ಬೆಂಗಳೂರು: ‘ನ್ಯಾಯ ಕೇಳಿಕೊಂಡು ಸರ್ಕಾರಿ ಕಚೇರಿಗಳಿಗೆ ಹೋದರೆ, ಅಕ್ರಮಗಳನ್ನು ಪ್ರಶ್ನಿಸಿದರೆ, ಪೊಲೀಸರನ್ನು ಕರೆಸಿ ಸುಳ್ಳು ದೂರು ದಾಖಲು ಮಾಡುವ ಕೆಲಸ ಮಾಡಲಾಗುತ್ತಿದೆ’ ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಆರೋಪಿಸಿದೆ.
‘ಕೆಆರ್‌ಎಸ್ ಪಕ್ಷದ ಹೋರಾಟ ಮತ್ತು ಧ್ವನಿಯನ್ನು ರಾಜ್ಯ ಸರ್ಕಾರ ಹತ್ತಿಕ್ಕುತ್ತಿದ್ದು, ಪೊಲೀಸ್ ಇಲಾಖೆಯಲ್ಲಿನ ಭ್ರಷ್ಟ ಅಧಿಕಾರಿಗಳನ್ನು ಬಳಸಿಕೊಂಡು, ಪಕ್ಷದ ಪದಾಧಿಕಾರಿಗಳ ಮತ್ತು ಕಾರ್ಯಕರ್ತರ ಮೇಲೆ ಸುಳ್ಳು ದೂರುಗಳನ್ನು ದಾಖಲಿಸುವ, ಬಂಧಿಸುವ ಕೆಲಸವನ್ನು ಮಾಡುತ್ತಿದೆ. ದೇಶದಲ್ಲಿ ಸಂವಿಧಾನಕ್ಕೆ ಅಪಾಯ ಬಂದಿದೆ, ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ ಎಂದು ಹೇಳುವ ಕಾಂಗ್ರೆಸ್ ಪಕ್ಷದವರೆ, ರಾಜ್ಯದಲ್ಲಿ ಸಂವಿಧಾನಬದ್ಧ ಹಕ್ಕುಗಳನ್ನು ದಮನ ಮಾಡುತ್ತಿದ್ದಾರೆ’ ಎಂದು ಪಕ್ಷದ ಜಂಟಿ ಕಾರ್ಯದರ್ಶಿ ಎಲ್. ಜೀವನ್ ತಿಳಿಸಿದ್ದಾರೆ.
‘ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪಕ್ಷದ ಕಾರ್ಯಕರ್ತರ ವಿರುದ್ಧ ಎರಡು ಸುಳ್ಳು ಪ್ರಕರಣಗಳನ್ನು ದಾಖಲಿಸಿ, ಬಂಧಿಸಲಾಗಿತ್ತು. ಪಕ್ಷದ ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಹಾಗೂ ಇತರರ ವಿರುದ್ಧ ವಿಧಾನ ಸೌಧ ಪೊಲೀಸ್ ಠಾಣೆಯಲ್ಲಿ ಸುಳ್ಳು ದೂರು ದಾಖಲಿಸಲಾಗಿದೆ. ಪೊಲೀಸರ ಈ ಕೃತ್ಯದ ಹಿಂದೆ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಕೈವಾಡವಿದ್ದು, ಇದು ಸಂವಿಧಾನ ವಿರೋಧಿ ಕೃತ್ಯವಾಗಿದೆ. ದಕ್ಷ ಆಡಳಿತ ನೀಡುವ ಕಡೆ ಗಮನ ನೀಡಬೇಕು ಹಾಗೂ ಇಂತಹ ಅಕ್ರಮಗಳನ್ನು ತಕ್ಷಣವೇ ನಿಲ್ಲಿಸಬೇಕು’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.