ADVERTISEMENT

ಬೆಂಗಳೂರು | ಫೆ. 8ಕ್ಕೆ ಸಿಎಂ ನೇತೃತ್ವದಲ್ಲಿ ಜನಸ್ಪಂದನ

​ಪ್ರಜಾವಾಣಿ ವಾರ್ತೆ
Published 24 ಜನವರಿ 2024, 15:47 IST
Last Updated 24 ಜನವರಿ 2024, 15:47 IST
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ   

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ 8ರಂದು ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಒದಗಿಸಲಿದ್ದಾರೆ.

ಹಿರಿಯ ಅಧಿಕಾರಿಗಳ ಜತೆ ಬುಧವಾರ ಸಭೆ ನಡೆಸಿದ ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌.ಕೆ. ಅತೀಕ್‌, ಜನಸ್ಪಂದನ ಕಾರ್ಯಕ್ರಮದ ಸಿದ್ಧತೆ ಕುರಿತು ಚರ್ಚಿಸಿದರು. ಎಲ್ಲ ಇಲಾಖೆಗಳ ಮುಖ್ಯಸ್ಥರು ಮತ್ತು ಕಾರ್ಯದರ್ಶಿಗಳು ಆ ದಿನ ಸಭೆಯಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಸೂಚಿಸಿದರು.

‘ಇದು ಮುಖ್ಯಮಂತ್ರಿಯವರು ನಡೆಸುತ್ತಿರುವ ಎರಡನೇ ಜನಸ್ಪಂದನ ಕಾರ್ಯಕ್ರಮ. ಸಭೆಗೆ ಬರುವ ಅಂಗವಿಕಲರು, ಹಿರಿಯ ನಾಗರಿಕರಿಗೆ ವಿಶೇಷ ವ್ಯವಸ್ಥೆ ಮಾಡಬೇಕು. ಸ್ವಚ್ಛತೆಗೆ, ಕುಡಿಯವ ನೀರು ಪೂರೈಕೆ, ಲಘು ಉಪಾಹಾರ ಮತ್ತು ಊಟದ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಕೆಂಪೇಗೌಡ ಬಸ್‌ ನಿಲ್ದಾಣ ಮತ್ತು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಗಳಿಂದ ವಿಧಾನಸೌಧಕ್ಕೆ ಉಚಿತ ಬಸ್‌ ಪ್ರಯಾಣದ ಸೌಲಭ್ಯ ಕಲ್ಪಿಸಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ADVERTISEMENT

ಎಲ್ಲ ಇಲಾಖೆಗಳೂ ಮನವಿ, ದೂರು ಸ್ವೀಕಾರಕ್ಕೆ ಕೌಂಟರ್‌ಗಳನ್ನು ತೆರೆಯಬೇಕು. ಸಾರ್ವಜನಿಕರು ನಿರ್ದಿಷ್ಟ ಕೌಂಟರ್‌ಗಳಿಗೆ ಹೋಗಲು ನೆರವಾಗಲು ಸಿಬ್ಬಂದಿ ನಿಯೋಜಿಸಬೇಕು. ಇ–ಆಡಳಿತ ಇಲಾಖೆಯಿಂದಲೂ ಅರ್ಜಿಗಳ ಸ್ವೀಕಾರಕ್ಕೆ ಪೂರಕ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಜನಸ್ಪಂದನ ಸಭೆಯಲ್ಲಿ ಸ್ವೀಕೃತವಾದ ಅರ್ಜಿಗಳ ತ್ವರಿತ ವಿಲೇವಾರಿ ಮಾಡುವಂತೆ ಎಲ್ಲ ಇಲಾಖೆಗಳಿಗೆ ಪತ್ರ ಬರೆಯಲಾಗುವುದು. ಈ ಕುರಿತು ಪ್ರಗತಿ ಪರಿಶೀಲನೆ ನಡೆಸುವಂತೆಯೂ ಮುಖ್ಯ ಕಾರ್ಯದರ್ಶಿಗಳನ್ನು ಕೋರಲಾಗುವುದು ಎಂದರು.

ಮುಖ್ಯಮಂತ್ರಿಯವರ ಕಾರ್ಯದರ್ಶಿ ಕೆ.ವಿ. ತ್ರಿಲೋಕಚಂದ್ರ, ಇ-ಆಡಳಿತ ಇಲಾಖೆ ಕಾರ್ಯದರ್ಶಿ ಉಜ್ವಲ್‌ ಕುಮಾರ್‌ ಘೋಷ್‌, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿ ಅಜಯ್‌ ನಾಗಭೂಷಣ್‌ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.