ADVERTISEMENT

ಮತ್ತಷ್ಟು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ: ಬಿ.ಎಸ್‌. ಯಡಿಯೂರಪ್ಪ

ಪದಕ ಪ್ರದಾನ ಸಮಾರಂಭದಲ್ಲಿ ಪೊಲೀಸರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಕಿವಿಮಾತು

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2020, 20:37 IST
Last Updated 20 ನವೆಂಬರ್ 2020, 20:37 IST
ವಿಧಾನಸೌಧದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ‘ಮುಖ್ಯಮಂತ್ರಿಯವರ ‍ಪೊಲೀಸ್‌ ಪದಕ’ ಸ್ವೀಕರಿಸಿದ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಜತೆ ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ ಕಮಲ್‌ ಪಂತ್‌, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌, ತರಬೇತಿ ವಿಭಾಗದ ಪೊಲೀಸ್‌ ಮಹಾನಿರ್ದೇಶಕ ಪಿ.ಕೆ. ಗರ್ಗ್‌ ಮತ್ತು ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಎಂ.ಎ. ಸಲೀಂ  – ಪ್ರಜಾವಾಣಿ ಚಿತ್ರ
ವಿಧಾನಸೌಧದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ‘ಮುಖ್ಯಮಂತ್ರಿಯವರ ‍ಪೊಲೀಸ್‌ ಪದಕ’ ಸ್ವೀಕರಿಸಿದ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಜತೆ ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ ಕಮಲ್‌ ಪಂತ್‌, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌, ತರಬೇತಿ ವಿಭಾಗದ ಪೊಲೀಸ್‌ ಮಹಾನಿರ್ದೇಶಕ ಪಿ.ಕೆ. ಗರ್ಗ್‌ ಮತ್ತು ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಎಂ.ಎ. ಸಲೀಂ  – ಪ್ರಜಾವಾಣಿ ಚಿತ್ರ   

ಬೆಂಗಳೂರು: ರಾಜ್ಯದ ಪೊಲೀಸರು ಮತ್ತಷ್ಟು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು. ಜನಸಾಮಾನ್ಯರು ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ನಿರ್ಭಿಡೆಯಿಂದ ಪೊಲೀಸ್‌ ಠಾಣೆಗಳಿಗೆ ಬರುವ ವಾತಾವರಣ ನಿರ್ಮಾಣವಾಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಕರೆ ನೀಡಿದರು.

ಗೃಹ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ 237 ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿಯವರ ಪೊಲೀಸ್‌ ಪದಕ ಪ್ರದಾನ ಮಾಡಿ ಅವರು ಮಾತನಾಡಿದರು.

ಕರ್ನಾಟಕದ ಪೊಲೀಸರು ದಕ್ಷತೆ ಮತ್ತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ದಕ್ಷ ಮತ್ತು ಪ್ರಾಮಾಣಿಕ ಪೊಲೀಸ್‌ ಅಧಿಕಾರಿಗಳಿಗೆ ಸರ್ಕಾರ ಬೆಂಬಲ ನೀಡಲಿದೆ. ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ವಸತಿ ಸೌಕರ್ಯ ಕಲ್ಪಿಸುವುದು,
ಮಹಿಳಾ ಪೊಲೀಸ್‌ ಠಾಣೆಗಳನ್ನು ‘ಒನ್‌ ಸ್ಟಾಪ್‌’ ಸೇವಾ ಕೇಂದ್ರಗಳನ್ನಾಗಿ ಪರಿವರ್ತಿಸುವ ಯೋಜನೆಗಳು ಪ್ರಗತಿಯಲ್ಲಿವೆ ಎಂದರು.

ADVERTISEMENT

ಕಾನೂನು ಸುವ್ಯವಸ್ಥೆ ಕಾಪಾಡುವುದು, ನಕ್ಸಲ್‌ ಚಟುವಟಿಕೆ ನಿಗ್ರಹ, ಗುಪ್ತವಾರ್ತೆ ಸಂಗ್ರಹ ಸೇರಿದಂತೆ ಹಲವು ರೀತಿಯಲ್ಲಿ ರಾಜ್ಯದ ಪೊಲೀಸರು ಸಮಾಜದ ರಕ್ಷಣೆಗಾಗಿ ದುಡಿಯುತ್ತಿದ್ದಾರೆ. ಅವರ ಸೇವೆ ಶ್ಲಾಘನೀಯವಾದುದು. ಕರ್ನಾಟಕ ಪೊಲೀಸ್‌ ಪಡೆ ‘ವಿಶ್ವಾಸಾರ್ಹ ಪಡೆ’ ಎಂಬ ಮನ್ನಣೆ ಪಡೆದಿದೆ. ಅದು ಮತ್ತಷ್ಟು ಎತ್ತರಕ್ಕೆ ಏರಬೇಕು ಎಂದು ಹೇಳಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ‘ಪೊಲೀಸ್‌ ಇಲಾಖೆಗೆ 16,000 ಸಿಬ್ಬಂದಿ ನೇಮಕಾತಿಗೆ ಮುಖ್ಯಮಂತ್ರಿಯವರು ಅನುಮತಿ ನೀಡಿದ್ದಾರೆ. ವಿವಿಧ ಹುದ್ದೆಗಳ ಭರ್ತಿಗೆ ಈಗಾಗಲೇ ನೇಮಕಾತಿ ಪ್ರಕ್ರಿಯೆಗಳು ಆರಂಭವಾಗಿವೆ’ ಎಂದು ತಿಳಿಸಿದರು.

ಹೊಸ ಕಟ್ಟಡಗಳ ನಿರ್ಮಾಣ, ಹಳೆ ಕಟ್ಟಡಗಳ ದುರಸ್ತಿ ಸೇರಿದಂತೆ ಪೊಲೀಸ್‌ ಇಲಾಖೆಯ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳೂ ನಡೆಯುತ್ತಿವೆ. ಹಲವು ಸವಾಲುಗಳನ್ನು ಎದುರಿಸಿಕೊಂಡು ಪೊಲೀಸರು ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಶಾಂತಿ ಕದಡಲು ಸಮಾಜಘಾತುಕ ಶಕ್ತಿಗಳು ಪ್ರಯತ್ನ ನಡೆಸುತ್ತಿವೆ. ಪೊಲೀಸ್‌ ಇಲಾಖೆ ಅಂತಹ ಯತ್ನಗಳನ್ನು ನಿಷ್ಕ್ರಿಯಗೊಳಿಸಿದೆ ಎಂದರು.

ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್‌, ತರಬೇತಿ ವಿಭಾಗದ ಪೊಲೀಸ್‌ ಮಹಾನಿರ್ದೇಶಕ ಪಿ.ಕೆ. ಗರ್ಗ್, ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌, ಇಲಾಖೆ ಕಾರ್ಯದರ್ಶಿ ಡಿ. ರೂಪಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.