ADVERTISEMENT

ಕೋವಿಡ್‌: 28 ಜಿಲ್ಲೆಗಳಲ್ಲಿ ಸಾವಿನ ಪ್ರಮಾಣ ಶೂನ್ಯ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2020, 21:38 IST
Last Updated 29 ಡಿಸೆಂಬರ್ 2020, 21:38 IST
ಕೊರೊನಾ ವೈರಸ್‌(ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌(ಸಾಂದರ್ಭಿಕ ಚಿತ್ರ)   

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಕೋವಿಡ್‌ನಿಂದ ನಾಲ್ವರು ಸಾವಿಗೀಡಾಗಿದ್ದಾರೆ. ಬೆಂಗಳೂರು ನಗರ ಮತ್ತು ಮೈಸೂರು ಜಿಲ್ಲೆ ಹೊರತು ಪಡಿಸಿದರೆ, ಉಳಿದ 28 ಜಿಲ್ಲೆಗಳಲ್ಲಿ ಕೋವಿಡ್‌ ಸಾವು ಪ್ರಕರಣ ವರದಿಯಾಗಿಲ್ಲ.

ಬೆಂಗಳೂರು ಮತ್ತು ಮೈಸೂರಿನಲ್ಲಿ ತಲಾ ಇಬ್ಬರು ಸಾವಿಗೀಡಾಗುವ ಮೂಲಕ, ಕೋವಿಡ್‌ನಿಂದ ಸಾವಿಗೀಡಾದವರ ಒಟ್ಟಾರೆ ಸಂಖ್ಯೆ 12,074ಕ್ಕೆ ಏರಿದೆ. ಹೊಸದಾಗಿ 662 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಸೋಂಕಿತರ ಒಟ್ಟಾರೆ ಸಂಖ್ಯೆ 9.17 ಲಕ್ಷದಷ್ಟಾಗಿದೆ.

ಸೋಂಕಿತರಿಗಿಂತ ಗುಣಮುಖರ ಸಂಖ್ಯೆ ಹೆಚ್ಚಿದ್ದು, 1,344 ಜನ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಈವರೆಗೆ 8.93 ಲಕ್ಷ ಮಂದಿ ಕೋವಿಡ್‌ನಿಂದ ಮುಕ್ತರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಪೈಕಿ 11,861 ಮಂದಿ ಆಸ್ಪತ್ರೆ ಮತ್ತು ಮನೆಗಳಲ್ಲಿ ಚಿಕಿತ್ಸೆ ಹಾಗೂ ಆರೈಕೆಯಲ್ಲಿದ್ದಾರೆ. 206 ರೋಗಿಗಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ADVERTISEMENT

ಗದಗ, ಹಾವೇರಿ ಮತ್ತು ರಾಮನಗರ ಜಿಲ್ಲೆಯಲ್ಲಿ ಹೊಸ ಪ್ರಕರಣ ವರದಿಯಾಗಿಲ್ಲ. ಬೀದರ್, ಕೊಡಗು, ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ಹೊಸದಾಗಿ ತಲಾ 1 ಪ್ರಕರಣಗಳು ಮಾತ್ರ ವರದಿಯಾಗಿವೆ. ಬೆಂಗಳೂರು ನಗರದಲ್ಲಿ ಗರಿಷ್ಠ ಅಂದರೆ 370 ಮಂದಿಗೆ ಸೋಂಕು ದೃಢಪಟ್ಟಿದೆ.

ಡಿ.29ರಂದು 10,155 ಜನರಿಗೆ ಆ್ಯಂಟಿಜೆನ್‌ ಪರೀಕ್ಷೆ ಮಾಡಲಾಗಿದ್ದು, 76,244 ಮಂದಿ ಆರ್‌ಟಿ ಪಿಸಿಆರ್‌ ಪರೀಕ್ಷೆಗೆ ಒಳಗಾಗಿದ್ದಾರೆ. ಒಟ್ಟಾರೆ ಈವರೆಗೆ 1.38 ಕೋಟಿ ಜನ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.