ಬೆಂಗಳೂರು: ‘ನಗರದಲ್ಲಿ ಹಾಳಾಗಿರುವ ರಸ್ತೆ, ಗುಂಡಿಗಳಿಂದ ಜನರು ಹೈರಾಣಾಗಿದ್ದು, ನಿತ್ಯ ಅವರ ಸಂಕಷ್ಟ ನಿಮ್ಮ ಕಣ್ಣಿಗೆ ಬೀಳುತ್ತಿಲ್ಲವೇ? ತುರ್ತು ಕ್ರಮ ಏಕೆ ತೆಗೆದುಕೊಂಡಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಬಿಎ ಹಾಗೂ ಪಾಲಿಕೆಗಳ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಬೆಂಗಳೂರು ರಸ್ತೆಗಳ ಸುಧಾರಣೆ ಹಾಗೂ ಸಂಚಾರ ವ್ಯವಸ್ಥೆ ಕುರಿತು ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದರು.
‘ವಾರ್ಡ್ ಎಂಜಿನಿಯರ್‌ಗಳು, ಮುಖ್ಯ ಎಂಜಿನಿಯರ್‌ಗಳು ಏನು ಮಾಡುತ್ತಿದ್ದಾರೆ? ಒಂದು ತಿಂಗಳ ಕಾಲಾವಕಾಶ ನೀಡುತ್ತೇವೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ವಹಿಸಲೇಬೇಕು. ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲೇಬೇಕು’ ಎಂದು ತಾಕೀತು ಮಾಡಿದರು.
‘ರಸ್ತೆ ನಿರ್ವಹಣೆಗೆ ಸೂಕ್ತ ಕ್ರಮ ವಹಿಸದ ಅಧಿಕಾರಿಗಳ ಮೇಲೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಗುತ್ತಿಗೆದಾರರೊಂದಿಗೆ ಶಾಮೀಲಾಗದೆ ಒದಗಿಸಿರುವ ಅನುದಾನಕ್ಕೆ ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು, ವೈಜ್ಞಾನಿಕವಾದ ಕಾಮಗಾರಿಗಳನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು’ ಎಂದರು.
‘ಮಳೆಗಾಲಕ್ಕೆ ಮುನ್ನವೇ ರಸ್ತೆ ಕಾಮಗಾರಿಗಳನ್ನು ಏಕೆ ಮುಗಿಸುತ್ತಿಲ್ಲ? ಮಳೆಗಾಲದಲ್ಲೇ ಕಾಮಗಾರಿ ಏಕೆ ಪ್ರಾರಂಭಿಸುತ್ತೀರಿ’ ಎಂಬ ಸಿದ್ದರಾಮಯ್ಯ ಅವರ ಪ್ರಶ್ನೆಗೆ ಜಿಬಿಎ ಅಧಿಕಾರಿಗಳು ನಿರುತ್ತರರಾದರು.
‘ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನೂತನವಾಗಿ ನೇಮಕಗೊಂಡಿರುವ ಆಯುಕ್ತರು ಫೀಲ್ಡ್ ವರ್ಕ್ ಮಾಡಿ, ನಿಗಾ ಇರಿಸಬೇಕು. ಬಿಡಿಎ, ಬಿಎಂಆರ್‌ಸಿಎಲ್, ಜಲಮಂಡಳಿ ಅಧಿಕಾರಿಗಳ ನಡುವೆ ಸಮನ್ವಯವೇ ಇರುವುದಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
‘ಜಿಬಿಎ ಮುಖ್ಯ ಆಯುಕ್ತರು ಪ್ರತಿ ವಾರ ಐದೂ ನಗರ ಪಾಲಿಕೆಗಳ ಆಯುಕ್ತರೊಂದಿಗೆ ಸಭೆ ನಡೆಸಿ, ನಿರಂತರ ಸಂಪರ್ಕದಲ್ಲಿರಬೇಕು. ಹಣದ ಕೊರತೆಯಿದ್ದರೆ ಆರ್ಥಿಕ ಇಲಾಖೆಯಿಂದ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುತ್ತೇವೆ. ಆದ್ಯತೆ ಮೇರೆಗೆ ಕ್ರಮ ವಹಿಸಿ. ತಿಂಗಳ ನಂತರ ಮತ್ತೆ ಮೌಲ್ಯಮಾಪನ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇಂಧನ ಸಚಿವ ಕೆ.ಜೆ. ಜಾರ್ಜ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್, ಪೊಲೀಸ್ ಮಹಾ ನಿರ್ದೇಶಕ ಎಂ.ಎ. ಸಲೀಂ, ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್, ಬಿಎಂಆರ್‌ಸಿಎಲ್, ಬಿಡಿಎ, ಜಲಮಂಡಳಿ ಅಧಿಕಾರಿಗಳು ಭಾಗವಹಿಸಿದ್ದರು.
ಜಿಬಿಎ ಅಧಿಕಾರಿಗಳ ಸಮಜಾಯಿಷಿ
ಮುಖ್ಯ– ಉಪ ಮುಖ್ಯ ರಸ್ತೆಗಳಲ್ಲಿ ಗುಂಡಿ ಮುಚ್ಚಲು 2025-26ರ ಆಯವ್ಯಯದಲ್ಲಿ ₹18 ಕೋಟಿ ಅನುದಾನ
ನಗರ ಪಾಲಿಕೆಗಳಲ್ಲಿ ತುರ್ತು ಕಾಮಗಾರಿಗಳಿಗೆ ತಲಾ ₹25 ಕೋಟಿಗಳ ಹಣವನ್ನು ಬಿಡುಗಡೆ ಮಾಡಲಾಗಿದ್ದು ಪಾಲಿಕೆಗಳಿಂದ ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮ
ನೂತನ ತಂತ್ರಜ್ಞಾನ ಜೆಟ್ ಪ್ಯಾಚರ್ ಬಳಸಿಕೊಂಡು ₹2.5 ಕೋಟಿ ಮೊತ್ತ ಟೆಂಡರ್ ಚಾಲ್ತಿಯಲ್ಲಿದೆ. ಇದರಿಂದ ತೇವಾಂಶವಿರುವ ಸಮಯದಲ್ಲಿಯೂ ಗುಂಡಿಗಳನ್ನು ಮುಚ್ಚಬಹುದು
ಐದೂ ಪಾಲಿಕೆಗಳೊಂದಿಗೆ ಸಮನ್ವಯ ಸಾಧಿಸಲು ಒಬ್ಬ ತಾಂತ್ರಿಕ ಸಮನ್ವಯಾಧಿಕಾರಿ ನೇಮಿಸಲು ಕ್ರಮ
ಇಬ್ಬಲೂರು ಜಂಕ್ಷನ್ ಅಗರ ವೀರಣ್ಣನ ಪಾಳ್ಯ ನಾಗವಾರ ಮತ್ತು ಹೆಬ್ಬಾಳ ಜಂಕ್ಷನ್‌ಗಳಲ್ಲಿ ಜಲಮಂಡಳಿ ಮತ್ತು ಮೆಟ್ರೊ ಕಾಮಗಾರಿಯಿಂದ ಜಂಕ್ಷನ್ ಹಾಳಾಗಿದ್ದು ಹೊರವರ್ತುಲ ರಸ್ತೆ ಅಭಿವೃದ್ಧಿ ಯೋಜನೆಯಡಿ ₹400 ಕೋಟಿಯ ಸಮಗ್ರ ಅಭಿವೃದ್ಧಿ
ಏಳು ಸಾವಿರ ಗುಂಡಿ ಮುಚ್ಚಲಾಗಿದೆ: ಡಿಸಿಎಂ
‘ನಗರದಲ್ಲಿ ಏಳು ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿಗಳನ್ನು ಈಗಾಗಲೇ ಮುಚ್ಚಲಾಗಿದೆ. ಇನ್ನೂ ಐದು ಸಾವಿರದಷ್ಟು ಗುಂಡಿಗಳನ್ನು ಮುಚ್ಚಲು ಬಾಕಿಯಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು ‘ರಸ್ತೆ ಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗಿದ್ದು ಸಮಾರೋಪಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ’ ಎಂದರು.
‘ಉದ್ದೇಶಪೂರ್ವಕವಾಗಿ ಯಾರೂ ರಸ್ತೆ ಗುಂಡಿಗಳನ್ನು ಮಾಡುವುದಿಲ್ಲ. ಅತಿಯಾದ ಮಳೆ ಬಿದ್ದ ಕಾರಣಕ್ಕೆ ಗುಂಡಿಗಳಾಗಿವೆ. ಈ ಬಗ್ಗೆ ಪೊಲೀಸ್ ಕಮಿಷನರ್ ಅವರಿಂದ ವರದಿ ಕೇಳಲಾಗಿದೆ. ಸಾರ್ವಜನಿಕರು ಸೇರಿದಂತೆ ಎಲ್ಲರೂ ರಸ್ತೆ ಗುಂಡಿಗಳು ಕಂಡರೆ ಗಮನಕ್ಕೆ ತರುವ ವ್ಯವಸ್ಥೆ ರೂಪಿಸಲಾಗಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.