ADVERTISEMENT

ಬೆಂಗಳೂರು | ಮತ್ತೆ 2,802 ಮಂದಿಗೆ ಸೋಂಕು

ನಗರದಲ್ಲಿ ಕೋವಿಡ್ ಪೀಡಿತರ ಸಂಖ್ಯೆ 79 ಸಾವಿರಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2020, 22:02 IST
Last Updated 12 ಆಗಸ್ಟ್ 2020, 22:02 IST
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)   
""

ಬೆಂಗಳೂರು: ನಗರದಲ್ಲಿ 2,802 ಕೋವಿಡ್ ಪ್ರಕರಣಗಳು ಬುಧವಾರ ವರದಿಯಾಗಿದ್ದು, ಸೋಂಕಿತರ ಸಂಖ್ಯೆ 79 ಸಾವಿರ ದಾಟಿದೆ.

ಮತ್ತೆ 23 ಮಂದಿ ಮೃತಪಟ್ಟಿದ್ದು, ಸಾವಿಗೀಡಾದವರ ಸಂಖ್ಯೆ 1,316ಕ್ಕೆ ಏರಿಕೆಯಾಗಿದೆ. ಚೇತರಿಸಿಕೊಳ್ಳುವವರ ಸಂಖ್ಯೆ ಕೂಡ ಹೆಚ್ಚುತ್ತಿದ್ದು, 2,360 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಈವರೆಗೆ 45 ಸಾವಿರಕ್ಕೂ ಅಧಿಕ ಮಂದಿ ಚೇತರಿಸಿಕೊಂಡಿದ್ದು, 33 ಸಾವಿರಕ್ಕೂ ಅಧಿಕ ಮಂದಿ ಆಸ್ಪತ್ರೆಗಳು ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಗರದ ವಿವಿಧೆಡೆ ಆ್ಯಂಟಿಜೆನ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಪರಿಣಾಮ 12 ದಿನಗಳಲ್ಲಿ 22,444 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದೇ ಅವಧಿಯಲ್ಲಿ 26,455 ಮಂದಿ ಗುಣಮುಖರಾಗಿ ಮನೆ ಸೇರಿದ್ದಾರೆ. ಹತ್ತು ದಿನಗಳಿಂದ ಪಶ್ಚಿಮ ವಲಯದಲ್ಲಿ ಪ್ರಕರಣಗಳು ಹೆಚ್ಚುತ್ತಿದ್ದು, ಈ ಅವಧಿಯಲ್ಲಿ ನಗರದಲ್ಲಿ ಸೋಂಕಿತರಾದವರಲ್ಲಿ ಶೇ25 ರಷ್ಟು ಮಂದಿ ಆ ಭಾಗಕ್ಕೆ ಸೇರಿದವರು. ಬೆಂಗಳೂರು ದಕ್ಷಿಣದಲ್ಲಿ ಶೇ 18 ರಷ್ಟು ಪ್ರಕರಣಗಳು ವರದಿಯಾಗಿವೆ.

ADVERTISEMENT

ಬುಧವಾರ ದೃಢಪಟ್ಟ ಮರಣ ಪ್ರಕರಣಗಳಲ್ಲಿ 23 ವರ್ಷದ ಯುವಕ ಕೂಡ ಸೇರಿದ್ದಾನೆ.20 ಮಂದಿ 50 ವರ್ಷ ಮೇಲ್ಪಟ್ಟವರಾಗಿದ್ದು, ಮಧುಮೇಹ, ಅಧಿಕ ರಕ್ತದೊತ್ತಡ ಸೇರಿದಂತೆ ವಿವಿಧ ಕಾಯಿಲೆಗಳನ್ನು ಹೊಂದಿದ್ದರು. 336 ರೋಗಿಗಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ.ನಗರದ ಜ್ವರ ಚಿಕಿತ್ಸಾಲಯಗಳಲ್ಲಿ ಒಂದೇ ದಿನ 3,974 ಮಂದಿಯನ್ನು ತಪಾಸಣೆ ಮಾಡಲಾಗಿದೆ. ಅಲ್ಲಿ ಈವರೆಗೆ ಒಟ್ಟು 91,358 ಮಂದಿಯನ್ನು ಪರೀಕ್ಷೆ ಮಾಡಲಾಗಿದೆ.

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಕೋವಿಡ್ ಪ್ರಯೋಗಾಲಯಕ್ಕೆ ಬುಧವಾರ ಭೇಟಿ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್, ‘ಕೋವಿಡ್ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು. ಅದೇ ರೀತಿ, ಪರೀಕ್ಷೆಗಳ ವರದಿಯನ್ನು 24 ಗಂಟೆಗಳಲ್ಲಿ ಒದಗಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸಂಸ್ಥೆಯ ನಿರ್ದೇಶಕ ಡಾ.ಸಿ. ರಾಮಚಂದ್ರ ಅವರಿಗೆ ಸೂಚಿಸಿದರು.

‘ಕೊರೊನಾಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಹಾಗಾಗಿ ಸೋಂಕು ಶಂಕಿತರ ಗಂಟಲ ದ್ರವದ ಮಾದರಿಗಳ ಪರೀಕ್ಷೆಯ ವರದಿಯನ್ನು ಆದಷ್ಟು ಬೇಗ ನೀಡಬೇಕು. ಆಗ ಅವರೊಂದಿಗೆ ಸಂಪರ್ಕ ಹೊಂದಿದ್ದವರನ್ನು ಪತ್ತೆ ಮಾಡಲುಅನುಕೂಲವಾಗುತ್ತದೆ. ಪರೀಕ್ಷೆಗೆ ಬೇಕಾದ ಸೌಲಭ್ಯಗಳನ್ನು ಸರ್ಕಾರವು ಸಂಸ್ಥೆಗೆ ನೀಡಲಿದೆ’ ಎಂದು ಹೇಳಿದರು.

ಡಾ.ಸಿ. ರಾಮಚಂದ್ರ, ‘ಕೋವಿಡ್ ‍ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಲು 15 ಕಂಪ್ಯೂಟರ್‌ ಹಾಗೂ ದತ್ತಾಂಶ ನಿರ್ವಾಹಕರ ಅವಶ್ಯಕತೆ ಇದೆ’ ಎಂದು ತಿಳಿಸಿದರು. ‘ಶೀಘ್ರದಲ್ಲೇ ಈ ಸೌಲಭ್ಯ ಒದಗಿಸಲಾಗುತ್ತದೆ’ ಎಂದು ಸಚಿವರು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.