾನವನ್ನು ಸಂಬಳ, ಸಾರಿಗೆ ವೆಚ್ಚಕ್ಕೆ ಬಳಕೆ ಮಾಡಲಾಗುತ್ತಿದೆ. ಜಿಲ್ಲಾ ಪಂಚಾಯಿತಿಯಿಂದ ಸಂಗ್ರಹ ಆಗಿರುವ ತೆರಿಗೆ ಎಷ್ಟು’ ಎಂದು ಪ್ರಶ್ನಿಸಿದರು.

ಈ ಕುರಿತು ಉತ್ತರಿಸಲು ತಡಬಡಾಯಿಸಿದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವರಾಮೇಗೌಡ, ‘ಸರ್ಕಾರ ₹517 ಕೋಟಿ ಅನುದಾನ ನೀಡಿದೆ. ಅದರಲ್ಲಿ ಸಂಬಳಕ್ಕೆ ₹317 ಕೋಟಿ ಮತ್ತು ನಿರ್ವಹಣೆಗೆ ₹257 ಕೋಟಿ ಬಳಕೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಹೇಳಿದರು.

ADVERTISEMENT

ಇದರಿಂದ ಸಿಟ್ಟಾದ ಮುಖ್ಯಮಂತ್ರಿ, ‘ಕೊಠಡಿಯಲ್ಲಿ ಕುಳಿತು ಸಭೆ ಮಾಡಿದರೆ ಪ್ರಯೋಜನ ಆಗದು. ತೆರಿಗೆ ಸಂಗ್ರಹ ಮಾಡುವ ಕಡೆಗೆ ಗಮನ ಹರಿಸಿ’ ಎಂದು ಸೂಚನೆ ನೀಡಿದರು.

‘ಕೊರೊನಾ ಕಾರಣದಿಂದ ಸರ್ಕಾರದ ಆರ್ಥಿಕ ಸ್ಥಿತಿ ಉತ್ತಮವಾಗಿಲ್ಲ. ಸರ್ಕಾರ ಅನುದಾನವನ್ನು ಕಟ್ಟಡ ಕಟ್ಟಲು ಬಳಕೆ ಮಾಡದೆ ಅಭಿವೃದ್ಧಿ ಯೋಜನೆಗಳಿಗೆ ವಿನಿಯೋಗಿಸಿ’ ಎಂದು ತಿಳಿಸಿದರು.

‘ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ₹180 ಕೋಟಿ ತೆರಿಗೆ ಸಂಗ್ರಹವಾಗಿದೆ. ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಆಸ್ತಿಗಳನ್ನೂ ತೆರಿಗೆ ವ್ಯಾಪ್ತಿಗೆ ತಂದು ಮುಂದಿನ ದಿನಗಳಲ್ಲಿ ₹500 ಕೋಟಿ ತೆರಿಗೆ ಸಂಗ್ರಹಿಸುವ ಗುರಿ ಇದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್ ತಿಳಿಸಿದರು.

ಕಗ್ಗಲೀಪುರ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಸೇರಿ ಹಲವು ಬೇಡಿಕೆಗಳ ಪಟ್ಟಿಯನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಜಿ. ಮರಿಸ್ವಾಮಿ ಅವರು ಯಡಿಯೂರಪ್ಪ ಅವರಿಗೆ ಸಲ್ಲಿಸಿದರು.

‘ಕೇಂದ್ರ ಮತ್ತು ರಾಜ್ಯದ ಅನುದಾನ ಈಗ ನೇರವಾಗಿ ಗ್ರಾಮ ಪಂಚಾಯಿತಿಗಳಿಗೇ ಹೋಗುತ್ತಿದೆ. ಗ್ರಾಮ ಪಂಚಾಯಿತಿ ಸದಸ್ಯರಿಗೆ ಇರುವ ಬೆಲೆ ಜಿಲ್ಲಾ ಪಂಚಾಯಿತಿ ಸದಸ್ಯರಿಗೆ ಇಲ್ಲವಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ವರ್ಷಕ್ಕೆ ₹20 ಕೋಟಿ ಅನುದಾನ ನೀಡಲಾಗುತ್ತಿದೆ. ಇಷ್ಟು ಅನುದಾನದಲ್ಲಿ ಅಭಿವೃದ್ಧಿ ಅಸಾಧ್ಯ. ಅನುದಾನದ ಪ್ರಮಾಣ ಹೆಚ್ಚಿಸಬೇಕು’ ಎಂದು ಮನವಿ ಮಾಡಿದರು.

ಇಬ್ಬರು ಅಧಿಕಾರಿಗಳ ಅಮಾನತಿಗೆ ಸೂಚನೆ

ಪ್ರಗತಿ ಪರಿಶೀಲನಾ ಸಭೆಗೆ ಗೈರಾಗಿದ್ದ ಕೊಳೆಗೇರಿ ಅಭಿವೃದ್ಧಿ ನಿಗಮ ಮತ್ತು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದರು.

ಇಲಾಖಾವಾರು ಪ್ರಗತಿ ಬಗ್ಗೆ ಕಂದಾಯ ಸಚಿವ ಆರ್. ಅಶೋಕ ಕೇಳಿದಾಗ ಈ ಎರಡೂ ನಿಗಮಗಳ ಬಗ್ಗೆ ಉತ್ತರಿಸುವವರೇ ಇರಲಿಲ್ಲ. ಇದರಿಂದ ಸಿಟ್ಟಾದ ಮುಖ್ಯಮಂತ್ರಿ, ‘ಸಿ.ಎಂ ನಡೆಸುತ್ತಿರುವ ಸಭೆ ಎಂದರೆ ಅಧಿಕಾರಿಗಳಿಗೆ ತಮಾಷೆನಾ’ ಎಂದು ಪ್ರಶ್ನಿಸಿದರು.

ಬ್ಯಾಂಕ್ ಖಾತೆಗೆ ಪಿಂಚಣಿ

‘ಮಾಸಿಕ ಪಿಂಚಣಿ ಹಣವನ್ನು ಮುಂದಿನ ದಿನಗಳಲ್ಲಿ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುವುದು’ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.

‘ಈ ಯೋಜನೆಗೆ ಮುಖ್ಯಮಂತ್ರಿ ಅವರು ಶೀಘ್ರವೇ ಚಾಲನೆ ನೀಡಲಿದ್ದಾರೆ. ಪಿಂಚಣಿದಾರರು ಗೊಂದಲಕ್ಕೆ ಅವಕಾಶ ಇರುವುದಿಲ್ಲ’ ಎಂದರು.

‘ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಜಾಗದ ಸಮಸ್ಯೆ ಇದ್ದು, ಸರಿಪಡಿಸಲಾಗುವುದು’ ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.