ADVERTISEMENT

ನೆರೆಯಿಂದ ಹಾನಿ; ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2019, 7:46 IST
Last Updated 7 ಸೆಪ್ಟೆಂಬರ್ 2019, 7:46 IST
ನೆರೆ ಪರಿಹಾರ ಬಿಡುಗಡೆಗೆ ಒತ್ತಾಯಿಸಿ ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಕಾರ್ಯಕರ್ತರು ಆನಂದರಾವ್ ವೃತ್ತದ ಗಾಂಧಿ ಪ್ರತಿಮೆ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು
ನೆರೆ ಪರಿಹಾರ ಬಿಡುಗಡೆಗೆ ಒತ್ತಾಯಿಸಿ ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಕಾರ್ಯಕರ್ತರು ಆನಂದರಾವ್ ವೃತ್ತದ ಗಾಂಧಿ ಪ್ರತಿಮೆ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು   

ಬೆಂಗಳೂರು: ‘ರಾಜ್ಯದಲ್ಲಿ ಪ್ರವಾಹದಿಂದಾಗಿ ₹ 50,000 ಕೋಟಿಗಿಂತಲೂ ಹೆಚ್ಚು ಹಾನಿಯಾಗಿದ್ದು, ಅದರ ಅರ್ಧ ಮೊತ್ತವನ್ನು ಪರಿಹಾರದ ರೂಪದಲ್ಲಿ ಕೇಂದ್ರ ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

‘ಚಂದ್ರಯಾನ’ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ನಗರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಆನಂದರಾವ್ ವೃತ್ತದ ಗಾಂಧಿ ಪ್ರತಿಮೆ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ‘ಪ್ರಧಾನಿಯವರೆ, ಚಂದ್ರಯಾನದ ಜೊತೆಗೆ ಕರ್ನಾಟಕದ ಪ್ರವಾಹ ಪೀಡಿತ ಸ್ಥಳಗಳಿಗೂ ಭೇಟಿ ನೀಡಿ’ ಎಂದು ಒತ್ತಾಯಿಸಿದರು.

’ಮನೆ, ಜಮೀನು ಕಳೆದುಕೊಂಡಿರುವ ಜನ ಸಂಕಷ್ಟದಲ್ಲಿ ದಿನ ಕಳೆಯುತ್ತಿದ್ದಾರೆ. ಇಂಥ ಸ್ಥಿತಿಯಲ್ಲೇ ಪ್ರಧಾನಿಯವರು ವಿದೇಶಗಳಿಗೆ ಆರ್ಥಿಕ ಸಹಾಯ ಮಾಡುತ್ತಿದ್ದು, ಭಾರತೀಯರನ್ನೇ ಕಡೆಗಣಿಸುತ್ತಿದ್ದಾರೆ. ರಾಜ್ಯದಿಂದ 25 ಬಿಜೆಪಿ ಸಂಸದರು ಆಯ್ಕೆಯಾದರೂ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ತೋರುತ್ತಿದ್ದಾರೆ’ ಎಂದು ದೂರಿದರು.

ADVERTISEMENT

ಸೇಡಿನ ಕೆಲಸ: ‘ರಾಜಕೀಯ ಸೇಡು ತೀರಿಸಿಕೊಳ್ಳುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್ ಶಾ, ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸುವಂತೆ ಮಾಡಿ ರಾಜಕೀಯ ಸೇಡು ತೀರಿಸಿಕೊಳ್ಳುತ್ತಿದ್ದಾರೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.