ನೆಲಮಂಗಲ: ‘ಬಡವರ್ಗದ ಹೆಣ್ಣುಮಕ್ಕಳಿಗಾಗಿ ಯಡಿಯೂರಪ್ಪ ಸರ್ಕಾರ ಜಾರಿಗೆ ತಂದಿದ್ದ ಭಾಗ್ಯಲಕ್ಷ್ಮಿ ಯೋಜನೆಯನ್ನು ಸಿದ್ದರಾಮಯ್ಯ ಸರ್ಕಾರ ನಿಲ್ಲಿಸಿ, ಅನ್ಯಾಯ ಮಾಡಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಅಹಲ್ಯಾಬಾಯಿ ಹೋಳ್ಕರ್ ಅವರ 300ನೇ ಜನ್ಮದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
‘36 ಲಕ್ಷಕ್ಕೂ ಹೆಚ್ಚು ಹೆಣ್ಣುಮಕ್ಕಳು ಭಾಗ್ಯಲಕ್ಷ್ಮಿ ಯೋಜನೆಯ ಪ್ರಯೋಜನ ಪಡೆದಿದ್ದಾರೆ. ಇಂಥ ಯೋಜನೆ ನಿಲ್ಲಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಬಡ ಹೆಣ್ಣುಮಕ್ಕಳಿಗೆ ಅನ್ಯಾಯ ಮಾಡಿದೆ’ ಎಂದರು.
‘ಅಹಲ್ಯಾಬಾಯಿ ಹೋಳ್ಕರ್ ಅವರು ಸಣ್ಣ ವಯಸ್ಸಿನಲ್ಲೇ ಪತಿಯನ್ನು ಕಳೆದುಕೊಂಡು ಧೃತಿಗೆಡದೆ ಸೈನ್ಯ ಕಟ್ಟಿ, ಹಿಂದೂ ದೇವಾಲಯಗಳನ್ನು ರಕ್ಷಿಸಿದರು, ಔರಂಗಜೇಬನನ್ನು ಹಿಮ್ಮೆಟ್ಟಿಸಿದ್ದರು. ಈ ಹಿನ್ನೆಲೆಯಲ್ಲಿ ಅಹಲ್ಯಾಬಾಯಿ ಅವರ ಜನ್ಮದಿನಾಚಣೆಯನ್ನು ಮಹಿಳಾ ಸಮಾವೇಶದ ರೀತಿಯಲ್ಲಿ ದೇಶದಾದ್ಯಂತ ಆಚರಿಸಲಾಗುತ್ತಿದೆ’ ಎಂದರು.
‘ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿಕೆ ನೀಡಿರುವ ತಮಿಳು ನಟ ಕಮಲ ಹಾಸನ್‌ಗೆ ಕ್ಷಮೆಯಾಚಿಸುವಂತೆ ಹೈಕೋರ್ಟ್ ಹೇಳಿದೆ. ಕೂಡಲೇ ಅವರು ಕ್ಷಮೆ ಯಾಚಿಸಬೇಕು’ ಎಂದು ಒತ್ತಾಯಿಸಿದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಅಹಲ್ಯಾಬಾಯಿ ಹೋಳ್ಕರ್ ಅವರ ಭಾವಚಿತ್ರವನ್ನು ಪ್ರವಾಸಿ ಮಂದಿರದಿಂದ ಜಯದೇವ ಭವನದವರೆಗೆ ಮೆರವಣಿಗೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಿಜಯೇಂದ್ರ ಅವರಿಗೆ ಕ್ರೇನ್ ಮೂಲಕ ಬೃಹತ್ ಹಾರ ಹಾಕಿ ಸ್ವಾಗತಿಸಲಾಯಿತು.
ಕಾಂಗ್ರೆಸ್ ಯುವಮುಖಂಡ ಅರುಣ್‌ಕಮಾರ್ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ತಾಲ್ಲೂಕು ಅಧ್ಯಕ್ಷ ಜಗದೀಶ್ ಚೌಧರಿ, ಮುಖಂಡ ಎಸ್.ಮಲ್ಲಯ್ಯ, ರಾಜ್ಯ ವಕ್ತಾರ ವೆಂಕಟೇಶ್ ದೊಡ್ಡೇರಿ ಇದ್ದರು. ಗ್ರಾಮಾಂತರ ಜಿಲ್ಲೆಯ ಎಲ್ಲ ತಾಲ್ಲೂಕುಗಳಿಂದ ಕಾರ್ಯಕರ್ತರು ಆಗಮಿಸಿದ್ದರು.
ಪೊಲೀಸರು, ಮುಖಂಡರ ನಡುವೆ ಮಾತಿನ ಚಕಮಕಿ: ಮೆರವಣಿಗೆಯಲ್ಲಿ ಡಿ.ಜೆ. ಬಳಸುತ್ತಿರುವುದನ್ನು ನಿಲ್ಲಿಸುವಂತೆ ಪೊಲೀಸರು ತಡೆಯಲು ಬಂದಾಗ ಬಿಜೆಪಿ ಮುಖಂಡರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಡಿ.ಜೆ.ಗೆ ಬದಲಾಗಿ ಮೈಕ್ ಬಳಸುವಂತೆ ಸೂಚಿಸಿದರೂ ಡಿ.ಜೆ. ನಿಲ್ಲಿಸದೆ ಮೆರವಣಿಗೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.