ADVERTISEMENT

ಸರ್ವಪಕ್ಷ ಸಭೆಗೂ ಮೊದಲು ಹಿರಿಯ ಸಚಿವರ ಜೊತೆ ಸಿ.ಎಂ ಚರ್ಚೆ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2021, 11:42 IST
Last Updated 20 ಏಪ್ರಿಲ್ 2021, 11:42 IST
ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ   

ಬೆಂಗಳೂರು: ರಾಜ್ಯಪಾಲ ವಜುಭಾಯಿ ವಾಲಾ ಅಧ್ಯಕ್ಷಯಲ್ಲಿ ನಡೆಯಲಿರುವ ಸರ್ವಪಕ್ಷ ಸಭೆಗೂ ಮೊದಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸಂಪುಟದ ಹಿರಿಯ ಸಚಿವರ ಜೊತೆ ಸಮಾಲೋಚನೆ ನಡೆಸಿದರು.

ಮಣಿಪಾಲ್ ಆಸ್ಪತ್ರೆಯಿಂದಲೇ ಯಡಿಯೂರಪ್ಪ ಅವರು ವಿಡಿಯೊ ಸಂವಾದದ ಮೂಲಕ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅದಕ್ಕೂ ಮೊದಲು ಗೃಹ ಸಚಿವ ಬಸವರಾಜ ಬೊಮ್ಮಾಯಿ,‌ ಆರೋಗ್ಯ ಸಚಿವ ಡಾ. ಸುಧಾಕರ್ ಮತ್ತು ಕಂದಾಯ ಸಚಿವ ಆರ್. ಅಶೋಕ ಜೊತೆ ಅವರು ದೂರವಾಣಿ ಮೂಲಕ ಮಾತುಕತೆ ನಡೆಸಿದರು.

ಬೆಂಗಳೂರಿನಲ್ಲಿ ಕೋವಿಡ್‌ ಪರಿಸ್ಥಿತಿ ಗಂಭೀರವಾಗುತ್ತಿದೆ. ಹೀಗಾಗಿ, ಲಾಕ್​ಡೌನ್ ಹೊರತುಪಡಿಸಿ ಏನೆಲ್ಲಾ ಬಿಗಿ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬ ಕುರಿತು ಸಮಾಲೋಚನೆ ನಡೆಸಿದ್ದಾರೆ. ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ನೀಡಿರುವ ವರದಿ ಹಾಗೂ ತಜ್ಞರ ಅಭಿಪ್ರಾಯದ ಕುರಿತು ಕೂಡಾ ಚರ್ಚೆ ನಡೆಸಿದರು ಎಂದು ಗೊತ್ತಾಗಿದೆ.

ADVERTISEMENT

ಸರ್ವಪಕ್ಷ ಸಭೆಯಲ್ಲಿ ವಿರೋಧ ಪಕ್ಷಗಳು ಯಾವ ರೀತಿಯ ಅಭಿಪ್ರಾಯ ವ್ಯಕ್ತಪಡಿಸಬಹುದು, ಸರ್ಕಾರದ ನಡೆ ಹೇಗಿರಬೇಕು, ಕೋವಿಡ್‌ ನಿಯಂತ್ರಣಕ್ಕೆ ಸರ್ಕಾರ ತೆಗೆದುಕೊಳ್ಳಲು ನಿರ್ಧರಿಸಿರುವ ಕ್ರಮಗಳೇನು ಎಂಬ ಬಗ್ಗೆ ಸುದೀರ್ಘ ಸಮಾಲೋಚನೆ ನಡೆದಿದೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.