ADVERTISEMENT

ಬಿಜೆಪಿ ಸರ್ಕಾರದಿಂದ ಶಿಕ್ಷಣ ಕ್ಷೇತ್ರಕ್ಕೆ ಧಕ್ಕೆ: ಕಾಂಗ್ರೆಸ್ ಟೀಕೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2020, 15:36 IST
Last Updated 4 ಸೆಪ್ಟೆಂಬರ್ 2020, 15:36 IST
   

ಬೆಂಗಳೂರು: ಕೋವಿಡ್‌ ಲಾಕ್‌ಡೌನ್‌ ಅವಧಿಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿನ ಸುಧಾರಣೆಗೆ ಸರಿಯಾದ ಕ್ರಮಗಳನ್ನು ಕೈಗೊಳ್ಳಲು ರಾಜ್ಯದ ಬಿಜೆಪಿ ಸರ್ಕಾರ ವಿಫಲವಾಗಿದ್ದು, ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಸಮಸ್ಯೆಗಳ ಸುಳಿಗೆ ತಳ್ಳಿದೆ ಎಂದು ಕಾಂಗ್ರೆಸ್ ದೂರಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್‌ ಮತ್ತು ಪಕ್ಷದ ಹಿರಿಯ ಮುಖಂಡ ಬಿ.ಎಲ್.ಶಂಕರ್‌ ಜತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದಶಾಸಕ ಪ್ರಿಯಾಂಕ್‌ ಖರ್ಗೆ, ‘ಆರು ತಿಂಗಳಿನಿಂದ ಲಾಕ್‌ಡೌನ್‌ ಜಾರಿಯಲ್ಲಿದ್ದರೂ, ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಸರ್ಕಾರ ಯಾವುದೇ ಯೋಜನೆ ರೂಪಿಸಿಲ್ಲ. ಸರ್ಕಾರದ ನಿರ್ಲಕ್ಷ್ಯದ ಕಾರಣದಿಂದ ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಕುಸಿದುಬಿದ್ದಿದೆ’ ಎಂದು ಟೀಕಿಸಿದರು.

ಖಾಸಗಿ ಶಾಲೆಗಳಲ್ಲಿ ಕೆಲಸ ಮಾಡುತ್ತಿದ್ದ ಎರಡು ಲಕ್ಷಕ್ಕೂ ಹೆಚ್ಚು ಶಿಕ್ಷಕರಿಗೆ ನಾಲ್ಕೈದು ತಿಂಗಳಿನಿಂದ ವೇತನವೇ ದೊರಕಿಲ್ಲ. ಸರ್ಕಾರಿ ಶಾಲಾ, ಕಾಲೇಜುಗಳ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರು ಸಂಬಳವಿಲ್ಲದೇ ಬೀದಿಗೆ ಬಿದ್ದಿದ್ದಾರೆ. ಈ ಶಿಕ್ಷಕರು ಜೀವನ ನಿರ್ವಹಣೆಗಾಗಿ ಕೂಲಿ ಕೆಲಸ ಮಾಡುತ್ತಿರುವ, ತರಕಾರಿ ಮಾರುತ್ತಿರುವ ಕುರಿತು ಮಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿವೆ. ಈ ಬಗ್ಗೆ ರಾಜ್ಯ ಸರ್ಕಾರ ಕಿಂಚಿತ್ತೂ ಗಮನಹರಿಸಿಲ್ಲ ಎಂದರು.

ADVERTISEMENT

‘ವಿದ್ಯಾಗಮ’ ಯೋಜನೆಯ ಹೆಸರಿನಲ್ಲಿ ಶಿಕ್ಷಣ ಇಲಾಖೆಯು ಶಿಕ್ಷಕರ ಜೀವದ ಜೊತೆ ಚೆಲ್ಲಾಟ ಆಡುತ್ತಿದೆ. ಆನ್‌ಲೈನ್‌ ಶಿಕ್ಷಣ ಎಂಬುದು ಬಹುತೇಕ ವಿದ್ಯಾರ್ಥಿಗಳಿಗೆ ಗಗನಕುಸುಮವಾಗಿದೆ. ರಾಜ್ಯದಲ್ಲಿ 80 ಲಕ್ಷ ವಿದ್ಯಾರ್ಥಿಗಳಿದ್ದಾರೆ. ಈ ಪೈಕಿ ಶೇ 62.5ರಷ್ಟು ಮಕ್ಕಳು ಮಾತ್ರ ಸ್ಮಾರ್ಟ್‌ ಫೋನ್‌ ಹೊಂದಿದ್ದಾರೆ. ಶೇ 53.75ರಷ್ಟು ಮಕ್ಕಳು ಮಾತ್ರ ಇಂಟರ್‌ನೆಟ್‌ ಸೌಲಭ್ಯ ಹೊಂದಿದ್ದಾರೆ. ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣದಿಂದ ವಂಚಿತರಾಗುವ ಸ್ಥಿತಿಯನ್ನು ಸರ್ಕಾರವೇ ನಿರ್ಮಿಸಿದೆ ಎಂದು ಪ್ರಿಯಾಂಕ್‌ ಆರೋಪಿಸಿದರು.

‘ಮಕ್ಕಳ ಶಿಕ್ಷಣಕ್ಕಾಗಿ ಸ್ಮಾರ್ಟ್‌ ಫೋನ್‌ ಖರೀದಿಸಲು ಪೋಷಕರು ಚಿನ್ನ, ಹಸುಗಳನ್ನು ಮಾರುತ್ತಿದ್ದಾರೆ. ಮೊಬೈಲ್‌ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ ಆಗುವ ಸಾಧ್ಯತೆಯೂ ಇದೆ. ಕೋವಿಡ್‌ನಿಂದ 40,000 ಶಿಕ್ಷಕರು ಕೆಲಸ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದಾರೆ. ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಸರ್ಕಾರವೇ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಶಿಕ್ಷೆ ನೀಡಿದೆ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.