ಬೆಂಗಳೂರು: ‘ವಿಜ್ಞಾನ, ತಂತ್ರಜ್ಞಾನ ಬೆಳವಣಿಗೆಯಲ್ಲಿ ದೇಶ ಪ್ರಗತಿ ಸಾಧಿಸಿದೆ. ಕೃತಕ ಬುದ್ಧಿಮತ್ತೆ ದೇಶದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅಭಿಪ್ರಾಯಪಟ್ಟರು.
ನಗರದ ಸಿಎಂಆರ್ ವಿಶ್ವವಿದ್ಯಾಲಯ ಆಯೋಜಿಸಿದ್ದ ಒಂಬತ್ತನೇ ಘಟಿಕೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
‘ವಿದ್ಯಾರ್ಥಿಗಳು ತಂತ್ರಜ್ಞಾನಗಳನ್ನು ಬಳಸಿಕೊಂಡು ಸ್ಪರ್ಧಾತ್ಮಕವಾಗಿ ಬೆಳೆಯುವ ಮೂಲಕ ದೇಶವನ್ನು ಬಲಿಷ್ಠವಾಗಿ ಕಟ್ಟಬೇಕು. ಈ ನಿಟ್ಟಿನಲ್ಲಿ ಸಿಎಂಆರ್ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಒತ್ತು ನೀಡಿದೆ’ ಎಂದು ಹೇಳಿದರು.
ರಾಜ್ಯಪಾಲ ಥಾವರಚಂದ್ ಗೆಹಲೋತ್ ಮಾತನಾಡಿ, ‘ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ದೇಶಕ್ಕೆ ಕೊಡುಗೆ ನೀಡಬೇಕು. ಸಿಎಂಆರ್ ವಿಶ್ವವಿದ್ಯಾಲಯವು, ವಿದ್ಯಾರ್ಥಿಗಳಿಗೆ ಗುಣಾತ್ಮಕ, ಮೌಲ್ಯಯುತ ಶಿಕ್ಷಣ ನೀಡುತ್ತಿದೆ. ಪ್ರತಿಭಾವಂತ ವಿದ್ಯಾರ್ಥಿ ಸಮುದಾಯವನ್ನು ದೇಶಕ್ಕೆ ಕೊಡುಗೆಯಾಗಿ ನೀಡುತ್ತಿದೆ’ ಎಂದು ಶ್ಲಾಘಿಸಿದರು.
ಇದಕ್ಕೂ ಮುನ್ನ ರಾಜ್ಯಪಾಲರು 24 ಸಂಶೋಧನಾ ವಿದ್ಯಾರ್ಥಿಗಳಿಗೆ ಪಿಎಚ್.ಡಿ, 34 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಿದರು. 2023-24 ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದ 2188 ವಿದ್ಯಾರ್ಥಿಗಳಿಗೆ ಸಿಎಂಆರ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ಸಿ.ರಾಮಮೂರ್ತಿ ಮತ್ತು ಕುಲಾಧಿಪತಿ ಸಬಿತಾ ರಾಮಮೂರ್ತಿ ಪದವಿ ಪ್ರಮಾಣ ಪತ್ರ ಪ್ರದಾನ ಮಾಡಿದರು.
ಕುಲಪತಿ ಎಚ್.ಬಿ.ರಾಘವೇಂದ್ರ, ಸಿಎಂಆರ್ ಜ್ಞಾನಧಾರ ಟ್ರಸ್ಟ್ ಕಾರ್ಯದರ್ಶಿ ಕೆ.ಸಿ ಜಗನ್ನಾಥ ರೆಡ್ಡಿ, ಸಹ ಕುಲಾಧಿಪತಿ ಕೆ.ಆರ್ ಜಯದೀಪ್, ಕುಲಸಚಿವ ಪ್ರವೀಣ್ ಮತ್ತಿತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.