ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ವೇಳೆ ಸಮಸ್ಯೆ ಕಂಡುಬಂದರೆ ಅದನ್ನು ಬಗೆಹರಿಸುವುದಕ್ಕಾಗಿ ಸಮನ್ವಯ ತಂಡ ನಿಯೋಜಿಸಲು ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಸೂಚಿಸಿದ್ದಾರೆ.
ಬಿಬಿಎಂಪಿ ಹಾಗೂ ಇ-ಆಡಳಿತ ಸಮನ್ವಯದಿಂದ ಕೆಲಸ ಮಾಡಬೇಕು. ಮೊಬೈಲ್ ತಂತ್ರಾಂಶದ ಮೂಲಕ ಸಮೀಕ್ಷಾ ಕಾರ್ಯ ನಡೆಸುತ್ತಿದ್ದು, ಹೆಚ್ಚುವರಿಯಾಗಿ ತರಬೇತಿ ನೀಡಿ ತ್ವರಿತವಾಗಿ ಸಮೀಕ್ಷೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ ಬೂತ್‌ಮಟ್ಟದ ಅಧಿಕಾರಿಗಳನ್ನು ಗಣತಿದಾರರನ್ನಾಗಿ ನಿಯೋಜಿಸಲಾಗಿದ್ದು, ಆಯಾ ವಲಯ ಹಿರಿಯ ಅಧಿಕಾರಿಗಳು ಸಮೀಕ್ಷಾ ಕಾರ್ಯವನ್ನು ಖುದ್ದು ಮೇಲ್ವಿಚಾರಣೆ ಮಾಡಬೇಕು. ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಪ್ರತ್ಯೇಕ ಸರ್ವರ್ ವ್ಯವಸ್ಥೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಪರಿಶಿಷ್ಟ ಜಾತಿ, ಉಪ ಜಾತಿ ಸಮಗ್ರ ಸಮೀಕ್ಷೆಗೆ ಒಳಪಡುವವರು ಆಧಾರ್/ಪಡಿತರ ಚೀಟಿ ನೀಡಿ ನೋಂದಣಿ ಮಾಡಿಕೊಂಡ ನಂತರ ಅವರ ಮತ್ತು ಕುಟುಂಬದವರ ವೈಯಕ್ತಿಕ ವಿವರ ಒದಗಿಸಬೇಕಾಗುತ್ತದೆ. ಕುಟುಂಬದ ಸದಸ್ಯರ ವಿವರ, ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ, ಸರ್ಕಾರಿ ಸವಲತ್ತುಗಳು, ಮೂಲಸೌಕರ್ಯಗಳು ಸೇರಿ ಸಮಗ್ರ ಮಾಹಿತಿಯನ್ನು ಒದಗಿಸಬೇಕಿರುತ್ತದೆ ಎಂದು ತಿಳಿಸಿದರು.
ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭೆ ಕ್ಷೇತ್ರಗಳಲ್ಲಿ ಈವರೆಗೆ 13,796 ಪರಿಶಿಷ್ಟ ಜಾತಿ ಮನೆಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯ ಕೈಗೊಳ್ಳಲಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.